ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕನ್ನಡಪ್ರಭ ವಾರ್ತೆ ಹಾವೇರಿ
ಜಿಲ್ಲೆಯಲ್ಲಿ ಮಹಿಳೆ ಹಾಗೂ ಮಕ್ಕಳ ಕಾಣೆಯಾದ ಪ್ರಕರಣಗಳ ಬಗ್ಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆದು ನಿಖರವಾದ ವರದಿ ಸಲ್ಲಿಸಬೇಕು. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮೀಣ ಭಾಗದಲ್ಲಿ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವ, ಬಾಲ್ಯವಿವಾಹ ನಿಷೇಧ ಸಮನ್ವಯ ಹಾಗೂ ಪರಿಶೀಲನಾ ಸಮಿತಿ, ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ, ಸ್ವಾಧಾರ ಗೃಹ ಯೋಜನೆ, ವಿಧವಾ ಕೋಶದ, ಒನ್ ಸ್ಟಾಪ್ ಸೆಂಟರ್ ಜಿಲ್ಲಾ ಮಟ್ಟದ ಸಮಿತಿ ಸಭೆ ಹಾಗೂ ಜಿಲ್ಲಾ ಮಟ್ಟದ ಸ್ವತಂತ್ರ ವಿಶೇಷ ಕಾರ್ಯಪಡೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಅಗತ್ಯ ರಕ್ಷಣೆ ನೀಡಬೇಕು. ನೊಂದ ಮಹಿಳೆಯರಿಗೆ ನ್ಯಾಯ ಒದಗಿಸುವಲ್ಲಿ ಸಂಬಂಧಿಸಿದ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಬಾಲ್ಯವಿವಾಹ ನಿಷೇಧ ಕಾಯ್ದೆ ಕುರಿತು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ನಿಗದಿತ ಅವಧಿಯಲ್ಲಿ ಸಭೆಗಳನ್ನು ನಡೆಸಬೇಕು. ದೌರ್ಜನ್ಯ ಹಾಗೂ ಬಾಲ್ಯ ವಿವಾಹ ಪ್ರಕರಣಗಳಲ್ಲಿ ಸರ್ಕಾರಿ ಹಾಗೂ ಖಾಸಗಿ ಕೇಂದ್ರಗಳಲ್ಲಿ ಆಶ್ರಯ ಪಡೆದವರಿಗೆ ಸಮಸ್ಯೆಗಳಾದಲ್ಲಿ ಅವರ ಸಮಸ್ಯೆಗಳನ್ನು ತಿಳಿಸಲು ಸಹಾಯವಾಣಿ ಸಂಖ್ಯೆ ೧೦೯೮ ಹಾಗೂ ಸಂಬಂಧಿಸಿದ ಅಧಿಕಾರಿಗಳ ಸಂಖ್ಯೆಯನ್ನು ಎಲ್ಲ ಕೇಂದ್ರಗಳಲ್ಲಿ ಮಾಹಿತಿ ಫಲಕ ಅಳವಡಿಸಬೇಕು ಎಂದು ಸೂಚನೆ ನೀಡಿದರು.
ಬಾಲ್ಯ ವಿವಾಹ ಪ್ರಕರಣಗಳಲ್ಲಿ ಗುರುತಿಸಲಾದ ಮಕ್ಕಳ ವಿದ್ಯಾಭ್ಯಾಸ ಕುರಿತು ಗಮನಹರಿಸಬೇಕು. ಯಾವ ಶಾಲೆಯಲ್ಲಿ ಓದುತ್ತಿದ್ದಾರೆ ಎಂಬ ಮಾಹಿತಿ ಹೊಂದಿರಬೇಕು. ಈ ಪ್ರಕರಣಗಳ ಕುರಿತು ಒಂದು ವಾರದಲ್ಲಿ ನಿಖರ ಮಾಹಿತಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಬಿಪಿಎಲ್ ಕಾರ್ಡ್ ಹೊಂದಿದ ಏಕ ಸದಸ್ಯ ವಿಧವೆಯರಿಗೆ ವಿಧವಾ ವೇತನ ಮಂಜೂರಾತಿಗೆ ಹಾಗೂ ನಿವೇಶನ ರಹಿತರಿಗೆ ವಿವಿಧ ಯೋಜನೆಗಳಡಿ ವಸತಿ ಸೌಲಭ್ಯಕ್ಕೆ ಆದ್ಯತೆ ನೀಡುವಂತೆ ಸೂಚನೆ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದರ್ತಿ ಮಾತನಾಡಿ, ಜಿಲ್ಲೆಯಲ್ಲಿ ಡಿ.ವಿ.ಆಕ್ಟ್ ಅಡಿಯಲ್ಲಿ ಕಳೆದ ಜೂನ್‌ನಿಂದ ಡಿಸೆಂಬರ್‌ವರೆಗೆ ಒಟ್ಟು ೫೫೭ ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ ಮೂರು ಪ್ರಕರಣಗಳು ನ್ಯಾಯಾಲಯದಲ್ಲಿ, ೪೩೦ ಸಾಂತ್ವನ ಕೇಂದ್ರಗಳಲ್ಲಿ ಹಾಗೂ ಒಂದು ಕೌನ್ಸಲಿಂಗ್ ಮೂಲಕ ಇತ್ಯರ್ಥವಾಗಿವೆ. ೨೨ ಬಾಲ್ಯವಿವಾಹಗಳನ್ನು ತಡೆಯಲಾಗಿದೆ. ೧೭ ಮಕ್ಕಳು ವಿದ್ಯಾಭ್ಯಾಸ ಮುಂದುವರೆಸಿದ್ದಾರೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಕಳೆದ ಎರಡು ವರ್ಷದಲ್ಲಿ ೪೭೧೮ ಜನರಿಗೆ ವಿಧವಾ ವೇತನ ಮಂಜೂರು ಮಾಡಲಾಗಿದೆ. ಶಿಗ್ಗಾಂವಿ ತಾಲೂಕಿನಲ್ಲಿ ರಾಜೀವ ಗಾಂಧಿ ವಸತಿ ನಿಗಮದಿಂದ ೧೧೧ ಜನರಿಗೆ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಬ್ಯಾಡಗಿ ತಾಲೂಕಿನಲ್ಲಿ ದೇವರಾಜ ಅರಸು ವಸತಿ ಯೋಜನೆ ೨೭ ಹಾಗೂ ಗ್ರಾಮೀಣ ವಿಶೇಷ ವರ್ಗ ಯೋಜನೆಯಡಿ ೯೫ ವಸತಿ ಸೌಲಭ್ಯ ನೀಡಲಾಗಿದೆ ಎಂದರು.
ಸಭೆಯಲ್ಲಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ರೇಷ್ಮಾ ಕೌಸರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ, ಜಿಲ್ಲಾ ಮಕ್ಕಳ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಎಚ್.ಎಸ್. ಮಜೀದ್, ತಾಲೂಕಾ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಸ್ವಯಂ ಸೇವಾ ಪದಾಧಿಕಾರಿಗಳು ಉಪಸ್ಥಿತರಿದ್ದರು.