ಕಾಂಗ್ರೆಸ್‌ ಸರ್ಕಾರದಿಂದ ಕುಡಿವ ನೀರು ಬದಲು ವಿಷ ಪೂರೈಕೆ

KannadaprabhaNewsNetwork |  
Published : Jun 16, 2024, 01:50 AM IST
ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆಗೆ ಬಿಜೆಪಿ ಒತ್ತಾಯ | Kannada Prabha

ಸಾರಾಂಶ

ಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಸೇವಿಸಿ ಜನ ಸಾವಿಗೀಡಾಗುತ್ತಿರುವ, ಅನಾರೋಗ್ಯದಿಂದ ಆಸ್ಪತ್ರೆ ಸೇರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಗೆ ಶುದ್ಧ ಕುಡಿಯುವ ನೀರು ನೀಡಬೇಕಾದ ರಾಜ್ಯ ಸರ್ಕಾರ ವಿಷ ಕೊಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ತುಮಕೂರುಗ್ರಾಮೀಣ ಪ್ರದೇಶಗಳಲ್ಲಿ ಕಲುಷಿತ ನೀರು ಸೇವಿಸಿ ಜನ ಸಾವಿಗೀಡಾಗುತ್ತಿರುವ, ಅನಾರೋಗ್ಯದಿಂದ ಆಸ್ಪತ್ರೆ ಸೇರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಜನರಿಗೆ ಶುದ್ಧ ಕುಡಿಯುವ ನೀರು ನೀಡಬೇಕಾದ ರಾಜ್ಯ ಸರ್ಕಾರ ವಿಷ ಕೊಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಆರೋಪಿಸಿದರು.ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಶನಿವಾರ ಮಾತನಾಡಿ, ರಾಜ್ಯದ 9 ಜಿಲ್ಲೆಗಳಲ್ಲಿ ಕಲುಷಿತ ನೀರು ಸೇವನೆಯಿಂದ ಸಾವು ನೋವಿನ ಪ್ರಕರಣಗಳು ವರದಿಯಾಗುತ್ತಿದ್ದರೂ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷಿಸಿದ್ದಾರೆ. ಈ ಅನಾಹುತಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು.ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೀಡಾದ ಆರು ಮಂದಿ ಮೃತಪಟ್ಟಿದ್ದಾರೆ. ಹಲವರು ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ಮಾಡುತ್ತಿದ್ದಾರೆ. ಆದರೂ ಸರ್ಕಾರ, ಸಂಬಂಧಿಸಿದ ಇಲಾಖೆ ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿಲ್ಲ. ಅಧಿಕಾರಿಗಳಿಗೆ ಸೂಕ್ತ ಸೂಚನೆ ನೀಡುತ್ತಿಲ್ಲ. ಇನ್ನೂ ಚುನಾವಣೆ ಸೋಲಿನ ಲೆಕ್ಕಾಚಾರಗಳಲ್ಲೇ ಮುಳುಗಿರುವ ಮುಖ್ಯಮಂತ್ರಿ ಹಾಗೂ ಸಚಿವರು ಹೊರಬಂದು ಜನರ ಸಂಕಷ್ಟಗಳತ್ತ ಗಮನಹರಿಸಬೇಕು ಎಂದರು.