ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಶಕ್ತಿ ಯೋಜನೆ ಜಾರಿ ಬಳಿಕ ಉಚಿತ ಬಸ್ ಪ್ರಯಾಣದ ಬಿಸಿ ವಿದ್ಯಾರ್ಥಿಗಳಿಗೆ ಸಾಕಷ್ಟು ಬಾರಿ ತಟ್ಟಿದೆ. ಈ ಬಸ್ ಸಮಸ್ಯೆಯಿಂದ ರೋಸಿಹೋದ ವಿದ್ಯಾರ್ಥಿಗಳು ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಚಿಕ್ಕಬಳ್ಳಾಪುರದತ್ತ ಸಂಚರಿಸುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಗಳನ್ನು ತಡೆದು ಪ್ರತಿಭಟನೆ ಮಾಡಿದರು. ನಮಗೆ ಸಮರ್ಪಕ ಬಸ್ ಸೇವೆ ನೀಡಬೇಕೆಂದು ಒತ್ತಾಯಿಸಿ, ಬೇಕೇ ಬೇಕು ಬಸ್ ಬೇಕು ಎಂದು ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಸಾಥ್ ನೀಡಿದರು.
ತರಗತಿಗೆ ತೆರಳಲು ವಿಳಂಬಈ ವೇಳೆ ಮಾತನಾಡಿದ ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಲ್ಲಿ ಬಸ್‌ಗಳ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಅದರಲ್ಲೂ ಪ್ರತಿನಿತ್ಯ ಶಾಲೆ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳಿಗೆ ಬಸ್ ಸಮಸ್ಯೆಯಾದರೆ ಅವರು ತರಗತಿಗೂ ಹೋಗುವುದಾದೂ ಹೇಗೆ. ಅದೇ ರೀತಿ ಸಾರ್ವಜನಿಕರಿಗೂ ಅದರಲ್ಲೂ ವಯೋ ವೃದ್ಧರು ಆಸ್ಪತ್ರೆಗೆ ತೆರಳಲು ಸಮಸ್ಯೆ ಎದುರಾಗಿದೆ ಎಂದರು.
ವಿದ್ಯಾರ್ಥಿಗಳ ಮನವೊಲಿಕೆಗೆ ಯತ್ನ
ಸ್ಥಳಕ್ಕೆ ಆಗಮಿಸಿದ ಪೊಲೀಸರು, ಸಾರಿಗೆ ಬಸ್ಸುಗಳನ್ನು ತಡೆದು ಪ್ರತಿಭಟನೆ ನಡೆಸಬಾರದೆಂದು ಎಚ್ಚರಿಕೆ ನೀಡಿದರು. ಆದರೂ ಪೊಲೀಸರ ಎಚ್ಚರಿಕೆಗೆ ಜಗ್ಗದ ವಿದ್ಯಾರ್ಥಿಗಳು, ರಾಷ್ಟ್ರೀಯ ಹೆದ್ದಾರಿ 44 ರಲ್ಲಿ 10ಮಕ್ಕೂ ಹೆಚ್ಚು ಸಾರಿಗೆ ಬಸ್ ಗಳ ತಡೆದು ಪ್ರತಿಭಟನೆ ಮುಂದುವರೆಸಿದರು. ಬಳಿಕ ಸ್ಥಳಕ್ಕೆ ಬಂದ ಸಾರಿಗೆ ಅಧಿಕಾರಿಗಳು ಮತ್ತು ಪೊಲೀಸರು ವಿದ್ಯಾರ್ಥಿಗಳ ಮನವೊಲಿಸುವಲ್ಲಿ ಯಶಸ್ವಿಯಾದರು.