ರೊಬೊಟಿಕ್ ತಂತ್ರಜ್ಞಾನದಿಂದ ಯಶಸ್ವಿ ಶಸ್ತ್ರಚಿಕಿತ್ಸೆ

KannadaprabhaNewsNetwork |  
Published : Jul 18, 2024, 01:39 AM IST
ಕೆಎಲ್‌ಇ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಎಂ.ದಯಾನಂದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ರೊಬೊಟಿಕ್‌ ತಂತ್ರಜ್ಞಾನದ ಮೂಲಕ ಇಬ್ಬರಿಗೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಎಂ.ದಯಾನಂದ ತಿಳಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ರೊಬೊಟಿಕ್‌ ತಂತ್ರಜ್ಞಾನದ ಮೂಲಕ ಇಬ್ಬರಿಗೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಮಾಡಲಾಗಿದೆ ಎಂದು ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಎಂ.ದಯಾನಂದ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ವೈದ್ಯವಿಜ್ಞಾನದ ತಂತ್ರಜ್ಞಾನದಲ್ಲಿ ಸಾಕಷ್ಟು ಬದಲಾವಣೆಗಳಾಗುತ್ತಿದ್ದು, ಅದಕ್ಕೆ ತಕ್ಕಂತೆ ಆಸ್ಪತ್ರೆಗಳೂ ತಂತ್ರಜ್ಞಾನ ಅಳವಡಿಸಿಕೊಳ್ಳುತ್ತಿವೆ. ವೈದ್ಯ ವಿಜ್ಞಾನದಲ್ಲಿ ನಿಖರ ಶಸ್ತ್ರಚಿಕಿತ್ಸೆಯನ್ನು ನೆರವೇರಿಸಲು ರೊಬೊಟಿಕ್ ತಂತ್ರಜ್ಞಾನ ಸಾಕಷ್ಟು ಸಹಕಾರಿಯಾಗಿದೆ ಎಂದು ವಿಶ್ಲೇಷಿಸಿದರು.

ಇಬ್ಬರು ರೋಗಿಗಳಿಗೆ ಶಸ್ತ್ರಚಿಕಿತ್ಸೆ:

ಉತ್ತರ ಕರ್ನಾಟಕದಲ್ಲಿ ಪ್ರಥಮ ಬಾರಿಗೆ ರೊಬೊಟಿಕ್ ತಂತ್ರಜ್ಞಾನವನ್ನು ಕೆಎಲ್ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರ ಅಳವಡಿಸಿಕೊಂಡಿದೆ. ಭಾರತದಲ್ಲಿಯೇ ತಯಾರಿಸಿದ ಎಸ್ಎಸ್ಐ ತಂತ್ರಜ್ಞಾನ ಸರ್ಜಿಕಲ್ ರೊಬೊಟಿಕ್ ಇದಾಗಿದೆ. ಅತ್ಯಂತ ನಿಖರವಾಗಿ ಶಸ್ತ್ರಚಿಕಿತ್ಸೆ ನೆರವೇರಿಸುವಲ್ಲಿ ಸಹಕಾರಿಯಾಗಿದೆ. ರೊಬೊಟಿಕ್ ತಂತ್ರಜ್ಞಾನದಿಂದ ಇಬ್ಬರು ಕ್ಯಾನ್ಸರ್‌ ರೋಗಿಗಳಿಗೆ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನೆರವೇರಿಸಲಾಗಿದೆ. ಅನ್ನನಾಳ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 62 ವರ್ಷ ಮತ್ತು 70 ವರ್ಷದ ರೋಗಿಗಳಿಗೆ ಸುಮಾರು 8 ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನೆರವೇರಿಸಲಾಯಿತು. ಕ್ಯಾನ್ಸರ್‌ ಶಸ್ತ್ರಚಿಕಿತ್ಸಕ ಡಾ.ಮಹೇಶ ಕಲ್ಲೋಳ್ಳಿ, ಡಾ.ಕುಮಾರ ವಿಂಚುರಕರ ಹಾಗೂ ಡಾ.ದಿವಾಕರ, ಡಾ.ರಾಹುಲ್ ಕಿನವಾಡೆಕರ ಅವರಿಗೆ ಅರಿವಳಿಕೆ ತಜ್ಞವೈದ್ಯ ಡಾ.ರಾಜೇಶ ಮಾನೆ ಸಹಕರಿಸಿರುವುದಾಗಿ ಮಾಹಿತಿ ನೀಡಿದರು.

