ಕುಷ್ಟಗಿ: ಗಾರು ಮಳೆ ವೈಫಲ್ಯದಿಂದ ತಾಲೂಕಿನ ರೈತರು ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಕೃಷಿ ಇಲಾಖೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಕಚೇರಿಗಳಲ್ಲಿ ಕುಳಿತು ಕಡತ ನಿರ್ವಹಣೆಗೆ ಸೀಮಿತರಾಗದೆ ನೇರವಾಗಿ ಗ್ರಾಮಗಳಿಗೆ ತೆರಳಿ ರೈತರ ಸಮಸ್ಯೆ ಆಲಿಸಿ ಪರಿಹಾರ ಕಲ್ಪಿಸಬೇಕು ಎಂದು ಶಾಸಕ ದೊಡ್ಡನಗೌಡ ಪಾಟೀಲ ಸೂಚಿಸಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ನಾಗರಾಜ ಕಾತರಕಿ ಮಾತನಾಡಿ, ಜೂನ್ ತಿಂಗಳಲ್ಲಿ ಶೇ. 21 ಹಾಗೂ ಜುಲೈ ತಿಂಗಳಲ್ಲಿ ಶೇ. 23 ಮಳೆ ಕೊರತೆ ದಾಖಲಾಗಿದೆ. ತಾಲೂಕಿನಲ್ಲಿ ಒಟ್ಟು 70845 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ನಡೆದಿದ್ದು, ಮಳೆ ಕೊರತೆಯಿಂದ ಬಹುತೇಕ ಬೆಳೆ ಒಣಗುತ್ತಿವೆ ಎಂದು ಮಾಹಿತಿ ನೀಡಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಪಾಟೀಲ, ಅಧಿಕಾರಿಗಳು ಪ್ರತಿ ಗ್ರಾಮಕ್ಕೂ ತೆರಳಿ ಬೆಳೆ ಹಾನಿಯ ವಾಸ್ತವ ಸ್ಥಿತಿ ಪರಿಶೀಲಿಸಿ ವರದಿ ಸಲ್ಲಿಸಿ ರೈತರಿಗೆ ಸರ್ಕಾರದ ಪರಿಹಾರ ದೊರೆಯಲು ಅನುಕೂಲ ಮಾಡಿಕೊಡಬೇಕು. ಎಲ್ಲ ಅರ್ಹ ರೈತರಿಗೂ ಎಫ್ಐಡಿ ಮಾಡಿಸಬೇಕು. ಸರ್ಕಾರದ ಗಮನಕ್ಕೆ ವಾಸ್ತವ ಚಿತ್ರಣ ತಲುಪಬೇಕು ಎಂದರು.ಸಿಪಿಐ ವಿಶ್ವನಾಥ ಹಿರೇಗೌಡರ ಮಾತನಾಡಿ, ವಿಂಡ್ ಪವರ್ ಕಂಪನಿಗಳ ಸಿಬ್ಬಂದಿಯಿಂದ ರೈತರ ಮೇಲೆ ಹಲ್ಲೆ ನಡೆದಿರುವ ಪ್ರಕರಣ ದಾಖಲಾಗಿವೆ, ಯಾವುದೇ ವ್ಯಕ್ತಿ ಕಾನೂನನ್ನು ಕೈಗೆತ್ತಿಕೊಂಡರೆ ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು ಗಾಂಜಾ ಮಾರಾಟ ಹಾಗೂ ಬಳಕೆ ಸಂಪೂರ್ಣವಾಗಿ ನಿಯಂತ್ರಿಸಬೇಕು. ಅಪ್ರಾಪ್ತ ವಯಸ್ಕರಿಂದ ವಾಹನ ಚಾಲನೆ ನಡೆಯದಂತೆ ಕಾರ್ಯಾಚರಣೆ ನಡೆಸಬೇಕು. ವಿಂಡ್ ಪವರ್ ಕಂಪನಿ, ರೈತರ ನಡುವೆ ನಡೆಯುತ್ತಿರುವ ಸಂಘರ್ಷ ಕೂಡಲೇ ನಿಯಂತ್ರಿಸಿ ರೈತರ ಹಿತ ಕಾಪಾಡಬೇಕು ಎಂದು ನಿರ್ದೇಶನ ನೀಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ.ಆನಂದ ಗೊಟೂರು ಮಾತನಾಡಿ, ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಕುಷ್ಟಗಿಯಲ್ಲಿ ನಿರ್ಮಾಣಗೊಂಡಿರುವ ಎಂಸಿಎಚ್ ಆಸ್ಪತ್ರೆಯನ್ನು ಶೀಘ್ರ ಆರಂಭಿಸಲಾಗುವುದು ಎಂದು ಮಾಹಿತಿ ನೀಡಿದರು.
ತಹಸೀಲ್ದಾರ್ ಅಶೋಕ ಶಿಗ್ಗಾಂವಿ ಮಾತನಾಡಿ, ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಕಾರ್ಯ ಶೇ. 82ರಷ್ಟು ಪೂರ್ಣಗೊಂಡಿದ್ದು, ಸಾರ್ವಜನಿಕರಿಂದ ಉತ್ತಮ ಸಹಕಾರ ದೊರೆತಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಕೃಷ್ಣಮೂರ್ತಿ ಟೆಂಗುಂಟಿ, ತಾಪಂ ಇಒ ಅಮರೇಶ್, ತಹಸೀಲ್ದಾರ್ ಅಶೋಕ ಶಿಗ್ಗಾಂವಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಗೋಪಾಲರಾವ್ ಕುಲಕರ್ಣಿ, ಟಿಎಪಿಸಿಎಂಎಸ್ ಅಧ್ಯಕ್ಷ ಶೇಖರಗೌಡ ಮಾಲಿಪಾಟೀಲ, ಕೆಡಿಪಿ ನಾಮನಿರ್ದೇಶಿತ ಸದಸ್ಯ ಶ್ಯಾಮರಾವ್ ಕುಲಕರ್ಣಿ, ಯಲ್ಲಪ್ಪ ಬಾಗಲಿ, ಹನಮಗೌಡ ಪಾಟೀಲ, ಸೈಯದ್ ಅನ್ವರ್ ಅತ್ತಾರ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.