ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆಕೋರನನ್ನು ಗಲ್ಲಿಗೇರಿಸಿ: ಆಕ್ರೋಶ

KannadaprabhaNewsNetwork |  
Published : Apr 21, 2024, 02:17 AM ISTUpdated : Apr 21, 2024, 02:18 AM IST
20ಕೆಎಂಎನ್‌ಡಿ-4ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು.  | Kannada Prabha

ಸಾರಾಂಶ

ಹತ್ಯೆಯಾದ ವಿದ್ಯಾರ್ಥಿನಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯ ನಿರಂಜನಯ್ಯ ಹಿರೇಮಠ ಪುತ್ರಿಯಾಗಿದ್ದು, ಅಧಿಕಾರಸ್ಥರ ಮಕ್ಕಳಿಗೆ ಹೀಗಾದರೆ ಇನ್ನು ಸಾಮಾನ್ಯರ ಗತಿ ಏನು, ಇಲ್ಲಿ ಯಾರು ಸುರಕ್ಷಿತವಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಮೆರವಣಿಗೆ ಹೊರಟ ಜಾಗೃತ ಹಿಂದೂ ವೇದಿಕೆ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಹಾಗೂ ಬಿಜೆಪಿ ಪಕ್ಷದ ಕಾರ್ಯಕರ್ತರು ‘ಜಸ್ಟಿಸ್ ಫಾರ್ ನೇಹಾ’ ಘೋಷಣೆ ಕೂಗುತ್ತಾ ಸಾಗಿದರು.

ಕಾಂಗ್ರೆಸ್ ಸರ್ಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಜಿ ಪರಮೇಶ್ವರ್ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾವಣೆಗೊಂಡರು.

ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣಕ್ಕೆ ಆಕ್ರೋಶ ವ್ಯಕ್ತಪಡಿಸಿ ವೈಯಕ್ತಿಕ ಕಾರಣದಿಂದ ವಿದ್ಯಾರ್ಥಿನಿ ನೇಹಾ ಹತ್ಯೆಯಾಗಿದೆ ಎಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಇದು ಲವ್ ಜೆಹಾದ್ ಅಲ್ಲ, ಇಂತಹ ಘಟನೆಗಳು ಆಕಸ್ಮಿಕವಾಗಿ ನಡೆಯುತ್ತವೆ ಎಂದಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿರುದ್ಧ ಕಿಡಿಕಾರಿದರು.

ಕಾಂಗ್ರೆಸ್ ಸರ್ಕಾರದ ಅತಿಯಾದ ಮುಸ್ಲಿಂ ಓಲೈಕೆಯಿಂದಲೇ ಜೆಹಾದಿ ಕೃತ್ಯ ಹೆಚ್ಚಾಗುತ್ತಿದೆ, ಸಮಾಜಘಾತಕ ಶಕ್ತಿಗಳಿಗೆ ಪೊಲೀಸ್‌ ಠಾಣೆಗಳಲ್ಲಿ ರಾಜಮರ್ಯಾದೆ ಸಿಗುತ್ತಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿರುವುದಕ್ಕೆ ಈ ಪ್ರಕರಣವೇ ಸಾಕ್ಷಿ ಎಂದು ಆರೋಪಿಸಿದರು.

ಹತ್ಯೆಯಾದ ವಿದ್ಯಾರ್ಥಿನಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಕಾಂಗ್ರೆಸ್‌ ಸದಸ್ಯ ನಿರಂಜನಯ್ಯ ಹಿರೇಮಠ ಪುತ್ರಿಯಾಗಿದ್ದು, ಅಧಿಕಾರಸ್ಥರ ಮಕ್ಕಳಿಗೆ ಹೀಗಾದರೆ ಇನ್ನು ಸಾಮಾನ್ಯರ ಗತಿ ಏನು, ಇಲ್ಲಿ ಯಾರು ಸುರಕ್ಷಿತವಾಗಿದ್ದಾರೆ ಎಂದು ಪ್ರಶ್ನಿಸಿದರು.

ಫಯಾಜ್ ನಿಜವಾಗಿಯೂ ಪ್ರೀತಿ ಮಾಡುತ್ತಿದ್ದರೆ ಇಂತ ದುಷ್ಕೃತ್ಯಕ್ಕೆ ಕೈಹಾಕುತ್ತಿರಲಿಲ್ಲ. ಪ್ರೀತಿ, ಪ್ರೇಮದ ಬಲೆ ಬೀಸಿ ಹಿಂದು ಯುವತಿಯರನ್ನು ಜಾಲಕ್ಕೆ ಸಿಲುಕಿಸುವ ಪ್ರಸಂಗಗಳು ಆಗಾಗ ನಡೆಯುತ್ತಿವೆ. ಅದರಂತೆ ನೇಹಾ ಪ್ರಕರಣವೂ ಲವ್ ಜಿಹಾದ್‌ನಂತೆ ಗೋಚರಿಸುತ್ತಿದೆ. ಹಾಗಾಗಿ, ಸೂಕ್ತ ತನಿಖೆ ನಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ರಾಜ್ಯದಲ್ಲಿ ಇಂತಹ ಹತ್ಯೆಗಳು ನಡೆಯಬಾರದು. ಮತ್ತೆ ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು. ನೇಹಾ ಕೊಲೆ ಮಾಡಿದ ಆರೋಪಿಯನ್ನು ಗಲ್ಲು ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕಿ ಸುಗುಣ, ಸುಶ್ಮಿತಾ, ಉಲ್ಲಾಸ್, ಜಾಗೃತ ಹಿಂದೂ ವೇದಿಕೆಯ ಸುರೇಶ್,ಎಂ ವಸಂತ್ ಕುಮಾರ್ ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮುಖಂಡರಾದ ಅಬ್ಬಾಸ್ ಆಲಿ ಬೋಹ್ರಾ,ಉಮೇಶ್, ಇಂಡುವಾಳು ಸಚ್ಚಿದಾನಂದ, ಅರವಿಂದ್, ಸಿ.ಟಿ ಮಂಜುನಾಥ್,ಬಿ.ಟಿ ಶಿವಲಿಂಗಯ್ಯ, ನಿತ್ಯಾನಂದ ನೇತೃತ್ವ ವಹಿಸಿದ್ದರು.

PREV

Recommended Stories

ಮಾನಸಿಕ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವ 970 ಮಿಲಿಯನ್ ಜನರು
ಅಪ್ರಾಪ್ತೆ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಜೈಲು