ಜಾನುವಾರಿಗೆ ಗೋಶಾಲೆ ತೆರೆಯಲು ಶೀಘ್ರ ಪ್ರಸ್ತಾವನೆ ಸಲ್ಲಿಸಿ: ಜಿಲ್ಲಾಧಿಕಾರಿ ಶ್ರೀರೂಪ

KannadaprabhaNewsNetwork |  
Published : Sep 14, 2026, 02:15 AM IST
11ಸಿಎಚ್‌ಎನ್‌53ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಕುರಿತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯನ್ನು ಜಿಲ್ಲಾಧಿಕಾರಿ ಶ್ರೀರೂಪ ಅವರು ನಡೆಸಿದರು. | Kannada Prabha

ಸಾರಾಂಶ

ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಿಸಲಾಗಿದ್ದು, ಜಾನುವಾರು ಮೇವು, ನೀರಿಗೆ ಸಮಸ್ಯೆಯಾಗದಂತೆ ಗೋಶಾಲೆ ತೆರೆಯಲು ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯನ್ನು ಬರ ಪೀಡಿತ ಎಂದು ಘೋಷಿಸಲಾಗಿದ್ದು, ಜಾನುವಾರು ಮೇವು, ನೀರಿಗೆ ಸಮಸ್ಯೆಯಾಗದಂತೆ ಗೋಶಾಲೆ ತೆರೆಯಲು ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬರ ನಿರ್ವಹಣೆ ಕುರಿತು ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲ ತಾಲೂಕುಗಳು ಬರಪೀಡಿತವಾಗಿದ್ದು, ಜಾನುವಾರುಗಳ ಮೇವು, ಕುಡಿಯುವ ನೀರಿಗೆ ಯಾವುದೇ ತೊಂದರೆಯಾಗದAತೆ ನೋಡಿಕೊಳ್ಳಬೇಕಿದೆ. ಈ ಹಿನ್ನೆಲೆಯಲ್ಲಿ ಎಲ್ಲೆಲ್ಲಿ ಗೋಶಾಲೆ ತೆರೆಯಬೇಕಾದ ಅಗತ್ಯವಿದೆ ಎಂಬ ವಿವರ ಮಾಹಿತಿಯನ್ನೊಳಗೊಂಡ ಪ್ರಸ್ತಾವನೆಯನ್ನು ಕೂಡಲೇ ಸಲ್ಲಿಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ಬರ, ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ವಿಪತ್ತು ಪ್ರತಿಕ್ರಿಯೆ ನಿಧಿ ಮಾರ್ಗಸೂಚಿಗಳಲ್ಲಿನ ಮಾನದಂಡದ ಅಧಾರದ ಮೇಲೆ ಪರಿಹಾರ ಹಾಗೂ ನೆರವು ಕಾರ್ಯಗಳನ್ನು ಕೈಗೊಳ್ಳಬೇಕಿದೆ. ಬರದಂತಹ ಪರಿಸ್ಥಿತಿಯಲ್ಲಿ ಜಾನುವಾರುಗಳಿಗೆ ಮೇವು, ನೀರು, ಆರೋಗ್ಯಪಾಲನಾ ಸೇವೆಗಳನ್ನು ಒದಗಿಸುವ ಮೂಲಕ ರೈತರಿಗೆ ನೆರವಾಗಬೇಕಿದೆ. ಹೀಗಾಗಿ ಜಿಲ್ಲೆಯ ಯಾವ ಭಾಗದಲ್ಲಿ ಜಾನುವಾರುಗಳ ಸಂಖ್ಯೆ ಹೆಚ್ಚು ಇದೆ, ಮೇವು ಕುಡಿಯುವ ನೀರಿಗೆ ಎಲ್ಲಿ ಹೆಚ್ಚು ಅಭಾವ ಕಂಡುಬಂದಿದೆ ಎಂಬ ವಿವರವನ್ನು ಒಳಗೊಂಡಂತೆ ಗೋಶಾಲೆ ತೆರೆಯಬೇಕಾದ ಸ್ಥಳಗಳ ಕುರಿತು ತಕ್ಷಣವೇ ವರದಿ ಹಾಗೂ ಪ್ರಸ್ತಾವನೆ ಕಳುಹಿಸಬೇಕು ಎಂದರು.

