ಸವಣೂರು: ರಾಜ್ಯದಲ್ಲಿ ಹಾವೇರಿ ಜಿಲ್ಲೆ 7ನೇ ಸ್ಥಾನ ಪಡೆಯಲು ಶಿಗ್ಗಾಂವಿ-ಸವಣೂರ ವಿಧಾನಸಭೆ ಕ್ಷೇತ್ರದ ಅವಳಿ ತಾಲೂಕು ಪ್ರಮುಖ ಸ್ಥಾನ ವಹಿಸಿರುವುದು ಸಂತಸ ತಂದಿದೆ ಎಂದು ಶಾಸಕ ಯಾಸೀರಅಹ್ಮದಖಾನ್ ಪಠಾಣ ತಿಳಿಸಿದರು.ಪಟ್ಟಣದ ಡಾ. ವಿ.ಕೃ. ಗೋಕಾಕ ಸಭಾಭವನದಲ್ಲಿ ಭಾನುವಾರ ಸಂಜೆ ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಶೇ. 100ರಷ್ಟು ಫಲಿತಾಂಶ ದಾಖಲಿಸಿದ ಪ್ರೌಢಶಾಲೆಗಳ ಮುಖ್ಯಗುರುಗಳಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಖ್ಯಗುರಿಯಾಗಿರುವ ಆರೋಗ್ಯ ಹಾಗೂ ಶಿಕ್ಷಣ ಕ್ಷೇತ್ರ ಅಭಿವೃದ್ಧಿಗೆ ನೀಡಿದ್ದ ಆದ್ಯ ತೆ ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಮೂಲಕ ಹೊರ ಹೊಮ್ಮಿದೆ. ಕ್ಷೇತ್ರಕ್ಕೆ ಶಿಕ್ಷಣ ಕ್ಷೇತ್ರದಲ್ಲಿ ಮತ್ತಷ್ಟು ಅಭಿವೃದ್ಧಿಗಾಗಿ ತಾಲೂಕಿನ ಮಾದಾಪೂರದಲ್ಲಿ 18 ಕೋಟಿ ರು. ಅನುದಾನದಲ್ಲಿ ವಸತಿ ಶಾಲೆ ನಿರ್ಮಾಣ, 13 ಕೆಪಿಎಸ್ ಶಾಲೆಗಳನ್ನು ಮಂಜೂರು ಮಾಡಿಸಲಾಗಿದೆ. ಶಿಕ್ಷಣ ಇಲಾಖೆ ಹಾಗೂ ಶಿಕ್ಷಕರೊಂದಿಗೆ ವಿದ್ಯಾರ್ಥಿಗಳ ಕಠಿಣ ಪರಿಶ್ರಮದಿಂದಾಗಿ ಸವಣೂರ ತಾಲೂಕು ಜಿಲ್ಲೆಯಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ ಎಂದರು.