ವಿದ್ಯಾರ್ಥಿಗಳು ಜ್ಞಾನದ ಕೋಟೆ ನಿರ್ಮಿಸಿಕೊಳ್ಳಿ: ಎಸ್ಪಿ ನಿಖಿಲ್

KannadaprabhaNewsNetwork |  
Published : Feb 23, 2024, 01:46 AM IST
22ಕೆಪಿಆರ್‌ಸಿಆರ್‌01: | Kannada Prabha

ಸಾರಾಂಶ

ರಾಯಚೂರಿನ ಕೃಷಿ ವಿಜ್ಞಾನಗಳ ವಿವಿಯ ಪ್ರೇಕ್ಷಾಗೃಹದಲ್ಲಿ ಬೃಹತ್ ವೃತ್ತಿ ಮಾರ್ಗದರ್ಶನ, ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಕುರಿತು ಮಾಹಿತಿ ಕಾರ್ಯಗಾರಕ್ಕೆ ಎಸ್ಪಿ ನಿಖಿಲ್‌ ಬಿ. ಚಾಲನೆ ನೀಡಿದರು.

ಕನ್ನಡಪ್ರಭ ವಾರ್ತೆ ರಾಯಚೂರು

ಜ್ಞಾನದಿಂದ ಮಾತ್ರ ಯಶಸ್ಸನ್ನು ಸಾಧಿಸಲು ಸಾಧ್ಯವಾಗುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಜ್ಞಾನದ ಕೋಟೆ ನಿರ್ಮಿಸಿಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್.ಬಿ ಹೇಳಿದರು.

ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ಸೆಂಟರ್ ಫಾರ್ ಎಂಪ್ಲಾಯಿಮೆಂಟ್, ಅಪರ್ಚ್ಯೂನಿಟಿಸ್ ಆ್ಯಂಡ್ ಲರ್ನಿಂಗ್ ಸಂಸ್ಥೆಯ ವತಿಯಿಂದ ಗುರುವಾರ ಜಿಲ್ಲೆಯ ಪದವಿ ವಿದ್ಯಾರ್ಥಿಗಳಿಗಾಗಿ ಹಾಗೂ ಉದ್ಯೋಗಾಕಾಂಕ್ಷಿಗಳಿಗಾಗಿ ಎರಡು ದಿನಗಳ ಕಾಲ ಹಮ್ಮಿಕೊಂಡಿರುವ ಬೃಹತ್ ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವ ತಯಾರಿ ಮಾಹಿತಿ ಕಾರ್ಯಗಾರವನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳು ಪಠ್ಯಕ್ರಮ, ಪ್ರಶ್ನೆ ಪತ್ರಿಕೆ, ದಿನಪತ್ರಿಕೆಗಳನ್ನು ಓದುವುದು, ತಂದೆ ತಾಯಿಯರ ಪ್ರೋತ್ಸಾಹ ಮತ್ತು ಮಾನವೀಯತೆಯಿಂದ ವಿದ್ಯಾರ್ಥಿಗಳು ತಮ್ಮ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ಜ್ಞಾನವನ್ನು ಯಾರಿಂದಲೂ ಕಸಿದುಕೊಳ್ಳಲು ಸಾಧ್ಯವಿಲ್ಲ ಅಂತಹ ಜ್ಞಾನದ ಕೋಟೆಯನ್ನು ಜೀವನದಲ್ಲಿ ಕಟ್ಟಿಕೊಂಡಾಗ ಯಶಸ್ಸನ್ನು ಪಡೆಯಲು ಸಾಧ್ಯವಾಗುತ್ತದೆ ಎಂದರು.

ಪ್ರಸ್ತುತ ದಿನಮಾನಗಳಲ್ಲಿ ಮಾನವೀಯತೆಯ ಮೌಲ್ಯಗಳು ಕಾಣೆಯಾಗಿದ್ದು, ಅನ್ಯಾಯ, ಮೋಸ ವಂಚನೆಗಳು ಹೆಚ್ಚಾಗಿವೆ. ವಿದ್ಯಾರ್ಥಿಗಳು ಈ ಎಲ್ಲಾ ಕೆಟ್ಟ ವಿಚಾರಗಳನ್ನು ತೊಲಗಿಸುವಲ್ಲಿ ಮತ್ತು ಜೀವನದಲ್ಲಿ ಉತ್ತಮ ಮಾನವೀಯ ಮೌಲ್ಯಗಳನ್ನು ಹೆಚ್ಚಿಸಿಕೊಂಡು ಮುಂಬರುವ ಪರೀಕ್ಷಾ ತಯಾರಿಗಳಿಗೆ ಹಮ್ಮಿಕೊಂಡಿರುವ ಈ ಕಾರ್ಯಾಗಾರವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಇದೇ ವೇಳೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ತುಕಾರಾಮ ಪಾಂಡ್ವೆ ಅವರು ಮಾತನಾಡಿ, ಪ್ರಸ್ತುತ ಜಗತ್ತಿನಲ್ಲಿ ತಂತ್ರಜ್ಞಾನ ಅತ್ಯಂತ ವೇಗವಾಗಿ ಮುಂದುವರಿಯುತ್ತಿದ್ದು, ವಿದ್ಯಾರ್ಥಿಗಳು ತಂತ್ರಜ್ಞಾನವನ್ನು ಸರಿಯಾದ ರೀತಿಯಲ್ಲಿ ಉಪಯೋಗ ಮಾಡಿಕೊಳ್ಳುವ ಮೂಲಕ ಅಭ್ಯಾಸದಲ್ಲಿ ಹೆಚ್ಚಿನ ಗಮನ ಹರಿಸುವಂತೆ ಹೇಳಿದರು.

ಈ ಸಂದರ್ಭದಲ್ಲಿ ಪ್ರೊಬೆಷನರಿ ಐಎಎಸ್ ಅಧಿಕಾರಿ ಸಾಹಿತ್ಯ ಆಲದಕಟ್ಟಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ರಾಜೇಂದ್ರ ಜಲ್ದಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಾ.ವಾಲ್ಮೀಕಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಸಂಗಮೇಶ್ವರ, ಕೌಶಲ್ಯಾಭಿವೃದ್ಧಿ ಅಧಿಕಾರಿ ಜಿ.ಯು ಹುಡೇದ್, ಧಾರವಾಡದ ವಾರಿಯರ್ಸ್ ಅಕಾಡೆಮಿಯ ಮಾಜಿ ಸೈನಿಕ ಮಂಜುನಾಥ.ಎಚ್.ಎಸ್, ಕಾಲೇಜು ಶಿಕ್ಷಣ ಇಲಾಖೆಯ ವಿಶೇಷಾಧಿಕಾರಿಗಳು ಹಾಗೂ ಸಾಧನಾ ಅಕಾಡೆಮಿಯ ವಿಷಯ ತಜ್ಞರಾದ ಮಂಜುನಾಥ.ಬಿ, ಮಹತ್ವಾಕಾಂಕ್ಷೆ ಜಿಲ್ಲೆಯ ಕಾರ್ಯಕ್ರಮ ಅಧಿಕಾರಿ ಯೂಸೂಫ್ ಅಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