ಕನ್ನಡಪ್ರಭ ವಾರ್ತೆ ವಿಜಯಪುರ
ಮುಂಗಾರು ಹಂಗಾಮಿನಲ್ಲಿ ಕೇಂದ್ರ ಸರ್ಕಾರವು ಬೆಂಬಲ ಬೆಲೆ ಘೋಷಿಸಿರುವ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಲ್‌ಗೆ ₹7,721 ಬೆಂಬಲೆ ಬೆಲೆಯಡಿ ಖರೀದಿಗೆ ರೈತರ ನೋಂದಣಿ 80 ದಿನಗಳ ವರೆಗೆ ಹಾಗೂ ಖರೀದಿ ಅವಧಿ 90 ದಿನಗಳ ವರೆಗೆ ನಿಗದಿಪಡಿಸಿ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆ ಪ್ರಾರಂಭಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆನಂದ.ಕೆ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ತಮ್ಮ ಅಧ್ಯಕ್ಷತೆಯ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಬೆಂಬಲ ಬೆಲೆಯಡಿ ಸೂರ್ಯಕಾಂತಿ ಉತ್ಪನ್ನ ಖರೀದಿಗಾಗಿ ಜಿಲ್ಲೆಯ ಬಬಲೇಶ್ವರ, ಸವನಹಳ್ಳಿ, ಬೆಳ್ಳುಬ್ಬಿ, ತಾಜಪುರ, ವಿಜಯಪುರ, ತಂಗಡಗಿ, ಚಡಚಣ, ಹಲಸಂಗಿ, ಸಿಂದಗಿ, ಬಸವನ ಬಾಗೇವಾಡಿ ಹಾಗೂ ಮುದ್ದೇಬಿಹಾಳ ಸೇರಿದಂತೆ ಒಟ್ಟು 11 ಖರೀದಿ ಕೇಂದ್ರಗಳನ್ನು ತೆರೆಯಲಾಗಿದೆ. ನಾಫೆಡ್ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಖರೀದಿ ಏಜೆನ್ಸಿಯಾಗಿ, ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಸಹಕಾರಿ ಎಣ್ಣೆಬೀಜ ಬೆಳೆಗಾರರ ಮಹಾಮಂಡಳ ನಿಯಮಿತ ಸಂಸ್ಥೆಯನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯಾಗಿ ನೇಮಿಸಲಾಗಿದೆ. ನಾಫೆಡ್ ಸಂಸ್ಥೆಗಳ ಮೂಲಕ ಖರೀದಿ ಕೇಂದ್ರಗಳಲ್ಲಿ ನೋಂದಣಿಯೊಂದಿಗೆ ಖರೀದಿ ಪ್ರಾರಂಭಿಸುವಂತೆ ಜಿಲ್ಲಾ ವ್ಯವಸ್ಥಾಪಕರಿಗೆ ಡಿಸಿ ಸೂಚಿಸಿದ್ದಾರೆ.
ಖರೀದಿ ಕೇಂದ್ರಗಳಲ್ಲಿ ಪ್ರತಿ ರೈತರಿಂದ ಪ್ರತಿ ಎಕರೆಗೆ ಗರಿಷ್ಠ 4 ಕ್ವಿಂಟಲ್‌ನಂತೆ ಹಾಗೂ ಪ್ರತಿ ರೈತರಿಂದ ಗರಿಷ್ಠ 20 ಕ್ವಿಂಟಲ್ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿಸುವಂತೆ ಹಾಗೂ ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಯಂತೆ ಖರೀದಿಸಿದ ಉತ್ಪನ್ನದ ಮೌಲ್ಯವನ್ನು ರೈತರಿಗೆ 03 ದಿನದ ಒಳಗಾಗಿ ರೈತರ ಹೆಸರಿನ ಆಧಾರ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಡಿಬಿಟಿ ಮೂಲಕ ಹಣ ಜಮೆ ಆಗುವಂತೆ ಪಾವತಿ ಮಾಡಬೇಕು. ಆವರ್ತನಿಧಿ ಮಾರ್ಗಸೂಚಿ ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದ್ದಾರೆ. ಹಿಂಗಾರು ಹಂಗಾಮಿನಲ್ಲಿ 5866 ಹೆಕ್ಟೇರ್ ಕ್ಷೇತ್ರದಲ್ಲಿ ಸೂರ್ಯಕಾಂತಿ ಬಿತ್ತನೆಯಾಗಿದ್ದು, ಅಂದಾಜು 3662 ಕ್ವಿಂಟಲ್ ಇಳುವರಿ ಬರಬಹುದು ಹಾಗೂ ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ 5200 ರಿಂದ 6000 ವರೆಗಿನ ದರಕ್ಕೆ ಮಾರಾಟವಾಗುತ್ತಿರುವ ಕುರಿತು ಅಧಿಕಾರಿಗಳು ಸಭೆಗೆ ತಿಳಿಸಿದರು.ಸಭೆಯಲ್ಲಿ ಕೃಷಿ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಸಹಕಾರ ಇಲಾಖೆ ಉಪನಿಬಂಧಕಿ ಭಾಗ್ಯಶ್ರೀ, ಕೃಷಿ ಮಾರಾಟ ಇಲಾಖೆ ಸಹಾಯಕ ನಿರ್ದೇಶಕ ಶಿವಾನಂದ ಗೋಠೆ ಸೇರಿದಂತೆ ಕೆಓಎಫ್ ಜಿಲ್ಲಾ ವ್ಯವಸ್ಥಾಪಕರು, ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.