ಕನ್ನಡಪ್ರಭ ವಾರ್ತೆ ಶಿಕಾರಿಪುರ
ವಿದ್ಯಾರ್ಥಿ ಜೀವನದಲ್ಲಿಯೇ ಕೌಶಲ್ಯಗಳನ್ನು ಬೆಳೆಸಿಕೊಂಡಾಗ ಭವಿಷ್ಯದಲ್ಲಿ ಬದುಕು ಉಜ್ವಲವಾಗಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದರು.ಶುಕ್ರವಾರ ಪಟ್ಟಣದ ಕುಮದ್ವತಿ ಕೇಂದ್ರೀಯ ಸಭಾಂಗಣದಲ್ಲಿ ಕುಮದ್ವತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಮತ್ತು ರ್‍ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸಂಪನ್ಮೂಲ ವ್ಯಕ್ತಿಗಳಿಂದ ಪುನಶ್ಚೇತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿ,
ಭಾರತದಲ್ಲಿ ಉದ್ಯೋಗದ ಸಮಸ್ಯೆ ತೀವ್ರವಾಗಿದ್ದು, ಸಮಸ್ಯೆ ಮೆಟ್ಟಿ ನಿಲ್ಲಲು ವಿದ್ಯಾರ್ಥಿಗಳು ಕೌಶಲ್ಯಗಳನ್ನು ಬೆಳೆಸಿಕೊಂಡಾಗ ಮಾತ್ರ ಪರಿಹಾರ ಕಾಣಲು ಸಾಧ್ಯ ಎಂದರು.ಮುಖ್ಯ ಅತಿಥಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಿ.ಕೃಷ್ಣಪ್ಪ ಮಾತನಾಡಿ, ವಿದ್ಯಾರ್ಥಿ ಜೀವನದಲ್ಲಿ ಪ್ರತಿಭಾ ಪುರಸ್ಕಾರ ಯಶಸ್ಸಿನ ಹೆಜ್ಜೆ ಗುರುತಾಗಿದೆ. ವಿದ್ಯಾರ್ಥಿಗಳು ಓದಿನ ಜೊತೆಗೆ ಉತ್ತಮ ಹವ್ಯಾಸಗಳನ್ನು ರೂಡಿಸಿಕೊಂಡು ಸಮಾಜಮುಖಿಗಳಾಗಿ ಬೆಳೆಯಬೇಕೆಂದು ಶುಭ ಹಾರೈಸಿದರು.
ಶೆಟ್ಟಿಹಳ್ಳಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ನಾಗೇಶ್ ಬಿದರಗೋಡ ಮಾತನಾಡಿ, ಆಧುನಿಕ ಯುಗದಲ್ಲಿ ವಿದ್ಯಾರ್ಥಿಗಳು ಅಂಕಗಳಿಗೆ ಮಾತ್ರ ಸೀಮಿತ ವಾಗದೆ ಜ್ಞಾನಾರ್ಜನೆ ಹಾಗೂ ಕೌಶಲ್ಯಾಭಿವೃದ್ಧಿಯ ಕಡೆಗೆ ಹೆಚ್ಚಿನ ಗಮನ ಹರಿಸುವಂತೆ ತಿಳಿಸಿದರು.2023 ನೇ ಸಾಲಿನಲ್ಲಿ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ದ್ವಿತೀಯ ಹಾಗೂ ಜಿಲ್ಲೆಗೆ ಪ್ರಥಮ ರ್‍ಯಾಕ್ ಗಳಿಸಿದ ಪವನ್ ಎಂ.ಎಸ್.ಹಾಗೂ ಸೃಜನಾ ಆರ್. ಮತ್ತು ವಿಜ್ಞಾನ ವಿಭಾಗದಲ್ಲಿ ಕು.ದೀಕ್ಷಿತಾ ಹಾಗೂ ಜೆಇಇ ನೀಟ್ ಪರೀಕ್ಷೆಯಲ್ಲಿ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ಪ್ರಾಸ್ಥಾವಿಕವಾಗಿ ಪ್ರಾಚಾರ್ಯ ಡಾ.ಎಂ.ವೀರೇಂದ್ರ ಮಾತನಾಡಿದರು. ವಿಜ್ಞಾನ ವಿಭಾಗದ ಮುಖ್ಯಸ್ಥ ಪರ್ವಿಜ್ ಅಹಮದ್ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಇದೇ ವೇಳೆ ಗಣ್ಯರನ್ನು ಸನ್ಮಾನಿಸಲಾಯಿತು.ವೇದಿಕೆಯಲ್ಲಿ ಸಂಸ್ಥೆಯ ಅಧ್ಯಕ್ಷ ಎಂ.ಬಿ.ಶಿವಕುಮಾರ್, ನಿರ್ದೇಶಕಿ ತೇಜಸ್ವಿನಿ ರಾಘವೇಂದ್ರ, ಪ್ರಾಚಾರ್ಯ ಡಾ.ಜಿ.ಎಸ್. ಶಿವಕುಮಾರ್, ಕುಬೇರಪ್ಪ. ಡಾ.ರವೀಂದ್ರ, ವಿಶ್ವನಾಥ್, ವಿದ್ಯಾಶಂಕರ್ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.