ತಿಪಟೂರು: ಕಾಲೇಜಿನ ಗ್ರಂಥಾಲಯದಲ್ಲಿ ಸುಮಾರು ೫೦,೦೦೦ ಪುಸ್ತಕಗಳ ಜ್ಞಾನ ಸಂಪನ್ಮೂಲವನ್ನು ಮತ್ತು ಬೋಧಕ ವರ್ಗದ ಜ್ಞಾನವನ್ನು ವಿದ್ಯಾರ್ಥಿಗಳು ಸಮರ್ಪಕವಾಗಿ ಬಳಸಿಕೊಂಡು ತಮ್ಮ ಜ್ಞಾನವನ್ನು ವಿಸ್ತರಿಸಿಕೊಳ್ಳಬೇಕು. ಪದವಿ ಶಿಕ್ಷಣದ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೂ ಸಿದ್ಧತೆ ನಡೆಸುವಂತೆ ಪ್ರಾಂಶುಪಾಲರಾದ ಡಾ. ಶಶಿಕುಮಾರ್ ಎಚ್.ಸಿ. ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಕಾರ್ಯಕ್ರಮದ ಅತಿಥಿಯಾಗಿ ಭಾಗವಹಿಸಿದ್ದ ಇಂಗ್ಲಿಷ್ ವಿಭಾಗದ ಮುಖ್ಯಸ್ಥರಾದ ಡಾ. ರೇಣುಕಾ, ವಿದ್ಯಾರ್ಥಿಗಳು ಉದ್ಯೋಗಕ್ಕೆ ಸಿದ್ಧರಾಗುವುದರ ಜೊತೆಗೆ ಇಂಗ್ಲಿಷ್ ಕಲಿಕೆಗೆ ಸಮಾನ ಆದ್ಯತೆ ನೀಡಬೇಕು. ಹಿರಿಯ ವಿದ್ಯಾರ್ಥಿಗಳು ಕಿರಿಯರನ್ನು ಆತ್ಮೀಯವಾಗಿ ಬರಮಾಡಿಕೊಂಡಿರುವುದು ಶ್ಲಾಘನೀಯ. ಸಮಯವನ್ನು ಸದ್ಬಳಕೆ ಮಾಡಿಕೊಂಡು ತರಗತಿಗಳಲ್ಲಿ ಗಮನವಿಟ್ಟು ಕಲಿಯಬೇಕು. ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸಿ ಉತ್ತಮ ನಾಗರಿಕರಾಗಬೇಕು ಎಂದರು.
ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಮುಖ್ಯಸ್ಥರಾದ ಡಾ. ನಾರಾಯಣ ದಾಸ್, ವಿದ್ಯಾರ್ಥಿಗಳು ಕಾಲೇಜಿನ ನಿಯಮಗಳನ್ನು ಪಾಲಿಸುವುದರೊಂದಿಗೆ ಶೈಕ್ಷಣಿಕ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವುದರ ಮೂಲಕ ಸರ್ವತೋಮುಖ ಬೆಳವಣಿಗೆಯೆಡೆಗೆ ಗಮನ ಹರಿಸಬೇಕು. ವಿದ್ಯಾರ್ಥಿ ಜೀವನವನ್ನು ಆನಂದಿಸುತ್ತಲೇ ತಮ್ಮ ಆಲೋಚನೆ, ಕುತೂಹಲ ಹಾಗೂ ಅಭಿವ್ಯಕ್ತಿ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಅಧ್ಯಾಪಕರಾದ ಲೋಹಿತ್ ರಾಮ್ ಸೇರಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.