ವಿದ್ಯಾರ್ಥಿಗಳೇ ಏಕಾಗ್ರತೆಯಿಂದ ವ್ಯಾಸಂಗ ಮಾಡಬೇಕು: ಚಲುವಯ್ಯ ಸಲಹೆ

KannadaprabhaNewsNetwork | Published : Feb 14, 2025 12:34 AM

ಸಾರಾಂಶ

ವಿದ್ಯಾರ್ಥಿಗಳು ಮೊಬೈಲ್ ಪ್ರಪಂಚದಿಂದ ಹೊರಬಂದು ಕಷ್ಟಪಟ್ಟು ಅಭ್ಯಾಸ ಮಾಡಿ ಸಾಧನೆ ಮಾಡಬೇಕು. ಕಳೆದ 35 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ ಶೇ.ನೂರಷ್ಟು ಫಲಿತಾಂಶ ತಂದುಕೊಡಬೇಕು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ವಿದ್ಯಾರ್ಥಿಗಳು ಏಕಾಗ್ರತೆಯಿಂದ ವ್ಯಾಸಂಗ ಮಾಡಿ ಗುರಿಸಾಧನೆ ಮಾಡಬೇಕು ಎಂದು ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರಾದ ಚಲುವಯ್ಯ ಹೇಳಿದರು.

ಪಟ್ಟಣದ ಕೃಷ್ಣರಾಜ ಪದವಿ ಪೂರ್ವ ಕಾಲೇಜಿನ ಕ್ರೀಡಾ ಸಾಂಸ್ಕೃತಿಕ ಹಾಗೂ ರಾಷ್ಟ್ರೀಯ ಸೇವಾ ಯೋಜನಾ ಚಟುವಟಿಕೆಗಳ ಸಮಾರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿ, ಇಂದಿನ ಪ್ರಪಂಚದಲ್ಲಿ ವಿದ್ಯಾರ್ಥಿಗಳು ಸಾಧನೆ ಮಾಡಿ ಗುರಿ ತಲುಪಲು ಸತತ ಪರಿಶ್ರಮ ಹಾಗೂ ಪ್ರಾಮಾಣಿಕ ಪ್ರಯತ್ನವು ಅತೀ ಅಗತ್ಯವಾಗಿದೆ ಎಂದರು.

ವಿದ್ಯಾರ್ಥಿಗಳು ಮೊಬೈಲ್ ಪ್ರಪಂಚದಿಂದ ಹೊರಬಂದು ಕಷ್ಟಪಟ್ಟು ಅಭ್ಯಾಸ ಮಾಡಿ ಸಾಧನೆ ಮಾಡಬೇಕು. ಕಳೆದ 35 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಆತ್ಮವಿಶ್ವಾಸದಿಂದ ಎದುರಿಸಿ ಶೇ.ನೂರಷ್ಟು ಫಲಿತಾಂಶ ತಂದುಕೊಡಬೇಕು ಎಂದರು.

ಕಾಲೇಜಿನ ಸಂಸ್ಥಾಪಕ ಹಾಗೂ ತುಮಕೂರಿನ ಗುಬ್ಬಿ ಬಂಡಿ ಶಿಕ್ಷಣ ಟ್ರಸ್ಟ್ ಕಾರ್ಯದರ್ಶಿಗ ಡಾ.ಜಿ.ಬಿ.ಮಲ್ಲಪ್ಪ ಮಾತನಾಡಿ, ವಿದ್ಯಾರ್ಥಿಗಳು ತಂದೆ-ತಾಯಿಗಳು ಹಾಗೂ ಗುರುಹಿರಿಯರ ಆಸೆಗೆ ಭಂಗ ತರದೇ ಪಾಠ ಪ್ರವಚನಗಳ ಬಗ್ಗೆ ವಿಶೇಷವಾಗಿ ಗಮನ ಹರಿಸಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಬೇಕು ಎಂದರು.

ಬೆಂಗಳೂರು ರಾಜಾಜಿನಗರ ಕೋ ಆಪರೇಟಿವ್ ಬ್ಯಾ೦ಕ್‌ನ ಉಪಾಧ್ಯಕ್ಷ ಕೃಷ್ಣಯ್ಯ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರಿ ಹಾಗೂ ಶಿಸ್ತನ್ನು ಅಳವಡಿಸಿಕೊಂಡು ಸಾಧನೆ ಮಾಡಬೇಕು ಎಂದರು. ಕಾಲೇಜಿನ ಹಿರಿಯ ವಿದ್ಯಾರ್ಥಿಗಳಾದ ಉದ್ಯಮಿ ಡಾ.ಕೆ.ಎಸ್.ರಾಜೇಶ್ ಹಾಗೂ ಮಹಿಳಾ ಸರ್ಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಮಧು ಮಾತನಾಡಿದರು.

ಕಾರ್ಯಕ್ರಮದಲ್ಲಿ ಬಂಡಿ ಶಿಕ್ಷಣ ಟ್ರಸ್ಟ್ ಅಧ್ಯಕ್ಷ ರಾಮಯ್ಯ ಉಂಡೆ, ಪ್ರಾಂಶುಪಾಲ ಕೃಷ್ಣಪ್ಪ, ಆಡಳಿತಾಧಿಕಾರಿ ಎಸ್.ಬಿ. ಲೋಕೇಶ್, ಟ್ರಸ್ಟ್ ನಿರ್ದೇಶಕ ನಾಗರಂಗಪ್ಪ, ಸಮಾಜ ಸೇವಕ ಬಸವೇಗೌಡ, ಸರ್ಕಾರಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಕೆ.ಮೋಹನ್, ಸಿಂದಘಟ್ಟ ಪಿಯು ಕಾಲೇಜು ಪ್ರಾಂಶುಪಾಲ ವೆಂಕಟರಾಮ್, ಪುರಸಭೆ ಮಾಜಿ ಸದಸ್ಯ ಕೆ. ಆರ್.ನೀಲಕಂಠ ಉಪಸ್ಥಿತರಿದ್ದರು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳು, ತಾಲೂಕು, ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಪ್ರಥಮ ಪಿಯುಸಿ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಹೃದಯ ಸ್ಪರ್ಶಿಯಾಗಿ ಬೀಳ್ಕೊಟ್ಟರು.

Share this article