ಉಡುಪಿ: ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ದೈಹಿಕ ಸಾಮರ್ಥ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಕೂಡ ಹೆಚ್ಚುತ್ತದೆ. ಇತ್ತೀಚಿಗೆ ಕ್ರೀಡಾಕ್ಷೇತ್ರದಲ್ಲಿ ಹೆಚ್ಚೆಚ್ಚು ಅವಕಾಶಗಳು ತೆರೆದುಕೊಳ್ಳುತ್ತಿರುವುದರಿಂದ ವಿದ್ಯಾರ್ಥಿಗಳು ಅಧ್ಯಯನದ ಜೊತೆಜೊತೆಯಲ್ಲಿಯೇ ಕ್ರೀಡಾ ಚಟುವಟಿಕೆಗಳಲ್ಲೂ ಕೂಡ ತಮ್ಮ ಸಾಮರ್ಥ್ಯವನ್ನು ತೋರ್ಪಡಿಸಬೇಕು, ವಿದ್ಯಾರ್ಥಿಗಳು ಕ್ರೀಡಾ ಸ್ಪರ್ಧೆಗಳಲ್ಲಿ ಹೆಚ್ಚು ಹೆಚ್ಚು ಪಾಲ್ಗೊಳ್ಳಬೇಕು ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಕರೆ ನೀಡಿದರು. ಶಾಲಾ ಶಿಕ್ಷಣ ಇಲಾಖೆಯ ಮತ್ತು ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಅಜ್ಜರಕಾಡು ಈಜುಕೊಳದಲ್ಲಿ ನಡೆದ ಜಿಲ್ಲಾಮಟ್ಟದ ಈಜು ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್, ಡಯಟ್ ಪ್ರಾಂಶುಪಾಲ ಡಾ. ಅಶೋಕ್ ಕಾಮತ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಸಾಫಲ್ಯ ಟ್ರಸ್ಟ್ ಅಧ್ಯಕ್ಷೆ ರಂಜನಾ ಶೆಟ್ಟಿ, ಪ್ರವರ್ತಕಿ ನಿರುಪಮಾ ಪ್ರಸಾದ್, ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷೆ ತಾರಾದೇವಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ ರವೀಂದ್ರ ನಾಯಕ್, ನಿತ್ಯಾನಂದ, ಸತ್ಯನಾರಾಯಣ ಜಿ., ವಿಜಯಕುಮಾರ್, ದೈಹಿಕ ಶಿಕ್ಷಣ ಶಿಕ್ಷಕ ಸಂಘದ ವಿಜಯಕುಮಾರ್ ಶೆಟ್ಟಿ, ಕಿರಣ್ ಕುಮಾರ್ ಶೆಟ್ಟಿ, ವರದರಾಜ ನಾಯಕ್ ಅತಿಥಿಗಳಾಗಿ ಭಾಗವಹಿಸಿದ್ದರು.ಪದೋನ್ನತಿ ಹೊಂದಿದ ಲೋಕೇಶ್ ಮತ್ತು ಶಿಕ್ಷಣಾಭಿಮಾನಿ ಡಾ. ರಾಧಿಕಾ ಸೋಮಯಾಜಿ ಅವರನ್ನು ಸನ್ಮಾನಿಸಲಾಯಿತು. ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ರವಿಚಂದ್ರ ಕಾರಂತ್ ಪ್ರಾಸ್ತಾವಿಕ ಮಾತುಗಳನ್ನಾಡಿದರು, ಮುಖ್ಯ ಶಿಕ್ಷಕಿ ಇಂದಿರಾ ಸ್ವಾಗತಿಸಿದರು, ಶಿಕ್ಷಕ ರಾಮಚಂದ್ರ ಭಟ್ ಕಾರ್ಯಕ್ರಮ ನಿರೂಪಿಸಿ, ವಸಂತ ಜೋಗಿ ವಂದಿಸಿದರು.