ಮಂಡ್ಯದಲ್ಲೂ ಸಿಡಿದೆದ್ದ ವಿದ್ಯಾರ್ಥಿಗಳು: ನೀಟ್ ಹಗರಣ ಖಂಡಿಸಿ ಬೃಹತ್ ಪ್ರತಿಭಟನೆ

KannadaprabhaNewsNetwork |  
Published : Jul 24, 2026, 12:30 AM IST
೨೩ಕೆಎಂಎನ್‌ಡಿ-೩’ನೀಟ್’ ಪರೀಕ್ಷಾ ಹಗರಣ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ಅವ್ಯವಸ್ಥೆಯನ್ನು ಖಂಡಿಸಿ ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳ ಮೇಲೆ ಕಿಂಚಿತ್ತೂ ಕನಿಕರವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಶೋಕಿ ಮಾಡುವುದನ್ನು ಬಿಟ್ಟು ಮೊದಲು ವಿದ್ಯಾರ್ಥಿಗಳ ಭವಿಷ್ಯವನ್ನು ಉಳಿಸಿ. ನೀವು ಪ್ರಧಾನ ಮಂತ್ರಿಯಾಗಿರುವುದು ಕೇವಲ ವೋಟ್ ಪಡೆಯುವುದಕ್ಕಾ.

ಕನ್ನಡಪ್ರಭ ವಾರ್ತೆ ಮಂಡ್ಯ

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ‘ನೀಟ್’ ಪರೀಕ್ಷಾ ಹಗರಣ, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ವ್ಯವಸ್ಥೆಯ ಅವ್ಯವಸ್ಥೆಯನ್ನು ಖಂಡಿಸಿ ಸಕ್ಕರೆ ನಾಡು ಮಂಡ್ಯದಲ್ಲೂ ಆಕ್ರೋಶ ಭುಗಿಲೆದ್ದಿದೆ.

ಜಿಲ್ಲಾ ಯುವ ಕಾಂಗ್ರೆಸ್ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಗುರುವಾರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಗುಡುಗಿದರು.

ನಗರದ ಮಿಮ್ಸ್ ಆವರಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆಯು ಪ್ರಮುಖ ರಸ್ತೆಗಳ ಮೂಲಕ ಜಯಚಾಮರಾಜೇಂದ್ರ ವೃತ್ತದವರೆಗೆ ಸಾಗಿಬಂದಿತು. ಮೆರವಣಿಗೆಯದ್ದಕ್ಕೂ ಕೇಂದ್ರ ಸರ್ಕಾರ ಹಾಗೂ ಶಿಕ್ಷಣ ಸಚಿವರ ವಿರುದ್ಧ ಧಿಕ್ಕಾರದ ಘೋಷಣೆಗಳು ಮೊಳಗಿದವು. ಶಾಸಕ ಪಿ.ರವಿಕುಮಾರ್ ಅವರು ವಿದ್ಯಾರ್ಥಿಗಳ ಜೊತೆ ಹೆಜ್ಜೆ ಹಾಕುವ ಮೂಲಕ ಹೋರಾಟಕ್ಕೆ ಸಾಥ್ ನೀಡಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಪಿ.ರವಿಕುಮಾರ್, ಕೇಂದ್ರ ಸರ್ಕಾರಕ್ಕೆ ವಿದ್ಯಾರ್ಥಿಗಳ ಮೇಲೆ ಕಿಂಚಿತ್ತೂ ಕನಿಕರವಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಶೋಕಿ ಮಾಡುವುದನ್ನು ಬಿಟ್ಟು ಮೊದಲು ವಿದ್ಯಾರ್ಥಿಗಳ ಭವಿಷ್ಯವನ್ನು ಉಳಿಸಿ. ನೀವು ಪ್ರಧಾನ ಮಂತ್ರಿಯಾಗಿರುವುದು ಕೇವಲ ವೋಟ್ ಪಡೆಯುವುದಕ್ಕಾ ಎಂದು ಖಾರವಾಗಿ ಪ್ರಶ್ನಿಸಿದರು.

ಬಿಜೆಪಿಯವರು ಕೋಟ್ಯಂತರ ರುಪಾಯಿ ಲೂಟಿ ಮಾಡಲು ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ದಾರೆ. ದೆಹಲಿಯಲ್ಲಿ ನ್ಯಾಯ ಕೇಳಲು ಹೋದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ಹಾಗೂ ಹಲ್ಲೆ ನಡೆಸಿದ್ದಾರೆ. ವಿದ್ಯಾರ್ಥಿಗಳ ಪರ ನಿಂತ ನಮ್ಮ ನಾಯಕ ರಾಹುಲ್ ಗಾಂಧಿಯವರನ್ನೇ ಬಂಧಿಸಲಾಗಿದೆ. ಇದೊಂದು ಅಪ್ಪಟ ವಿದ್ಯಾರ್ಥಿ ವಿರೋಧಿ ಸರ್ಕಾರವಾಗಿದ್ದು, ಇವರ ಆಡಳಿತದಲ್ಲಿ ವಿದ್ಯಾರ್ಥಿಗಳ ಬಾಳು ಕತ್ತಲಾಗಿದೆ ಎಂದು ಕಿಡಿಕಾರಿದರು.

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶಿಕ್ಷಣ ಸಚಿವರಾಗಲು ಸಂಪೂರ್ಣ ಅಸಮರ್ಥರು. ಇಂತಹ ಸಚಿವರು ದೇಶಕ್ಕೆ ಬೇಕಾ?, ಅವರು ನೈತಿಕ ಹೊಣೆಹೊತ್ತು ತಕ್ಷಣವೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಾವಿರಾರು ವಿದ್ಯಾರ್ಥಿಗಳನ್ನು ನಿಲ್ಲಿಸಿ ಬೃಹತ್ ರಸ್ತೆ ತಡೆ ಹೋರಾಟ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೂ ಕಾಂಗ್ರೆಸ್ ಪಕ್ಷ ನಿಮ್ಮ ಪರವಾಗಿ ಇರುತ್ತದೆ ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಕಾರ್ಯಾಧ್ಯಕ್ಷ ಎಂ.ಎಸ್.ಚಿದಂಬರ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶೈಲೇಂದ್ರ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಗೂ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರು ಆರ್ಥಿಕ ಸ್ವಾವಲಂಬನೆ ಸಾಧಿಸಿ
ಅಫಜಲಪುರದಲ್ಲಿ ಭೀಮಾ ನದಿಯ ನೀರಿನ ಕೊರತೆ: ಡೀಸಿಗೆ ಮನವಿ