ಕನ್ನಡಪ್ರಭ ವಾರ್ತೆ ರಾಯಚೂರುಜಿಲ್ಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಕೈಗೊಂಡ ಕಾಮಗಾರಿಯನ್ನು ವೈಜ್ಞಾನಿಕವಾಗಿ ನಿರ್ವಹಿಸಿ ಪ್ರತಿ ಮನೆಗೂ ಶುದ್ಧ ಕುಡಿಯುವ ನೀರು ಒದಗಿಸಲು ಅಗತ್ಯ ಕ್ರಮ ವಹಿಸುವಂತೆ ಸಂಸದ ಜಿ.ಕುಮಾರ ನಾಯಕ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಶುಕ್ರವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಅಭಿವೃದ್ಧಿ ಸಮಸ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು.ಜಲಜೀವನ್ ಮಿಷನ್ ಯೋಜನೆಯು ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಗ್ರಾಮೀಣ ಪ್ರದೇಶದ ಪ್ರತಿ ಮನೆಗೂ ವೈಯಕ್ತಿಕವಾಗಿ ನಳ ಸಂಪರ್ಕಗಳ ಮೂಲಕ ಸುರಕ್ಷಿತವಾಗಿ ಸಮರ್ಪಕ ಶುದ್ಧ ಕುಡಿಯುವ ನೀರು ಒದಗಿಸುವ ಗುರಿಯನ್ನು ಹೊಂದಿದೆ. ಈ ಯೋಜನೆಯಡಿಯಲ್ಲಿ ನಿರ್ವಹಿಸುತ್ತಿರುವ ಕಾಮಗಾರಿಯನ್ನು ಗ್ರಾಮದಲ್ಲಿ ನೀರಿನ ಮೂಲಗಳನ್ನು ಗುರುತಿಸಿ ವೈಜ್ಞಾನಿಕವಾಗಿ ಪೈಪ್ ಅಳವಡಿಸಿ ಸಮರ್ಪಕವಾಗಿ ಸಂಪರ್ಕ ಕಲ್ಪಿಸಲು ಅಗತ್ಯ ಕ್ರಮ ವಹಿಸಿ, ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕೆಂದು ಅಧಿಕಾರಿ ಗಳಿಗೆ ಸೂಚಿಸಿದರು.
ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಗೆ ಸೌಲಭ್ಯವನ್ನು ಒದಗಿಸಬೇಕು ಯೋಜನೆಯ ಉದ್ದೇಶವನ್ನು ಹೆಚ್ಚಿನ ಮಟ್ಟದಲ್ಲಿ ಪ್ರಚಾರ ಮಾಡಬೇಕು ಅಲ್ಲದೆ ಮಣ್ಣು ಆರೋಗ್ಯ ಕಾಡು ಹೆಚ್ಚಿನ ರೈತರಿಗೆ ವಿತರಣೆ ಮಾಡಬೇಕು ಆರೋಗ್ಯ ಕಾರ್ಡ್ ವಿತರಣೆ ಲಾಭದ ಕುರಿತು ಅವರಿಗೆ ಮನವರಿಕೆ ಮಾಡಬೇಕು ಎಂದರು.ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಜಿಲ್ಲೆಯಲ್ಲಿ ಹೆಚ್ಚಿನ ರೈತರು ನೋಂದಾವಣೆ ಮಾಡಲು ಕ್ರಮ ವಹಿಸಬೇಕು. ಯೋಜನೆಯಡಿ ಯಾವುದೇ ಲೋಪದೋಷಗಳು ಆಗದಂತೆ ನೋಡಿಕೊಳ್ಳಬೇಕು. ಜಿಲ್ಲೆಯಲ್ಲಿ ಕೆಲ ಭಾಗದಲ್ಲಿ ಹೆಚ್ಚಿನ ಮಳೆಯಾಗಿದ್ದು, ಹತ್ತಿ ಬೆಳೆೆ ಹಾನಿಯಾಗಿದೆ. ರೈತರು ಸಂಬಂಧಿಸಿದ ಇಲಾಖೆಯನ್ನು ಸಂಪರ್ಕ ಮಾಡಿದ್ದಲಿ ಇಲಾಖೆಯ ಅಧಿಕಾರಿಗಳು ರೈತರ ನೆರವಿಗೆ ಸ್ಪಂದಿಸಬೇಕೆಂದರು.
ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ತೋಟಗಾರಿಕೆ ಇಲಾಖೆ ವತಿಯಿಂದ ಅರ್ಹ ರೈತರಿಗೆ ಹೆಚ್ಚಿನ ಸಹಕಾರ ನೀಡಬೇಕು. ಅಲ್ಲದೆ ತೋಟಗಾರಿಕೆ ಇಲಾಖೆ ಯ ಸೌಲಭ್ಯವುಗಳನ್ನು ಒದಗಿಸಬೇಕು. ಜಿಲ್ಲೆಯಲ್ಲಿ ತೋಟಗಾರಿಕೆ ಬೆಳೆಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು. ಈ ಕುರಿತು ರೈತರಲ್ಲಿ ಜಾಗೃತಿ ಮೂಡಿಸಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜಿಲ್ಲೆಯಲ್ಲಿ ಉತ್ತಮ ರಸ್ತೆ ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಕಾಮಗಾರಿಯಲ್ಲಿ ಯಾವುದೇ ಕಳಪೆ ಕಂಡುಬಾರದ ರೀತಿಯಲ್ಲಿ ಎಚ್ಚರಿಕೆ ವಹಿಸಬೇಕು. ಜಿಲ್ಲೆಯಲ್ಲಿ ಇತ್ತೀಚಿಗೆ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಅಪಘಾತಗಳಾಗುತ್ತಿದ್ದು, ರಸ್ತೆಗಳನ್ನು ಕೂಡಲೇ ರಿಪೇರಿ ಮಾಡಿ ಸಾರ್ವಜನಿಕರ ಪ್ರಯಾಣಕ್ಕೆ ಅನುಕೂಲ ಮಾಡಬೇಕು. ಅಲ್ಲದೆ ರಸ್ತೆಗಳ ಮೇಲೆ ರೋಡ್ ಬ್ರೇಕ್‌ಗಳನ್ನು ಹಾಕಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕಾ ಸಂಸ್ಥೆಗಳನ್ನು ಸ್ಥಾಪಿಸಿ, ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಒದಗಿಸಬೇಕು. ಸ್ವಯಂ ಉದ್ಯೋಗ ಪ್ರಾರಂಭ ಮಾಡುವವರಿಗೆ ಹೆಚ್ಚಿನ ಸಾಲ-ಸೌಲಭ್ಯವನ್ನು ಬ್ಯಾಂಕ್‌ಗಳಿಂದ ಒದಗಿಸಬೇಕೆಂದು ಹೇಳಿದರು.ಇದೇ ಸಂದರ್ಭದಲ್ಲಿ ಕರ್ನಾಟಕ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ರಾಯಚೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್, ಜಿಲ್ಲಾಧಿಕಾರಿ ನಿತೀಶ್ ಕೆ.,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕರಾಮ್ ಪಾಂಡ್ವೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಮ್.ಪುಟ್ಟ ಮಾದಯ್ಯ, ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಇದ್ದರು.