ಜನರಿಗೆ ಕುಡಿಯುವ ನೀರಿನ ಅಭಾವವಿರುವ ಪ್ರದೇಶಗಳಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ವಿವರ ಪಡೆದ ಜಿಲ್ಲಾಧಿಕಾರಿಯವರು ಎಲ್ಲಿ ನೀರಿನ ಲಭ್ಯತೆ ಇದೆಯೋ ಅಂತಹ ಕಡೆ ಕೊಳವೆಬಾವಿ ದುರಸ್ಥಿ ಇನ್ನಿತರ ಕೆಲಸಗಳನ್ನು ಶೀಘ್ರವಾಗಿ ಕೈಗೊಂಡು ನೀರು ಒದಗಿಸಬೇಕು ಎಂದರು.

ಕುಡಿಯುವ ನೀರಿನ ಸಮಸ್ಯೆ ಆಲಿಕೆ ಹಾಗೂ ಪರಿಹಾರಕ್ಕಾಗಿ ನಿಯೋಜಿತರಾಗಿರುವ ನೋಡಲ್ ಅಧಿಕಾರಿಗಳು ವ್ಯಾಪಕವಾಗಿ ಕನಿಷ್ಠ ಮೂರು ದಿನಕೊಮ್ಮೆ ತಮಗೆ ನಿಯೋಜಿಸಲಾದ ಗ್ರಾಮಗಳಿಗೆ ಭೇಟಿ ನೀಡಬೇಕು. ವಾಸ್ತವ ಪರಿಸ್ಥಿತಿ ಅರಿತು ಸಂಬಂಧಪಟ್ಟ ಎಂಜಿನಿಯರ್, ಪಿಡಿಒಗಳನ್ನು ಸಂಪರ್ಕಿಸಿ ತಕ್ಷಣವೇ ಸಮಸ್ಯೆ ಪರಿಹಾರ ಮಾಡಬೇಕು. ಪ್ರಸ್ತುತ ಬರ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆಗೆ ನಿರಂತರ ನಿಗಾ ವಹಿಸಬೇಕು ಎಂದು ತಾಕೀತು ಮಾಡಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎನ್. ಶಶಿಧರ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಡಿ.ಸಿ. ಶೃತಿ, ಪಶು ಸಂಗೋಪನೆ ಇಲಾಖೆಯ ಉಪನಿರ್ದೇಶಕರಾದ ಡಾ. ಮಂಜುನಾಥ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಇಮ್ಯಾನುವಲ್ ಸಂತೋಷ್, ಕೃಷಿ ಇಲಾಖೆ ಉಪನಿರ್ದೇಶಕರಾದ ಭಾಸ್ಕರ್, ತೋಟಗಾರಿಕೆ ಇಲಾಖೆ ಜಂಟಿ ನಿರ್ದೇಶಕರಾದ ಗಿರೀಶ್, ಜಿಲ್ಲಾ ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ಜಿಲ್ಲೆಯ ತಹಸೀಲ್ದಾರರು, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು, ನೋಡಲ್ ಅಧಿಕಾರಿಗಳಾಗಿ ನೇಮಕಗೊಂಡ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಿಂದೂ ಧಾರ್ಮಿಕ ಆಚರಣೆಗಳಿಗೆ ನಿರ್ಬಂಧವೇಕೆ
ಗಜಮುಖನ ಸ್ವಾಗತಕ್ಕೆ ಹುಬ್ಬಳ್ಳಿ ಸಜ್ಜು!