ದೊಡ್ಡಬಳ್ಳಾಪುರದಲ್ಲಿ ಶೀಘ್ರ ಜಿಲ್ಲಾಸ್ಪತ್ರೆ: ಮುನಿಯಪ್ಪ

KannadaprabhaNewsNetwork |  
Published : Sep 02, 2024, 02:11 AM IST
ದೊಡ್ಡಬಳ್ಳಾಪುರದ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ 5.56 ಕೋಟಿ ರುಪಾಯಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಚಾಲನೆ ನೀಡಿದರು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರದಲ್ಲಿ ಶೀಘ್ರ ಜಿಲ್ಲಾಸ್ಪತ್ರೆ: ಮುನಿಯಪ್ಪ

ಕನ್ನಡಪ್ರಭ ವಾರ್ತೆ,ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಸುಸಜ್ಜಿತ ಬೆಂಗಳೂರು ಗ್ರಾಮಾಂತರ ಜಿಲ್ಲಾ ಆಸ್ಪತ್ರೆಗೆ ಈಗಾಗಲೇ ಯೋಜನೆ ರೂಪುಗೊಂಡಿದ್ದು, ಶೀಘ್ರವೇ ಮಂಜೂರಾತಿಗಾಗಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಚ್.ಮುನಿಯಪ್ಪ ಹೇಳಿದರು.

ಇಲ್ಲಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಭಾನುವಾರ ಆಯೋಜಿಸಲಾಗಿದ್ದ ಸುಮಾರು 5.56 ಕೋಟಿ ರುಪಾಯಿ ವೆಚ್ಚದ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಜಿಲ್ಲಾಸ್ಪತ್ರೆ ನಿರ್ಮಾಣದಿಂದ ಜಿಲ್ಲೆಯ ಎಲ್ಲಾ ಸಾರ್ವಜನಿಕರಿಗೆ ಉಪಯೋಗವಾಗಲಿದೆ. ದೊಡ್ಡಬಳ್ಳಾಪುರ ನಗರ ರಾಷ್ಟ್ರೀಯ ಹೆದ್ದಾರಿ ಹಾಗೂ ರಾಜ್ಯ ಹೆದ್ದಾರಿಗೆ ಹೊಂದಿಕೊಂಡಿರುವುದರಿಂದ ಅಪಘಾತಗಳ ಸಂಭವ ಹೆಚ್ಚಾಗಿ ಕಂಡುಬರುತ್ತಿದೆ‌. ಇದರಿಂದಾಗಿ ಕೇಂದ್ರ ಸರಕಾರ ವತಿಯಿಂದ ಕ್ರಿಟಿಕಲ್ ಕೇರ್ ಯುನಿಟ್ ಸಹ ಸ್ಥಾಪಿತವಾಗಲಿದ್ದು, ಜನರಿಗೆ ಇದು ಉಪಯೋಗವಾಗಲಿದೆ. ಖಾಸಗಿ ಆಸ್ಪತ್ರೆಗಳ ಮೊರೆ ಹೋಗುವ ಸಾರ್ವಜನಿಕರಿಗೆ ಲಕ್ಷಾಂತರ ರು.ಗಳ ಖರ್ಚು ತಪ್ಪಲಿದೆ ಎಂದು ಹೇಳಿದರು.

ಅಧಿಕಾರಿಗಳ ಶ್ರಮ, ಕಾಯಕನಿಷ್ಠೆ ‌ಹಾಗೂ ಪ್ರಾಮಾಣಿಕ ಪ್ರಯತ್ನದಿಂದಾಗಿ ದೊಡ್ಡಬಳ್ಳಾಪುರದ ತಾಲೂಕು ಆಸ್ಪತ್ರೆಗೆ ರಾಷ್ಟ್ರ ಮಟ್ಟದ ಪ್ರಶಸ್ತಿಯ ಗರಿ ಲಭಿಸಿದೆ. ದೊಡ್ಡಬಳ್ಳಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಜಿಲ್ಲೆಗೆ ಮಾದರಿಯಾಗುವಂತೆ ಕಾರ್ಯನಿರ್ವಹಿಸಬೇಕು ಎಂದ ಅವರು, ಬಸವಣ್ಣನವರು ಹೇಳಿದ ಕಾಯಕವೇ ಕೈಲಾಸ ಪರಿಪಾಲನೆ ಮಾಡಬೇಕು. ದೊಡ್ಡಬಳ್ಳಾಪುರದ‌ ಸರ್ಕಾರಿ ಆಸ್ಪತ್ರೆ ಜನರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಮುಂಚೂಣಿಯಲ್ಲಿದೆ, ಈ ಸೇವೆ ಇದೇ ರೀತಿ ಮುಂದಿನ ದಿನಗಳಲ್ಲೂ ಮುಂದುವರೆಯಲಿ ಎಂದರು.