ಕಳೆದ ಎರಡು ದಶಕಗಳಲ್ಲಿ ರೊಬೊಟಿಕ್ ತಂತ್ರಜ್ಞಾನ ಆರೋಗ್ಯ ಕ್ಷೇತ್ರದಲ್ಲೂ ವಿಶ್ವಾಸಾರ್ಹತೆ ಗಳಿಸುತ್ತಿದೆ. ರೊಬೊಟಿಕ್ ಶಸ್ತ್ರಚಿಕಿತ್ಸೆಯ ವಿಧಾನವು ನಿರಂತರವಾಗಿ ಅಭಿವೃದ್ಧಿಗೊಳ್ಳುತ್ತಿದೆ. ರೊಬೊಟ್ ಶಸ್ತ್ರಚಿಕಿತ್ಸಾ ಉಪಕರಣಗಳನ್ನು ವೈದ್ಯರಿಗೆ ನೀಡುವುದು, ಅತ್ಯಂತ ಸಂಕೀರ್ಣವಾದ ಶಸ್ತ್ರಚಿಕಿತ್ಸಾ ವಿಧಾನಗಳನ್ನು ನಿರ್ವಹಿಸುವುದು ಸೇರಿದಂತೆ ಅನೇಕ ಕಾರ್ಯಗಳನ್ನು ನಿರ್ವಹಿಸುತ್ತದೆ. ರೊಬೊಟಿಕ್ ಸಹಕಾರದಿಂದ ನೆರವೇರಿಸುವ ಕ್ಯಾನ್ಸರ್‌ನ ಶಸ್ತ್ರಚಿಕಿತ್ಸೆಯು ಅತ್ಯಂತ ಪರಿಣಾಮಕಾರಿ ಎಂದು ಕಂಡು ಬಂದಿದೆ ಎಂದು ವಿವರಿಸಿದರು.

----------------------------------

ಕೋಟ್‌.......

ಮೂರು ದಶಕಗಳ ಹಿಂದೆ ವೈದ್ಯವಿಜ್ಞಾನದ ತಂತ್ರಜ್ಞಾನಕ್ಕೆ ಪರಿಚಿತವಾದ ರೊಬೊಟಿಕ್ ಇಂದು ಕ್ರಾಂತಿಕಾರಿ ತಂತ್ರಜ್ಞಾನವಾಗಿದೆ. ಶಸ್ತ್ರಚಿಕಿತ್ಸೆಯಲ್ಲಿ ಅದ್ಭುತ ಕೊಡುಗೆ ನೀಡುತ್ತ ನಿರಂತರ ಅಭಿವೃದ್ಧಿಗೊಳ್ಳುತ್ತಿದೆ. ರೊಬೊಟಿಕ್‌ನಿಂದ ವೈದ್ಯರು ಅತ್ಯಂತ ಕ್ಲಿಷ್ಟಕರವಾದ ಹಾಗೂ ಸಂಕೀರ್ಣತೆಯಿಂದ ಕೂಡಿದ ಶಸ್ತ್ರಚಿಕಿತ್ಸೆಗಳನ್ನು ನೆರವೇರಿಸಲು ಇದು ಸಹಕಾರಿಯಾಗಲಿದೆ.

- ಡಾ.ಎಂ.ದಯಾನಂದ,ಆಸ್ಪತ್ರೆ ವೈದ್ಯಕೀಯ ನಿರ್ದೇಶಕ

--------------------------

ಬಾಕ್ಸ್‌

ರೊಬೊಟಿಕ್‌ ಚಿಕಿತ್ಸೆ ಹೇಗೆ...?

