ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ

KannadaprabhaNewsNetwork |  
Published : Sep 02, 2025, 12:00 AM IST
ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲಗಳನ್ನು ನಿವಾರಿಸಬೇಕು ಎಂದು ಒತ್ತಾಯಿಸಿ ಬಳ್ಳಾರಿಯ ರೇಡಿಯೋಪಾರ್ಕ್ ಪ್ರದೇಶದಲ್ಲಿರುವ ಚೆಂಗಾರೆಡ್ಡಿ ಗಾಲಿ ರುಕ್ಮಣಮ್ಮ ಸರ್ಕಾರಿ ವಾಣಿಜ್ಯ ಪದವಿ ಕಾಲೇಜು ಮುಂಭಾಗ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ನಿವಾರಿಸಬೇಕು ಎಂದು ಒತ್ತಾಯಿಸಿ ನಗರದ ಚೆಂಗಾರೆಡ್ಡಿ ಗಾಲಿ ರುಕ್ಮಣಮ್ಮ ಸರ್ಕಾರಿ ವಾಣಿಜ್ಯ ಪದವಿ ಕಾಲೇಜು ಮುಂಭಾಗ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಬಳ್ಳಾರಿ

ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ನಿವಾರಿಸಬೇಕು ಎಂದು ಒತ್ತಾಯಿಸಿ ನಗರದ ಚೆಂಗಾರೆಡ್ಡಿ ಗಾಲಿ ರುಕ್ಮಣಮ್ಮ ಸರ್ಕಾರಿ ವಾಣಿಜ್ಯ ಪದವಿ ಕಾಲೇಜು ಮುಂಭಾಗ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ರಾಜ್ಯಾದ್ಯಂತ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಇಲ್ಲಿಯವರೆಗೂ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರಿಲ್ಲ. ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು, ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ.

ಮುಂದಿನ ತಿಂಗಳು ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ಪಾಠಗಳು ಇನ್ನೂ ಆರಂಭವಾಗಿಲ್ಲ. ಯುಜಿಸಿಯ ಹೊಸ ನಿರ್ದೇಶನಗಳು ಹಾಗೂ ಕೋರ್ಟ್‌ನಲ್ಲಿ ನಡೆಯುತ್ತಿರುವ ಮೊಕದ್ದಮೆಯಿಂದ ಅತಿಥಿ ಉಪನ್ಯಾಸಕರ ನೇಮಕಾತಿಯು ನನೆಗುದಿಗೆ ಬಿದ್ದಿದೆ. ಶೈಕ್ಷಣಿಕ ವಿಷಯಗಳಲ್ಲಿ ರಾಜ್ಯ ಸರ್ಕಾರವು ಕೇಂದ್ರದ ನಿರ್ಧಾರಗಳನ್ನು ಪಾಲಿಸುವುದು ಕಡ್ಡಾಯವಲ್ಲ ಎಂದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶನವಿದೆ. ಇದಕ್ಕೆ ಅನುಗುಣವಾಗಿ ರಾಜ್ಯ ಸರ್ಕಾರವು ವಿದ್ಯಾರ್ಥಿಗಳ ಶೈಕ್ಷಣಿಕ ಹಿತಾಸಕ್ತಿಗೆ ಪೂರಕವಾದ ಸ್ಪಷ್ಟ ನಿಲುವು ತಾಳಬೇಕು. ಇಂತಹ ಪರಿಸ್ಥಿತಿಯಲ್ಲಿ, ರಾಜ್ಯ ಸರ್ಕಾರವು ಶೈಕ್ಷಣಿಕ ಚಟುವಟಿಕೆಗಳು ಸರಾಗವಾಗಿ ನಡೆಯುವ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ತುರ್ತಾಗಿ ಕೈಗೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲವನ್ನು ಪರಿಹರಿಸಬೇಕು ಎಂದು ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆಯ ರಾಜ್ಯ ಖಜಾಂಚಿ ಸುಭಾಷ್‌ ಬಿ.ಜಿ. ಆಗ್ರಹಿಸಿದರು.

ರಾಜ್ಯ ಸರ್ಕಾರ ನಾಡಿನ ಎಲ್ಲ ಪದವಿ ಕಾಲೇಜುಗಳಲ್ಲಿನ ಅತಿಥಿ ಉಪನ್ಯಾಸಕರನ್ನು ಕೂಡಲೇ ನೇಮಕ ಮಾಡಿಕೊಳ್ಳಬೇಕು. ಸರ್ಕಾರಿ ಕಾಲೇಜುಗಳಿಗೆ ಅಗತ್ಯ ಇರುವ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಗ್ರಾಮೀಣ ಭಾಗದಿಂದ ಬರುವ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಕಲ್ಪಿಸಬೇಕು. ಗ್ರಾಮೀಣದಿಂದ ಬರುವ ವಿದ್ಯಾರ್ಥಿಗಳಿಗೆ ಬಸ್‌ ಸಮಸ್ಯೆ ಎದುರಾಗಿದ್ದು, ಸಾರಿಗೆ ಸಮಸ್ಯೆಯನ್ನು ನೀಗಿಸುವ ಕುರಿತು ಪೂರಕ ನಿರ್ಧಾರ ತೆಗೆದುಕೊಳ್ಳಬೇಕು. ಸರ್ಕಾರ ಅತಿಥಿ ಉಪನ್ಯಾಸಕರ ನೇಮಕ ಸೇರಿದಂತೆ ಸಂಘಟನೆಯ ಬೇಡಿಕೆಗಳ ಈಡೇರಿಕೆಯತ್ತ ಗಮನ ಹರಿಸದೇ ಹೋದರೆ ರಾಜ್ಯಮಟ್ಟದಲ್ಲಿ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುವುದು. ರಾಜ್ಯ ಸರ್ಕಾರದ ಶೈಕ್ಷಣಿಕ ನಿರ್ಲಕ್ಷ್ಯ ವಿರುದ್ಧ ಜನಾಂದೋಲನ ನಡೆಸಲಾಗುವುದು ಎಂದು ಎಚ್ಚರಿಸಿದರು.ಸಂಘಟನೆಯ ಜಿಲ್ಲಾಧ್ಯಕ್ಷ ಕೆ.ಈರಣ್ಣ, ಜಿಲ್ಲಾ ಪ್ರಮುಖರಾದ ನರೇಂದ್ರ, ಭೀಮಣ್ಣ, ರಾಘವೇಂದ್ರ, ಸೋಮಶೇಖರ್, ಅನುಪಮಾ, ಮಹೇಶ್ವರಿ, ರಾಗಿಣಿ, ಅನುವಂದಿತಾ, ಮೋಹನಕುಮಾರಿ ಸೇರಿದಂತೆ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಂಘಟನೆಯ ಸದಸ್ಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

PREV

Recommended Stories

ಪಕ್ಷದ ಗೆಲುವಿಗೆ ಕಾರ್ಯಕರ್ತೆಯರು ಶ್ರಮಿಸಿ
ಪ್ರತಿಮೆ ಭಗ್ನಗೊಳಿಸಿದ ಕಿಡಿಗೇಡಿಗಳಿಗೆ ಉಗ್ರ ಶಿಕ್ಷೆ ವಿಧಿಸಿ