ಸಂಶೋಧನೆಯು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ಸಮಾಜದ ಬೆಳವಣಿಗೆಗಾಗಿ ಉಪಯುಕ್ತವಾಗಬೇಕು.
ಬಳ್ಳಾರಿ: ಬಹುಶಿಸ್ತೀಯ ಸಂಶೋಧನೆಯಲ್ಲಿ ನಿರ್ದಿಷ್ಟ ಸಮಸ್ಯೆಗೆ ಹಲವಾರು ಕ್ಷೇತ್ರಗಳ ಜ್ಞಾನವನ್ನು ಬಳಸಲಾಗುತ್ತದೆ. ಸಂಶೋಧನಾ ವಿದ್ಯಾರ್ಥಿಗಳು ಒಂದು ವಿಷಯದಲ್ಲಿ ಸಂಶೋಧನೆಯಲ್ಲಿ ನಿರತವಾಗದೆ ಬಹುಶಿಸ್ತಿಯ ಸಂಶೋಧನೆಗೆಳಿಗೆ ಒತ್ತು ನೀಡಬೇಕು. ಇದರಿಂದ ಸಮಾಜ, ಜನಾಂಗ ಹಾಗೂ ದೇಶದ ಬೆಳವಣಿಗೆಗೆ ಪೂರಕವಾಗುತ್ತವೆ ಎಂದು ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ ಅಭಿಪ್ರಾಯಪಟ್ಟರು.
ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಸಭಾಂಗಣದಲ್ಲಿ ಬುಧವಾರ ಸಮಾಜ ವಿಜ್ಞಾನ ನಿಕಾಯದ ವತಿಯಿಂದ ಏರ್ಪಡಿಸಿದ್ದ ‘ಸಮಾಜ ವಿಜ್ಞಾನದಲ್ಲಿ ಬಹುಶಿಸ್ತೀಯ ಪ್ರಚಲಿತ ಸಂಶೋಧನೆಗಳು’ ಎಂಬ ವಿಷಯದ ಕುರಿತು ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.
ಸಂಶೋಧನೆಯಲ್ಲಿ ವಿಶೇಷ ಕೌಶಲ್ಯಗಳನ್ನು ಬಳಸಿಕೊಂಡು ವೈಜ್ಞಾನಿಕ ರೂಪ ಕೊಡುವುದು ಮುಖ್ಯವಾಗಿದೆ. ಸಂಶೋಧನೆಯು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ಸಮಾಜದ ಬೆಳವಣಿಗೆಗಾಗಿ ಉಪಯುಕ್ತವಾಗಬೇಕು ಎಂದರು.
ಕೊಡಗು ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಅಶೋಕ್ ಆಲೂರ್ ಮಾತನಾಡಿ, ಬಹುಶಿಸ್ತೀಯ ವಿಧಾನವು ಸಾಮಾಜಿಕ, ಆರ್ಥಿಕ, ರಾಜಕೀಯ, ಮಾನಸಿಕ, ಭೌಗೋಳಿಕ ಅಂಶಗಳನ್ನು ಒಳಗೊಂಡಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅನಂತ ಎಲ್. ಝಂಡೇಕರ್, ಸಂಶೋಧನಾ ವಿದ್ಯಮಾನಗಳ ಕುರಿತು ತಿಳಿದುಕೊಳ್ಳಲು ಬಹುಶಿಸ್ತೀಯ ಸಂಶೋಧನೆಯೂ ಹೆಚ್ಚು ಮಹತ್ವ ಹಾಗೂ ಪರಿಣಾಮಕಾರಿಯಾಗಿದೆ ಎಂದರು.
ವಿವಿಯ ಕುಲಸಚಿವ ಎಸ್.ಎನ್. ರುದ್ರೇಶ್, ಪ್ರೊ. ರಮೇಶ್ ಓಲೇಕಾರ್, ವಿತ್ತಾಧಿಕಾರಿ ಪ್ರೊ. ಸದ್ಯೋಜಾತಪ್ಪ, ಸಮ್ಮೇಳನದ ಸಂಚಾಲಕರಾದ ಪ್ರೊ. ಗೌರಿ ಮಾಣಿಕ್ ಮಾನಸ ಹಾಗೂ ಪ್ರೊ. ತಿಪ್ಪೇಸ್ವಾಮಿ ಎಚ್. ಸೇರಿದಂತೆ ವಿವಿಧ ನಿಕಾಯಗಳ ಡೀನರು, ವಿವಿಧ ವಿಭಾಗಗಳ ಮುಖ್ಯಸ್ಥರು, ಸಂಯೋಜಕರು, ಬೋಧಕರು, ಸಂಶೋಧನಾ ವಿದ್ಯಾರ್ಥಿಗಳು, ಬೋಧಕೇತರ ಸಿಬ್ಬಂದಿ, ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಸಮ್ಮೇಳನದಲ್ಲಿ ನೂರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿ ತಮ್ಮ ಸಂಶೋಧನಾ ಕುರಿತಾದ ಪ್ರಬಂಧವನ್ನು ಮಂಡಿಸಿದರು.
ಡಾ. ಶ್ರೀದೇವಿ ಆಲೂರ, ಡಾ. ಎಚ್. ತಿಪ್ಪೇಸ್ವಾಮಿ ಹಾಗೂ ಡಾ. ವೀರಪ್ರಕಾಶ ಕಾರ್ಯಕ್ರಮ ನಿರ್ವಹಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.