ಚಲಿಸುತ್ತಿದ್ದ ಶಾಲಾ ಬಸ್ ಮೇಲೆ ಉರುಳಿದ ಮರ : ಬಾಲಕಿ ಮೃತ್ಯು

KannadaprabhaNewsNetwork |  
Published : Jul 23, 2026, 02:45 AM ISTUpdated : Jul 23, 2026, 09:28 AM IST
Bus

ಸಾರಾಂಶ

ಮಾಣಿ ಸಮೀಪದ ಬರಿಮಾರು ಕಲ್ಲೆಟ್ಟಿ ದೈವಸ್ಥಾನದ ಬಳಿ ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಬುಡ ಸಮೇತ ಉರುಳಿ ಬಿದ್ದ ಪರಿಣಾಮ ಸಂಸ್ಥೆಯ ಯುಕೆಜಿ ವಿದ್ಯಾರ್ಥಿನಿ ಮೃತಪಟ್ಟಿದ್ದು, ಇನ್ನಿಬ್ಬರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ

ಬಂಟ್ವಾಳ: ಮಾಣಿ ಸಮೀಪದ ಬರಿಮಾರು ಕಲ್ಲೆಟ್ಟಿ ದೈವಸ್ಥಾನದ ಬಳಿ ಚಲಿಸುತ್ತಿದ್ದ ಖಾಸಗಿ ಶಾಲಾ ಬಸ್ ಮೇಲೆ ಬೃಹತ್ ಗಾತ್ರದ ಮರ ಬುಡ ಸಮೇತ ಉರುಳಿ ಬಿದ್ದ ಪರಿಣಾಮ ಸಂಸ್ಥೆಯ ಯುಕೆಜಿ ವಿದ್ಯಾರ್ಥಿನಿ ಮೃತಪಟ್ಟಿದ್ದು, ಇನ್ನಿಬ್ಬರು ವಿದ್ಯಾರ್ಥಿನಿಯರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಓರ್ವ ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮೃತ ಬಾಲಕಿಯನ್ನು ಪೆರ್ನೆ ನಿವಾಸಿ ಚಂದ್ರಶೇಖರ್ ಅವರ ಪುತ್ರಿ, ಯುಕೆಜಿ ವಿದ್ಯಾರ್ಥಿನಿ ಚಿರನ್ವಿ (5) ಎಂದು ಗುರುತಿಸಲಾಗಿದೆ .

ಗಂಭೀರವಾಗಿ ಗಾಯಗೊಂಡಿರುವ ಪೆರಾಜೆ ಸಾದಿಕುಕ್ಕು ನಿವಾಸಿ ಗಣೇಶ್ ಗೌಡ ಅವರ ಪುತ್ರಿ ಅನ್ವಿ ಅವರನ್ನು ತಕ್ಷಣ ಮಂಗಳೂರಿನ ಎ.ಜೆ. ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಜ್ಞ ವೈದ್ಯರ ಮೇಲ್ವಿಚಾರಣೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನೋರ್ವ ಗಾಯಾಳು ಪೆರ್ನೆ ನಿವಾಸಿ ಕ್ಷಿತಿ ರೈ ಅವರನ್ನು ಕಲ್ಲಡ್ಕದ ಪುಷ್ಪರಾಜ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

ಮಕ್ಕಳನ್ನು ಕರೆದುಕೊಂಡು ಕಲ್ಲಡ್ಕದಿಂದ ಮಾಣಿ, ಅಲ್ಲಿಂದ ಬರಣಿಕೆರೆ, ಬರಿಮಾರು, ಕಲ್ಲೆಟ್ಟಿ ಮಾರ್ಗವಾಗಿ ಬುಡೋಳಿ ಮೂಲಕ ಪೆರ್ನೆಗೆ ತೆರಳುತ್ತಿದ್ದ ಶಾಲಾ ಬಸ್ ಮೇಲೆ, ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬುಡ ಸಮೇತ ಉರುಳಿ ಬಿದ್ದಿದೆ. ಮಳೆಯೊಂದಿಗೆ ಬೀಸಿದ ಬಿರುಗಾಳಿಯ ತೀವ್ರತೆಗೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಮರ ಬಿದ್ದ ರಭಸಕ್ಕೆ ಬಸ್‌ನ ಮೇಲ್ಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕ್ಷಣಾರ್ಧದಲ್ಲೇ ಬಸ್‌ನೊಳಗೆ ಆತಂಕದ ವಾತಾವರಣ ನಿರ್ಮಾಣವಾಯಿತು. ಸ್ಥಳೀಯರು ಕೂಡಲೇ ಧಾವಿಸಿ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಹೊರತೆಗೆದು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.

ಇದೇ ವೇಳೆ ಕಲ್ಲೆಟ್ಟಿ ದೇವಸ್ಥಾನದ ಮೇಲೂ ಬೃಹತ್ ಮರ ಉರುಳಿ ಬಿದ್ದಿದ್ದು, ದೇವಸ್ಥಾನಕ್ಕೂ ಹಾನಿಯಾಗಿದೆ. ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಹಾಗೂ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು. 

ತಹಸೀಲ್ದಾರ್ ಭೇಟಿ

ಸುದ್ದಿ ತಿಳಿಯುತ್ತಿದ್ದಂತೆಯೇ ಬಂಟ್ವಾಳ ತಹಸೀಲ್ದಾರ್ ಜಿ ಮಂಜುನಾಥ್, ಬಂಟ್ವಾಳ ಆರೋಗ್ಯಾಧಿಕಾರಿ ಅಶೋಕ್ ಕುಮಾರ್ ರೈ, ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಪ್ಪ ಬಿ.ಎಲ್. ಪುತ್ತೂರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.  

ಶಾಸಕ ರಾಜೇಶ್ ನಾಯ್ಕ್ ಸ್ಪಂದನೆ: 

 ಘಟನೆ ನಡೆದ ವೇಳೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಬೆಂಗಳೂರಿನಲ್ಲಿ ವಿಧಾನ ಮಂಡಲದ ಹಿಂದುಳಿದ ವರ್ಗಗಳ ಸಮಿತಿ ಸಭೆಯಲ್ಲಿ ಭಾಗವಹಿಸಿದ್ದರು. ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಅಧಿಕಾರಿಗಳು ಹಾಗೂ ವೈದ್ಯರನ್ನು ಸಂಪರ್ಕಿಸಿ ಗಾಯಾಳು ಮಕ್ಕಳಿಗೆ ತುರ್ತು ಚಿಕಿತ್ಸೆ ದೊರೆಯುವಂತೆ ಸೂಚಿಸಿದರು. 

ಶೋಕದ ವಾತಾವರಣ:  

ಈ ದುರಂತದಿಂದ ಪೆರ್ನೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದ್ದು, ಭಾರೀ ಮಳೆ ಮತ್ತು ಬಿರುಗಾಳಿಯ ಸಂದರ್ಭಗಳಲ್ಲಿ ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವು ಕಾರ್ಯಕ್ಕೆ ಆದ್ಯತೆ ನೀಡಬೇಕು ಎಂಬ ಒತ್ತಾಯವೂ ಸಾರ್ವಜನಿಕರಿಂದ ಕೇಳಿಬಂದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಂಡ್ರೆ ಕಮಾಲ್‌
ಮಳೆಗಾಲ ಮುಗಿಯುವ ಮುನ್ನವೇ ಹಲವು ಜಿಲ್ಲೇಲಿ ತಾಪಮಾನ ಏರಿಕೆ