ವಿದ್ಯಾರ್ಥಿಗಳು ಶಿಸ್ತು, ತಾಳ್ಮೆ ಮೈಗೂಡಿಸಿ: ಬೊಳ್ಳಜಿರ ಬಿ.ಅಯ್ಯಪ್ಪ

KannadaprabhaNewsNetwork |  
Published : Mar 18, 2025, 12:30 AM IST
16ಎಂಡಿಕೆ1 : ವಿದ್ಯಾರ್ಥಿಗಳ ಪ್ರತಿಭಾ ಸಮಾಗಮ ಕಾರ್ಯಕ್ರಮದ ಉದ್ಘಾಟನೆ.  | Kannada Prabha

ಸಾರಾಂಶ

ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಶಿಸ್ತು ಮತ್ತು ತಾಳ್ಮೆಯನ್ನು ಮೈಗೂಡಿಸಿಕೊಂಡು ಯಶಸ್ಸು ಸಾಧಿಸಬೇಕು ಎಂದು ಗಣ್ಯರು ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ವಿದ್ಯಾರ್ಥಿ ಜೀವನದಲ್ಲಿ ನಾವು ಏನನ್ನು ಪಡೆಯುತ್ತೇವೆಯೋ ಅದನ್ನೇ ಬದುಕಿನಲ್ಲೂ ಅಳವಡಿಸಿಕೊಳ್ಳುತ್ತೇವೆ. ಆದ್ದರಿಂದ ವಿದ್ಯಾರ್ಥಿಗಳು ದುಶ್ಚಟಗಳಿಗೆ ಬಲಿಯಾಗದೆ ಶಿಸ್ತು ಮತ್ತು ತಾಳ್ಮೆಯನ್ನು ಮೈಗೂಡಿಸಿಕೊಂಡು ಯಶಸ್ಸು ಸಾಧಿಸಬೇಕೆಂದು ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಕರೆ ನೀಡಿದ್ದಾರೆ.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಮತ್ತು ಹಳೆ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಲಾದ ವಿದ್ಯಾರ್ಥಿಗಳ ಪ್ರತಿಭಾ ಸಮಾಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಇಡೀ ಭಾರತದಲ್ಲಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಅವರ ಹೆಸರಿನಲ್ಲಿ ಎರಡೇ ಕಾಲೇಜು ಇದ್ದು, ವಿದ್ಯಾರ್ಥಿಗಳು ಕಾಲೇಜಿನ ಹೆಸರಿಗೆ ಧಕ್ಕೆ ತಾರದೆ ಶಿಸ್ತಿನಿಂದ ನಡೆದುಕೊಳ್ಳಬೇಕು. ವಿದ್ಯಾರ್ಥಿಗಳು ವಾಹನ ಚಲಾಯಿಸುವಾಗ ವೇಗವನ್ನು ಕಡಿಮೆ ಮಾಡಿಕೊಳ್ಳಬೇಕು. ಶೈಕ್ಷಣಿಕ ಜೀವನದಲ್ಲಿ ವೇಗವನ್ನು ಹೆಚ್ಚಿಸಿಕೊಂಡು ಉತ್ತಮ ಸಾಧನೆ ಮಾಡಬೇಕು ಎಂದು ಸಲಹೆ ನೀಡಿದರು.

ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಕಾಲೇಜು ಪಠ್ಯದ ಜೊತೆಗೆ ಪಠ್ಯೇತರವಾಗಿಯೂ ಸಾಧನೆ ಮಾಡಿದ್ದು, ದೇಶಕ್ಕೆ ಹಲವು ಯೋಧರನ್ನು ನೀಡಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಮುಂದೆ ಬರಬೇಕು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರ ಎಲ್ಲ ಕಾರ್ಯಗಳಿಗೂ ಹಳೇ ವಿದ್ಯಾರ್ಥಿ ಸಂಘ ಸಂಪೂರ್ಣ ಸಹಕಾರ ನೀಡುವ ಮೂಲಕ ಕಾಲೇಜಿನ ಯಶಸ್ಸಿಗೆ ಸದಾ ಶ್ರಮಿಸಲಿದೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ಭರವಸೆ ನೀಡಿದರು.

ವಾಣಿಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಪ್ರೊ.ಎ.ಗಾಯತ್ರಿ ದೇವಿ ಮಾತನಾಡಿ, ವಿಶೇಷ ಜ್ಞಾನ ಪಡೆಯಲು ಶಿಕ್ಷಣ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ಸಂಯಮವನ್ನು ಬೆಳೆಸಿಕೊಳ್ಳಬೇಕು ಮತ್ತು ಮಾದರಿ ಪ್ರಜೆಗಳಾಗಿ ರೂಪುಗೊಳ್ಳಬೇಕು. ಆಗ ಮಾತ್ರ ಸುಖ ಜೀವನ ನಡೆಸಲು ಸಾಧ್ಯ ಎಂದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಫೀ.ಮಾ.ಕೆ.ಎಂ.ಕಾರ್ಯಪ್ಪ ಕಾಲೇಜಿನ ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ, ವಿದ್ಯಾರ್ಥಿಗಳ ಸಾಧನೆಗೆ ಪೋಷಕರ ಬೆಂಬಲ, ನೈತಿಕ ಸ್ಥೈರ್ಯ, ತ್ಯಾಗ ಮನೋಭಾವ ಅತಿ ಮುಖ್ಯ. ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಸನವಾಗುತ್ತದೆ ಎಂದರು.

ಕ್ಷೇಮ ಪಾಲನಾ ಸಮಿತಿಯ ಸಂಯೋಜಕ ಪ್ರೊ.ಎಂ.ಪಿ.ಕೃಷ್ಣ ಮಾತನಾಡಿ, ವಿದ್ಯಾರ್ಥಿಗಳು ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವುದು ಕೂಡ ಮುಖ್ಯವಾಗಿದ್ದು, ಪುಸ್ತಕಗಳನ್ನು ಓದುವ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು ಎಂದರು.

ವಿದ್ಯಾರ್ಥಿ ಸಂಘದ ಸಲಹೆಗಾರ ಪ್ರೊ.ಶ್ರೀಧರ್ ಹೆಗಡೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

ವಿದ್ಯಾರ್ಥಿ ಸಂಘದ ಅಧ್ಯಕ್ಷ ಎನ್.ವಿ.ಮಹೇಂದ್ರ ಮಾತನಾಡಿದರು.

ಸನ್ಮಾನ, ಸಾಂಸ್ಕೃತಿಕ ಕಾರ್ಯಕ್ರಮ:

ಎನ್‌ಸಿಸಿಯಲ್ಲಿ ಸಾಧನೆ ಮಾಡಿದ ಹೇಮ್ ಮೊಣ್ಣಪ್ಪ, ಎಂ.ಆರ್.ಹೇಮಂತ್ ಹಾಗೂ ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರನ್ನು ಕಾಲೇಜು ವತಿಯಿಂದ ಸನ್ಮಾನಿಸಲಾಯಿತು.

ಪ್ರತಿಭಾ ಸಮಾಗಮ ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ, ಪ್ರಬಂಧ ಸ್ಪರ್ಧೆ, ಹಾಡುಗಾರಿಗೆ ಸ್ಪರ್ಧೆ, ಭಾಷಣ ಸ್ಪರ್ಧೆ, ನೃತ್ಯ ಸ್ಪರ್ಧೆ, ಸಾಂಪ್ರದಾಯಿಕ ಫ್ಯಾಷನ್ ಶೋ ನಡೆಯಿತು.

ಐಕ್ಯೂಎಸಿ ಸಂಯೋಜಕ ಪ್ರೊ.ಕೆ.ಪಿ.ನಾಗರಾಜ, ಹಳೇ ವಿದ್ಯಾರ್ಥಿ ಸಂಘದ ಕಾರ್ಯದರ್ಶಿ ಚಂದನ್ ನಂದರಬೆಟ್ಟು ಹಾಗೂ ಪದಾಧಿಕಾರಿಗಳು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು, ಉಪನ್ಯಾಸಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. ವಿದ್ಯಾರ್ಥಿನಿಯರಾದ ಇಂಪನ ನಿರೂಪಿಸಿದರು. ಚಶ್ಮಿತ, ಎಂ.ಪಿ.ಮೋನಿಶ್, ವೈಶಾಲಿ ಅತಿಥಿಗಳ ಪರಿಚಯ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