ಗ್ರಾಮ ಪಂಚಾಯಿತಿಗಳಿಗೆ ರಾಜ್ಯ ಸರ್ಕಾರ ಐದು ಪೈಸೆ ಅನುದಾನ ನೀಡಿಲ್ಲ. ಕೇಂದ್ರ ಸರ್ಕಾರದ ಅನುದಾನದಲ್ಲಿ ಪಂಚಾಯಿತಿಗಳು ಕಾರ್ಯನಿರ್ವಹಿಸುವಂತಹ ಪರಿಸ್ಥಿತಿ ಬಂದಿದೆ. ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆಯ ಮನೆ ಮನೆಗೂ ಕುಡಿಯುವ ನೀರು ಕೊಡುವ ಜಲಜೀವನ್ ಯೋಜನೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ೫೦:೫೦ರ ಅನುದಾನದ ಅನುಪಾತದಲ್ಲಿ ಜಲಜೀವನ್ ಯೋಜನೆ ಅನುಷ್ಠಾನವಾಗುತ್ತಿದೆ. ಆದರೆ ರಾಜ್ಯ ಸರ್ಕಾರ ತನ್ನ ಪಾಲಿನ ಹಣ ನೀಡದ ಕಾರಣ ಈ ಯೋಜನೆ ಪೂರ್ಣಗೊಳ್ಳದೆ ಸ್ಥಗಿತಗೊಂಡಿದೆ. ಯೋಜನೆ ಪೂರ್ಣಗೊಂಡಿದ್ದರೆ ಇಂದು ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿರಲಿಲ್ಲ. ಕಲುಷಿತ ನೀರು ಸೇವನೆಯಿಂದ ಆಗಿರುವ ಅಚಾತುರ್ಯಗಳೂ ಸಂಭವಿಸುತ್ತಿರಲಿಲ್ಲ ಎಂದು ಹೇಳಿದರು.ಗ್ರಾಮ ಪಂಚಾಯಿತಿ ನೀರು ಸರಬರಾಜು ನೌಕರರಿಗೆ ರಾಜ್ಯ ಸರ್ಕಾರ ಸಂಬಳ ಕೊಟ್ಟಿಲ್ಲ. ಸ್ವಚ್ಛತೆ, ನೀರು ಶುದ್ಧೀಕರಣಕ್ಕೆ ಹಣ ನೀಡಿಲ್ಲ. ಹೀಗಾಗಿ ಹಳ್ಳಿಗಳಲ್ಲಿ ಶುದ್ಧ ಕುಡಿಯವ ನೀರಿನ ವಿತರಣೆಯಲ್ಲಿ ಸಮಸ್ಯೆ ಉಂಟಾಗಿದೆ. ಇಂತಹ ಗಂಭೀರ ವಿಚಾರವನ್ನು ಸಂಪೂರ್ಣ ಕಡೆಗಣಿಸಿರುವ ರಾಜ್ಯ ಸರ್ಕಾರ ಸಾಮಾನ್ಯ ಜನರ ಜೀವದ ಜೊತೆ ಆಟವಾಡುತ್ತಿದೆ. ಸರ್ಕಾರ ಜನರಿಗೆ ಶುದ್ಧ ಕುಡಿಯವ ನೀರು ನೀಡಲು ಬದ್ಧತೆ ತೋರಿಸುತ್ತಿಲ್ಲ ಎಂದು ಟೀಕಿಸಿದರು. ಕಲುಷಿತ ನೀರು ಸೇವಿಸಿ ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಲು ಕೇಂದ್ರ ಸಚಿವ ವಿ.ಸೋಮಣ್ಣ ಆಗಮಿಸದಾಗ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಬಂದು ಪ್ರಕರಣದ ಬಗ್ಗೆ ಮಾಹಿತಿ ನೀಡಲಿಲ್ಲ ಎಂದು ಟೀಕಿಸಿದರು. ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ, ಮಧುಗಿರಿ ಜಿಲ್ಲಾ ಅಧ್ಯಕ್ಷ ಹನುಮಂತೇಗೌಡ, ರಾಜ್ಯ ಬಿಜೆಪಿ ವಕ್ತಾರ ಎಚ್.ಎನ್.ಚಂದ್ರಶೇಖರ್, ಜಿಲ್ಲಾ ವಕ್ತಾರ ಟಿ.ಆರ್.ಸದಾಶಿವಯ್ಯ, ಮಾಧ್ಯಮ ಪ್ರಮುಖ್ ಜೆ.ಜಗದೀಶ್, ಮುಖಂಡರಾದ ಜಿ.ಎಸ್.ನಂದಿನಾಥ್, ಕುಮಾರಗೌಡ, ಮರಿತಿಮ್ಮಯ್ಯ ಭಾಗವಹಿಸಿದ್ದರು.

PREV

Recommended Stories

ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''