195 ಕೋಟಿ ರು. ವೆಚ್ಚದಲ್ಲಿ ಜಿಲ್ಲಾಸ್ಪತ್ರೆ

ಅಧ್ಯಕ್ಷತೆ ವಹಿಸಿದ್ದ ಶಾಸಕ ಧೀರಜ್‌ ಮುನಿರಾಜ್ ಮಾತನಾಡಿ, ದೊಡ್ಡಬಳ್ಳಾಪುರದ ತಾಯಿ ಮಗು ಆಸ್ಪತ್ರೆ ಅತ್ಯುತ್ತಮ ಸೇವೆ ಸಲ್ಲಿಸುತ್ತಾ ಬಂದಿದೆ. ಇಲ್ಲಿನ ಅಧಿಕಾರಿಗಳ ಸಹಭಾಗಿತ್ವದಲ್ಲಿ ಕಳೆದ ಮೂರು ತಿಂಗಳ ಹಿಂದಷ್ಟೆ ಕೇಂದ್ರ ಸರಕಾರದ ಆರೋಗ್ಯ ಇಲಾಖೆಯ ವತಿಯಿಂದ ತಾಲೂಕು ಮಟ್ಟದ ಅತಿ ಉತ್ತಮ ಆಸ್ಪತ್ರೆ ಎಂದು ಬಿರುದು ಪಡೆದುಕೊಂಡಿದೆ. ನಮ್ಮ ಸುತ್ತಮುತ್ತಲು ಇರುವ ಮೂರು ಜಿಲ್ಲೆಗಳಿಗಿಂತ ಅತಿ ಹೆಚ್ಚು ಮಕ್ಕಳ ಜನನ ಆಗುತ್ತಿರುವ ಆಸ್ಪತ್ರೆ ಇದಾಗಿದೆ. ಇನ್ನು ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ದೊಡ್ಡಬಳ್ಳಾಪುರ ಸರ್ಕಾರಿ ಸಾರ್ವಜನಿಕ ಆಸ್ಪತ್ರೆ ಪಾತ್ರವಾಗಿದೆ. ದೊಡ್ಡಬಳ್ಳಾಪುರ ನಗರದ ಸಿದ್ದೇನಾಯಕನಹಳ್ಳಿಯಲ್ಲಿ 195 ಕೋಟಿ ರು.ಗಳ ವೆಚ್ಚದ ಜಿಲ್ಲಾ ಆಸ್ಪತ್ರೆ ನಿರ್ಮಾಣಕ್ಕೆ ಸರ್ಕಾರ ಈಗಾಗಲೆ ಒಪ್ಪಿಗೆ ನೀಡಿದೆ. ಇದಲ್ಲದೆ ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಅಭಿಮ್ ಯೋಜನೆಯಡಿಯಲ್ಲಿ 50 ಹಾಸಿಗೆಯುಳ್ಳ ಕ್ರಿಟಿಕಲ್ ಕೇರ್ ಯುನಿಟ್(CCU) ಆಸ್ಪತ್ರೆ ದೊಡ್ಡಬಳ್ಳಾಪುರದಲ್ಲಿ ಮುಂಬರುವ ದಿನಗಳಲ್ಲಿ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಶಂಕುಸ್ಥಾಪನೆ ನೆರವೇರಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನಾ ಸಮಿತಿಯ ಜಿಲ್ಲಾ ಅಧ್ಯಕ್ಷ ಬಿ.ರಾಜಣ್ಣ, ದೊಡ್ಡಬಳ್ಳಾಪುರ ಉಪ‌ವಿಭಾಗಾಧಿಕಾರಿ ದುರ್ಗಾಶ್ರೀ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಕೆ ರಮೇಶ್,‌ ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಸುನಿಲ್ ಕುಮಾರ್, ದೇವನಹಳ್ಳಿ ತಹಶೀಲ್ದಾರ್ ಬಾಲಕೃಷ್ಣ, ದೊಡ್ಡಬಳ್ಳಾಪುರ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮುನಿರಾಜು, ನಗರಸಭೆ ಆಯುಕ್ತ ಕಾರ್ತಿಕ್ ಈಶ್ವರ್ ಸೇರಿದಂತೆ ನಗರಸಭಾ ಸದಸ್ಯರು, ನಾಮ ನಿರ್ದೇಶಿತ ಸದಸ್ಯರು, ಚುನಾಯಿತ ಜನಪ್ರತಿನಿಧಿಗಳು, ವೈದ್ಯಕೀಯ ಸಿಬ್ಬಂದಿ, ಆಶಾ ಕಾರ್ಯಕರ್ತೆಯರು, ಸಾರ್ವಜನಿಕರು ಉಪಸ್ಥಿತರಿದ್ದರು.

ಬಾಕ್ಸ್‌ ಯೋಜನೆಗಳ ವಿವರ

ದೊಡ್ಡಬಳ್ಳಾಪುರದ ಸಾರ್ವಜನಿಕ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣ ಮತ್ತು ವಾರ್ಷಿಕ ನಿರ್ವಹಣೆಗಾಗಿ 2.10 ಕೋಟಿ ರುಪಾಯಿ ಹಾಗೂ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಮೂಲಸೌಕರ್ಯ ಸೌಲಭ್ಯಗಳ ಉನ್ನತೀಕರಣಕ್ಕಾಗಿ 2.24 ಕೋಟಿ ರುಪಾಯಿ ಹಾಗೂ ತಾಲೂಕಿನ ಇತರೆ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲ ಸೌಕರ್ಯ ಒದಗಿಸಲು 1.21 ಕೋಟಿ ರುಪಾಯಿ ಸೇರಿದಂತೆ ಒಟ್ಟು 5.56 ಕೋಟಿ ರು.ಗಳ ಆರೋಗ್ಯ ಇಲಾಖೆಯ ಕಾಮಗಾರಿಗಳಿಗೆ ಚಾಲನೆ ನೀಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಧಿವೇಶನ ಮುಗಿದ ಬಳಿಕ ಡಿಕೆಶಿಗೆ ಶುಭಸುದ್ದಿ : ಇಕ್ಬಾಲ್
ಬೆಳಗಾವೀಲೂ ‘ಕೈ’ ಡಿನ್ನರ್‌ ಸಭೆಗೆ ಬಿವೈವಿ ಕಿಡಿ