ಕಬ್ಬು ಬೆಳೆಗಾರರ ಬಾಕಿ ಪಾವತಿಸದಿದ್ದರೆ ಹೋರಾಟ: ಕುರುಬೂರು ಶಾಂತಕುಮಾರ್

KannadaprabhaNewsNetwork |  
Published : Oct 30, 2024, 12:42 AM IST
ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರ ಜತೆ ಕುರುಬೂರು ಶಾಂತಕುಮಾರ ಅವರು ಸಭೆ ನಡೆಸಿದರು. | Kannada Prabha

ಸಾರಾಂಶ

ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಮೀಸಲು ಕ್ಷೇತ್ರ ವ್ಯಾಪ್ತಿಯ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು.

ಹಳಿಯಾಳ: ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯವರು ಕಬ್ಬು ಬೆಳೆಗಾರರಿಗೆ ನೀಡಬೇಕಾಗಿದ್ದ ಬಾಕಿ ಹಣವನ್ನು ಪಾವತಿಸದಿದ್ದರೆ ರೈತರು ಬೀದಿಗಿಳಿದು ಹೋರಾಡಬೇಕಾಗುತ್ತದೆ. ಕೂಡಲೇ ಜಿಲ್ಲಾಡಳಿತವು ಬಾಕಿ ಪಾವತಿಸಲು ಸರ್ಕಾರ ಮಾಡಿದ ಆದೇಶವನ್ನು ಅನುಷ್ಠಾನಗೊಳಿಸಬೇಕು ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದರು.ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರನ್ನು ಮಂಗಳವಾರ ಭೇಟಿಯಾದ ಅವರು ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಬಗ್ಗೆ ನಡೆಸಿದ ಸಭೆಯ ಮಾಹಿತಿಯನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದ್ದಾರೆ.ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯ ಮೀಸಲು ಕ್ಷೇತ್ರ ವ್ಯಾಪ್ತಿಯ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯವರು ಕಳೆದ ವರ್ಷ ಕಬ್ಬು ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಹೆಚ್ಚುವರಿಯಾಗಿ ಕಡಿತ ಮಾಡಿದ ಹಣ ಪ್ರತಿ ಟನ್‌ಗೆ ₹119 ಹಾಗೂ ಕಳೆದ ವರ್ಷದ ಉಪ ಉತ್ಪನ್ನಗಳ ಲಾಭ ಪ್ರತಿ ಟನ್‌ಗೆ ₹256ಗಳನ್ನು ಕಬ್ಬು ಬೆಳೆಗಾರರಿಗೆ ಪಾವತಿಸಬೇಕೆಂದು ರಾಜ್ಯ ಸರ್ಕಾರ ಮಾಡಿದ ಆದೇಶದ ಪ್ರತಿಯನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಯಿತು.

ಆದೇಶ ಪ್ರತಿಗಳನ್ನು ಸ್ವೀಕರಿಸಿ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು, ಅ. 30ರಂದು ನಡೆಯಲಿರುವ ಪ್ರಾಥಮಿಕ ಹಂತದ ಸಭೆಯಲ್ಲಿ ಈ ಕುರಿತು ಚರ್ಚಿಸಿ ಕ್ರಮ ಕೈಗೊಳ್ಳುವ ಭರವಸೆಯನ್ನು ನೀಡಿದರು. ಅದಕ್ಕೆ ಪ್ರತಿಕ್ರಿಯಿಸಿದ ರಾಜ್ಯಾಧ್ಯಕ್ಷ ಶಾಂತಕುಮಾರ ಅವರು, ಕಬ್ಬು ಬೆಳೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಹಳಿಯಾಳದಲ್ಲಿಯೇ ಸಭೆ ನಡೆಸಬೇಕೆಂದು ಆಗ್ರಹಿಸಿದರು. ಅದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಮುಂದಿನ ಸಭೆಯನ್ನು ಹಳಿಯಾಳದಲ್ಲಿ ನಡೆಸುವುದಾಗಿ ಭರವಸೆ ನೀಡಿದರು.

ಸಭೆಯಲ್ಲಿ ಧಾರವಾಡ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ಧಾರವಾಡ ಜಿಲ್ಲಾಧ್ಯಕ್ಷ ಮಹೇಶ ಬೆಳಗಾಂವಕರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪರಶುರಾಮ ಎತ್ತಿನಗುಡ್ಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಹತ್ತಳ್ಳಿ ದೇವರಾಜ್ ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