ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಟಿ.ಕಾಗೇಪುರದ ಗೋಕುಲ ವಿದ್ಯಾ ಸಂಸ್ಥೆಯಲ್ಲಿ ಕಲುಷಿತ ಆಹಾರ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥಗೊಂಡು, ವಿದ್ಯಾರ್ಥಿಯೊಬ್ಬ ಮೃತಪಟ್ಟ ಪ್ರಕರಣದ ಹಿನ್ನೆಲೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ವೆಂಕಟೇಶ್ ನೇತೃತ್ವದ ತಂಡ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದರು.ತಾಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ, ಆಸ್ಪತ್ರೆ ಆಡಲಿತಾಧಿಕಾರಿ ಡಾ.ಸಂಜಯ್ ಹಾಗೂ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಿದ ನಂತರ ಆಯೋಗದ ಸದಸ್ಯ ವೆಂಕಟೇಶ್ ಮಾತನಾಡಿ, ನೋಂದಣಿಯಾಗದ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.
ಮೃತಪಟ್ಟ ವಿದ್ಯಾರ್ಥಿ ಹೊರ ರಾಜ್ಯದವನಾಗಿದ್ದು, ಶಿಕ್ಷಣ ಸಂಸ್ಥೆ ನಿರ್ಲಕ್ಷ್ಯ, ಊಟ ನೀಡಿದ್ದ ಉದ್ಯಮಿ, ತಯಾರಿಸಿದ್ದ ವ್ಯಕ್ತಿ ಸೇರಿದಂತೆ ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮವಾಗಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಅಧಿಕಾರಿಗಳ ಜಾಗೃತಿ ವಹಿಸಬೇಕು. ಘಟನೆ ಕುರಿತು ಸಮಗ್ರ ಪರಿಶೀಲಿಸಿ ಮಾಹಿತಿ ಪಡೆದು ಸರ್ಕಾರಕ್ಕೆ ವರದಿ ನೀಡಲಾಗುವುದು ಎಂದರು.ಈ ವೇಳೆ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಶ್ಮಿ, ರಾಜೇಂದ್ರ ಇದ್ದರು.
6 ಮಂದಿ ವಿರುದ್ಧ ಪ್ರಕರಣ ದಾಖಲು, ಮೂವರ ಬಂಧನಮಳವಳ್ಳಿ: ವಿಷಪೂರಿತ ಊಟ ಸೇವಿಸಿ ಓರ್ವ ವಿದ್ಯಾರ್ಥಿ ಮೃತಪಟ್ಟು, 29ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಹಿನ್ನೆಲೆಯಲ್ಲಿ ಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 6 ಮಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಘಟನೆ ಸಂಬಂಧ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಈ.ಉಮಾ ನೀಡಿರುವ ದೂರಿನ ಸಂಬಂಧ ಊಟ ತಯಾರಿಸಿದ ಹೋಟೆಲ್ ಮಾಲೀಕ ಸಿದ್ದರಾಜು, ಊಟ ತಯಾರಿಸಲು ಹೇಳಿದ್ದ ಉದ್ಯಮಿ ಪುಷ್ಪೇಂದ್ರ ಕುಮಾರ್, ಗೋಕುಲ ವಿದ್ಯಾಸಂಸ್ಥೆಯ ಲಂಕೇಶ್, ಜಗದೀಶ್, ಅಭಿಷೇಕ್, ಮದನ್ ಸಮುದಾಯದ ಭವನದ ಕೃಷ್ಣ ವಿರುದ್ಧ ಎಫ್ಐಆರ್ ದಾಖಲಾಗಿದೆ.