3ಡಿ ತಂತ್ರಜ್ಞಾನ, ಹೈಡೆಫಿನೇಷನ್ ಕ್ಯಾಮರಾ ಹಾಗೂ ಅತ್ಯಾಧುನಿಕ ಉಪಕರಣಗಳನ್ನು ಹೊಂದಿರುವುದರಿಂದ ಶಸ್ತ್ರಚಿಕಿತ್ಸೆಯ ಸ್ಥಳವನ್ನು ನಿಖರವಾಗಿ ತಲುಪಬಹುದು. ಇದರಿಂದ ಶಸ್ತ್ರಚಿಕಿತ್ಸೆಯನ್ನು ಸುಲಭವಾಗಿ ನೆರವೇರಿಸಲು ಸಹಕರಿಸುತ್ತದೆ. ತೆರೆದ ಶಸ್ತ್ರಚಿಕಿತ್ಸೆಗೆ ಹೋಲಿಸಿದರೆ, ರೊಬೊಟಿಕ್ ಶಸ್ತ್ರಚಿಕಿತ್ಸೆಗೆ ಸಣ್ಣ ರಂಧ್ರದ ಅಗತ್ಯವಿರುತ್ತದೆ. ಇದರಿಂದ ಸುತ್ತಮುತ್ತಲಿನ ಅಂಗಾಂಶಗಳಿಗೆ ಕಡಿಮೆ ತೊಂದರೆಯುಂಟಾಗುತ್ತದೆ. ಅಲ್ಲದೇ ರಕ್ತಸ್ರಾವ ಕಡಿಮೆಯಾಗಿ ರೋಗಿಗಳು ಶೀಘ್ರವಾಗಿ ಗುಣಮುಖರಾಗುತ್ತಾರೆ. ರೊಬೊಟಿಕ್ ತಂತ್ರಜ್ಞಾನವು ಶಸ್ತ್ರಚಿಕಿತ್ಸಕರಿಗೆ ಸಾಂಪ್ರದಾಯಿಕ ಲ್ಯಾಪ್ರೋಸ್ಕೋಪಿಕ್ ಉಪಕರಣಕ್ಕಿಂತ ಹೆಚ್ಚು ಸಹಕಾರಿಯಾಗಿದೆ. ದೀರ್ಘಾವಧಿವರೆಗಿನ ಶಸ್ತ್ರಚಿಕಿತ್ಸೆಗಳನ್ನು ಅನಾಯಾಸವಾಗಿ ನಡೆಸುವುದರಿಂದ ಶಸ್ತ್ರಚಿಕಿತ್ಸಕರ ಮೇಲಿನ ದೈಹಿಕ ಒತ್ತಡವನ್ನು ಕಡಿಮೆ ಮಾಡಲಿದೆ ಎಂದು ಹೇಳಿದರು.

ತೆರೆದ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ರೋಗಿಗಳಿಗೆ ಹೋಲಿಸಿದರೆ ರೊಬೊಟಿಕ್ ಶಸ್ತ್ರಚಿಕಿತ್ಸೆಗೊಳಗಾದ ರೋಗಿಗಳಲ್ಲಿ ಸೋಂಕಿನ ಅಪಾಯ ಕಡಿಮೆ. ಶೀಘ್ರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಬಹುದು. ಅಲ್ಲದೇ ಲ್ಯಾಪ್ರೋಸ್ಕೋಪಿಕ್ ಮತ್ತು ತೆರೆದ ಶಸ್ತ್ರಚಿಕಿತ್ಸಾ ವಿಧಾನಗಳಿಗಿಂತ ಹೆಚ್ಚಿನ ಸಂದರ್ಭಗಳಲ್ಲಿ ಇದನ್ನು ಆದ್ಯತೆಯನ್ನಾಗಿ ಮಾಡುವುದರಿಂದ ಹಲವು ಪ್ರಯೋಜನಗಳಿವೆ. ರೊಬೊಟಿಕ್ ಶಸ್ತ್ರಚಿಕಿತ್ಸೆಯು ರೋಗಿಗಳ ಮೇಲೆ ಧನಾತ್ಮಕವಾಗಿ ಪರಿಣಾಮ ಬೀರಿದರೂ ಮೂಲಸೌಕರ್ಯ, ಉಪಕರಣಗಳ ಆಮದು ವೆಚ್ಚದಿಂದಾಗಿ ಈ ತಂತ್ರಜ್ಞಾನ ಬಳಕೆ ನಿಧಾನಗತಿಯಲ್ಲಿದೆ ಎಂದು ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಕ್ಯಾನ್ಸರ್‌ ತಜ್ಞ ವೈದ್ಯ ಡಾ.ಕುಮಾರ ವಿಂಚುರಕರ ಹಾಗೂ ಡಾ.ಮಹೇಶ ಕಲ್ಲೋಳ್ಳಿ ಉಪಸ್ಥಿತರಿದ್ದರು.----------

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!