ವಿದ್ಯಾರ್ಥಿಗಳು ಮಾನವೀಯ ಮೌಲ್ಯ ಅಳವಡಿಸಿಕೊಳ್ಳಿ: ನ್ಯಾಯಾಧೀಶ ಡಾ. ಶಿವರಾಜ ಪಾಟೀಲ

KannadaprabhaNewsNetwork | Published : Nov 20, 2023 12:45 AM

ಸಾರಾಂಶ

ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ್‌ ಪ್ರತಿಷ್ಠಾನದಿಂದ ಭಾನುವಾರ ಹಮ್ಮಿಕೊಂಡಿದ್ದ 2022 ನೇ ಸಾಲಿನ ಶಿವಶ್ರೀ ಪ್ರಶಸ್ತಿ ಪ್ರದಾನ, ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮತ್ತು ಪುಸ್ತಕ ಬಿಡುಗಡೆ ಹಾಗೂ ಉಚಿತ ಆರೋಗ್ಯ ಶಿಬಿರದಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

ರಾಯಚೂರು: ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಮಾನವೀಯ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು ಎಂದು ಸುಪ್ರಿಂ ಕೋರ್ಟ್ ವಿಶ್ರಾಂತ ನ್ಯಾಯಾಧೀಶ ಡಾ. ಶಿವರಾಜ ಪಾಟೀಲ ಸಲಹೆ ನೀಡಿದರು.

ಸ್ಥಳೀಯ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ನ್ಯಾಯಮೂರ್ತಿ ಶಿವರಾಜ ವಿ.ಪಾಟೀಲ್‌ ಪ್ರತಿಷ್ಠಾನದಿಂದ ಭಾನುವಾರ ಹಮ್ಮಿಕೊಂಡಿದ್ದ 2022 ನೇ ಸಾಲಿನ ಶಿವಶ್ರೀ ಪ್ರಶಸ್ತಿ ಪ್ರದಾನ, ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಮತ್ತು ಪುಸ್ತಕ ಬಿಡುಗಡೆ ಹಾಗೂ ಉಚಿತ ಆರೋಗ್ಯ ಶಿಬಿರದಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.

ಮಾನವ ಬದುಕಿನಲ್ಲಿ ಸಮಾಜಮುಖಿಯಾಗಿ ಬಾಳಬೇಕು, ಹಣಕ್ಕಿಂತ ಪ್ರಾರ್ಥನೆ ದೊಡ್ಡದು, ಗುಣಮಟ್ಟದ ಶಿಕ್ಷಣ ಪಡೆಯುವುದರೊಂದಿಗೆ ಉತ್ತಮ ಭವಿಷ್ಯ ಕಟ್ಟಿಕೊಳ್ಳಬೇಕು. ವಿದ್ಯಾರ್ಥಿಗಳು ಪುಸ್ತಕ ಓದುವ ಹವ್ಯಾಸ ಮೈಗೂಡಿಸಿಕೊಳ್ಳಬೇಕು ಎಂದರು.

ಹಿಂದುಳಿದ ಜಿಲ್ಲೆ ಎನ್ನುವ ಹಣೆ ಪಟ್ಟಿಯನ್ನು ಕಟ್ಟಿಕೊಂಡಿರುವ ರಾಯಚೂರು ಜಿಲ್ಲೆಯನ್ನು ಆ ಹಣೆ ಪಟ್ಟಿಯಿಂದ ಕಳಚುವ ಕೆಲಸ ಮಾಡಬೇಕಾಗಿದ್ದು, ಅದು ಶಿಕ್ಷಣ ಕ್ಷೇತ್ರದ ಅಭಿವೃದ್ಧಿಯಿಂದ ಮಾತ್ರ ಸಾಧ್ಯವಾಗಲಿದೆ. ರಾಯಚೂರಿಗೆ ಏಮ್ಸ್ ಮಂಜೂರು ಮಾಡುವ ನಿಟ್ಟಿನಲ್ಲಿ ರಾಜಕೀಯ ನಾಯಕರು, ಜನಪ್ರತಿನಿಧಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಜಿಲ್ಲೆಯಲ್ಲಿ ಶೀಘ್ರವೇ ವಿಮಾನ ನಿಲ್ದಾಣ ಆರಂಭಿಸಿ ಅಭಿವೃದ್ಧಿಗೆ ಮುಂದಾಗಬೇಕು ಎಂದು ಹೇಳಿದರು.

