ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ-ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆ
ವಿದ್ಯಾರ್ಥಿಗಳು ದೇಶದ ಭವಿಷ್ಯ. ವಿದ್ಯಾರ್ಜನೆಯ ಸಮಯ ಅಮೂಲ್ಯವಾದದ್ದು. ಸಮಯಪ್ರಜ್ಞೆ ಮತ್ತು ಶಿಸ್ತನ್ನು ಪಾಲಿಸುವುದು ವಿದ್ಯಾರ್ಥಿಗಳಿಗೆ ಅತ್ಯಗತ್ಯ ಎಂದು ಕೊಪ್ಪಳ ನಗರ ಠಾಣೆಯ ಪೊಲೀಸ್ ಇನ್‌ಸ್ಪೆಕ್ಟರ್ ಜಯಪ್ರಕಾಶ್ ಹೇಳಿದರು.
ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಒಳ ಆವರಣದಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಯ ಅಂಗವಾಗಿ ನಡೆದ ವಿಶೇಷ ಅರಿವಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಬಹುತೇಕರು ಮಾದಕ ವಸ್ತುಗಳ ಸೇವನೆಯಂತಹ ದುಶ್ಚಟಗಳಿಗೆ ಬಲಿಯಾಗುತ್ತಾರೆ. ಇದರಿಂದ ಅವರ ಭವಿಷ್ಯ ಅತಂತ್ರವಾಗಿ ಕಳ್ಳತನ ಮುಂತಾದ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುತ್ತಾರೆ. ಇದರೊಂದಿಗೆ ಕುಟುಂಬದ ಹಾಗೂ ಸಮಾಜದ ಸ್ವಾಸ್ಥ್ಯ ಹಾಳಾಗುತ್ತದೆ. ಇಂಥ ಕೃತ್ಯಗಳ ಕಡಿವಾಣಕ್ಕೆ ಬಲಿಷ್ಠ ಕಾನೂನಿದೆ ಎಂದು ತಿಳಿವಳಿಕೆ ಮೂಡಿಸಿದರು.
ಕಾಲೇಜಿನ ಆಂತರಿಕ ದೂರುಗಳ ಸಮಿತಿಯ ಆಶಯದಂತೆ ವಿದ್ಯಾರ್ಥಿನಿಯರಿಗೆ ಅಪರಿಚಿತ ಸಂಖ್ಯೆಗಳಿಂದ ಕರೆಗಳನ್ನು ಅಥವಾ ಸಂದೇಶಗಳನ್ನು ಮಾಡಿದರೆ ಅಂತವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ತಿಮ್ಮಾರೆಡ್ಡಿ ಮೇಟಿ ಮಾತನಾಡಿ, ಮಾದಕ ದ್ರವ್ಯಗಳ ಸೇವನೆಯಂತಹ ದುಶ್ಚಟಗಳು ಇಂದು ಜಾಗತಿಕ ಸಮಸ್ಯೆ ಆಗಿದೆ. ವಿದ್ಯಾರ್ಥಿಗಳು ಭವಿಷ್ಯದ ದಿನಗಳನ್ನು ಗಮನದಲ್ಲಿ ಇಟ್ಟುಕೊಂಡು ಇತರರಿಗೆ ಮಾದರಿಯಾಗುವಂಥ ಕಾರ್ಯಗಳಲ್ಲಿ ತೊಡಗಬೇಕು ಎಂದು ಕರೆ ನೀಡಿದರು.