ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ 10 ದಿನ ಕಳೆದರೂ ಇನ್ನೂ ಆತನ ಸುಳಿವು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಆತನ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದು, ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಮಂಗಳೂರು
ಬಂಟ್ವಾಳ ತಾಲೂಕು ಫರಂಗಿಪೇಟೆಯ ವಿದ್ಯಾರ್ಥಿ ದಿಗಂತ್ ನಾಪತ್ತೆಯಾಗಿ 10 ದಿನ ಕಳೆದರೂ ಇನ್ನೂ ಆತನ ಸುಳಿವು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಆತನ ಪೋಷಕರು ಹೈಕೋರ್ಟ್ ಮೊರೆ ಹೋಗಿದ್ದು, ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದಾರೆ.
ನಿಗೂಢ ರೀತಿಯಲ್ಲಿ ದಿಗಂತ್ ನಾಪತ್ತೆಯಾಗಿದ್ದು, ಆತನನ್ನು ಪತ್ತೆ ಮಾಡಿಕೊಡಲು ಪೊಲೀಸರಿಗೆ ನಿರ್ದೇಶನ ನೀಡುವಂತೆ ಕೋರಿ ಆತನ ತಂದೆ ಪದ್ಮನಾಭ್ ಅವರು ಅರ್ಜಿ ಸಲ್ಲಿಸಿದ್ದರು.
ಹೈಕೋರ್ಟ್‌ನ ದ್ವಿಸದಸ್ಯ ವಿಭಾಗೀಯ ಪೀಠದಲ್ಲಿ ಜಸ್ಟೀಸ್ ವಿ.ಕಾಮೇಶ್ವರ್ ರಾವ್ ಹಾಗೂ ಜಸ್ಟೀಸ್ ಟಿ.ಎಂ. ನಡಾಫ್ ಇವರ ವಿಭಾಗೀಯ ಪೀಠ ವಿಚಾರಣೆಗೆ ಕೈಗೆತ್ತಿಕೊಂಡಿದೆ. ಮಾ. 12 ರ ಒಳಗೆ ತನಿಖಾ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಪೀಠ ಪೊಲೀಸರಿಗೆ ಆದೇಶ ನೀಡಿದ್ದು, ಮುಂದಿನ ವಿಚಾರಣೆಯನ್ನು ಮಾ.13ಕ್ಕೆ ಮುಂದೂಡಿದೆ.
ನಾಪತ್ತೆಯಾದ ಸಂದರ್ಭದಲ್ಲಿ ಪೊಲೀಸರು ದೂರು ಸ್ವೀಕರಿಸಿ ತಕ್ಷಣವೇ ಕ್ರಮ ಕೈಗೊಳ್ಳದ ಬಗ್ಗೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಆರಂಭದಲ್ಲೇ ಸರಿಯಾದ ನಿಟ್ಟಿನಲ್ಲಿ ತನಿಖೆ ಆರಂಭಿಸದ ಪೊಲೀಸರು ದಿಗಂತ್ ಪತ್ತೆಗೆ ಅವಕಾಶ ಇದ್ದ ಅಮೂಲ್ಯ ಸಮಯವನ್ನು ಹಾಳು ಮಾಡಿದ್ದಾರೆ. ಮಾರ್ಚ್ 1 ರಂದು ಫರಂಗಿಪೇಟೆ ಬಂದ್ ಮಾಡಿದ ಬಳಿಕ ಏಳು ತನಿಖಾ ತಂಡಗಳನ್ನು ರಚಿಸಿ ತನಿಖೆ ಆರಂಭಿಸಿದ್ದಾಗಿ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಬಂಟ್ವಾಳ ತಾಲೂಕಿನ ಫರಂಗಿಪೇಟೆ ಕಿದೆಬೆಟ್ಟು ನಿವಾಸಿ ದಿಗಂತ್ ಫೆ. 25ರ ಸಂಜೆಯಿಂದ ನಾಪತ್ತೆಯಾಗಿದ್ದಾನೆ. ಫರಂಗಿಪೇಟೆ ಆಂಜನೇಯ ವ್ಯಾಯಮ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋಗಿದ್ದ ದಿಗಂತ್, ದೇವಸ್ಥಾನಕ್ಕೂ ಹೋಗದೆ ಮನೆಗೂ ಬಾರದೆ ನಾಪತ್ತೆಯಾಗಿದ್ದ. ಫರಂಗಿಪೇಟೆಯ ರೈಲ್ವೆ ಹಳಿಯಲ್ಲಿ ದಿಗಂತ್ ಚಪ್ಪಲಿ ಹಾಗೂ ಮೊಬೈಲ್ ಪತ್ತೆಯಾಗಿತ್ತು. ಒಂದು ಚಪ್ಪಲಿಯಲ್ಲಿ ರಕ್ತದ ಕಲೆ ಕಂಡುಬಂದಿರುವುದು ಸಾಕಷ್ಟು ಅನುಮಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ವೈಫಲ್ಯ ಖಂಡಿಸಿ ಇತ್ತೀಚೆಗೆ ಫರಂಗಿಪೇಟೆಯಲ್ಲಿ ಪ್ರತಿಭಟನೆಯೂ ನಡೆದಿತ್ತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.