ಸಚಿವ ಎನ್‌.ಎಸ್‌. ಬೊಸರಾಜು ಮಾತನಾಡಿ, ನ್ಯಾ.ಡಾ.ಶಿವರಾಜ ಪಾಟೀಲರು ಈ ಭಾಗದ ಆಶಾಕಿರಣ. ಸಾಮಾನ್ಯರಾಗಿ ಅಸಾಮಾನ್ಯ ಸೇವೆ ಮಾಡಿದ್ದಾರೆ. ಸಮಾಜಮುಖಿ ಕೆಲಸಗಳಿಂದ ಅನೇಕರಿಗೆ ಪ್ರೇರಣೆಯಾಗಿದ್ದಾರೆ. ನ್ಯಾಯಾಂಗ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿದ ಅವರು ಅನೇಕ ಸುಧಾರಣೆ ಕೈಗೊಂಡಿದ್ದಾರೆ ಎಂದು ಹೇಳಿದರು.

ಸಂಸದ ರಾಜಾ ಅಮರೇಶ್ವರ ನಾಯಕ ಮಾತನಾಡಿ, ತೀರಾ ಹಿಂದುಳಿದ ಜಿಲ್ಲೆಯಲ್ಲಿ ಜನ್ಮಿಸಿ ಎದುರಾದ ಎಲ್ಲ ರೀತಿಯ ಕಷ್ಟ ಕಾರ್ಪಣ್ಯಗಳನ್ನು ಮೀರಿ ದೇಶದ ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸಿರುವ ನ್ಯಾ.ಶಿವರಾಜ ಪಾಟೀಲ್‌ ಅವರ ಜೀವನ, ಸಾಧನೆಯು ಎಲ್ಲರಿಗೂ ಪ್ರೇರಣೆಯಾಗಿದೆ. ಜಸ್ಟಿಸ್ ಶಿವರಾಜ ಪಾಟೀಲ ಪ್ರತಿಷ್ಠಾನದಿಂದ ಆರೋಗ್ಯ ಹಾಗೂ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುತ್ತಿರುವುದು ಶ್ಲಾಘನೀಯ ಎಂದರು.

ಸಮಾರಂಭದ ಸಾನ್ನಿಧ್ಯವನ್ನು ಗಬ್ಬೂರು ಬೂದಿ ಬಸವವೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಬೂದಿ ಬಸವ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು. ಇದೇ ವೇಳೆ ಅಂತಾರಾಷ್ಟ್ರೀಯ ಕ್ಲಾರಿಯೋನೆಟ್ ವಾದಕ ಪಂ.ನರಸಿಂಹಲು ವಡವಾಟಿ ಅವರಿಗೆ ಶಿವಶ್ರೀ ಪ್ರಶಸ್ತಿ ಪ್ರದಾನ ಹಾಗೂ ಪ್ರತಿಭಾವಾನ್ವಿತ ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣೆ ಹಾಗೂ ಆರೋಗ್ಯ ಶಿಬಿರದಲ್ಲಿ ಸೇವೆ ಸಲ್ಲಿಸಿದವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶರಣಗೌಡ ಬಯ್ಯಾಪುರ, ಶಾಸಕ ಡಾ.ಶಿವರಾಜ ಪಾಟೀಲ್, ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಹನುಮಂತಪ್ಪ, ಪ್ರತಿಷ್ಠಾನದ ಅಧ್ಯಕ್ಷ ಎಸ್. ಎಂ.ರೆಡ್ಡಿ, ಕಾರ್ಯದರ್ಶಿ ಪ್ರೊ. ಚನ್ನಾರೆಡ್ಡಿ ಪಾಟೀಲ್‌ ಸೇರಿದಂತೆ ಪದಾಧಿಕಾರಿಗಳು ಮತ್ತಿತರರು ಇದ್ದರು.

Share this article