ನುಡಿದಂತೆ ನಡೆಯುವ ಕಾಂಗ್ರೆಸ್ ಬೆಂಬಲಿಸಿ: ಆನಂದಸ್ವಾಮಿ ಗಡ್ಡದೇವರಮಠ

KannadaprabhaNewsNetwork | Published : Apr 11, 2024 12:48 AM

ಸಾರಾಂಶ

ಅನೇಕ ಸುಳ್ಳುಗಳಿಂದ ಜನತೆಯನ್ನು ವಂಚಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ವಿಫಲವಾಗಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

ಕನ್ನಡಪ್ರಭ ವಾರ್ತೆ ಹಾವೇರಿ

ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಿಸದ, ರೈತರ ಬವಣೆಗೆ ಸ್ಪಂದಿಸದ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಬೇಸರಗೊಂಡಿರುವ ಮತದಾರರು ಲೋಕಸಭಾ ಚುನಾವಣೆಯಲ್ಲಿ ನುಡಿದಂತೆ ನಡೆಯುವ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ವಿಶ್ವಾಸವಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.

ತಾಲೂಕಿನ ಕರ್ಜಗಿ ಗ್ರಾಮದಲ್ಲಿ ಜರುಗಿದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು.

ಅನೇಕ ಸುಳ್ಳುಗಳಿಂದ ಜನತೆಯನ್ನು ವಂಚಿಸಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಯಾವುದೇ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ವಿಫಲವಾಗಿದೆ. ಕೇವಲ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಮತ ಪಡೆಯುವ ಆ ಪಕ್ಷದ ಬಗ್ಗೆ ಜನರಿಗೆ ಭ್ರಮನಿರಸನವಾಗಿದೆ. ಪಂಚ ಗ್ಯಾರಂಟಿಗಳ ಮೂಲಕ ರಾಜ್ಯದ ಜನರ ಹೃದಯ ಗೆದ್ದಿರುವ ಕಾಂಗ್ರೆಸ್ ಪಕ್ಷ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದರು.

ಶಾಸಕ ರುದ್ರಪ್ಪ ಲಮಾಣಿ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ವರ್ಷಗಳ ಅಧಿಕಾರಾವಧಿಯಲ್ಲಿ ಎಲ್ಲ ರಂಗದಲ್ಲೂ ವಿಫಲವಾದರು. ಪ್ರತಿ ಕುಟುಂಬದ ಒಬ್ಬರ ಖಾತೆಗೆ ಹದಿನೈದು ಲಕ್ಷ ಪಾವತಿಸಲಿಲ್ಲ. ಎರಡು ಕೋಟಿ ಉದ್ಯೋಗ ಸೃಷ್ಟಿಸಲಿಲ್ಲ. ಉದ್ಯೋಗ ಕೇಳಿದವರಿಗೆ ಪಕೋಡಾ ಮಾರಾಟ ಮಾಡಲು ಹೇಳಿದರು. ರೈತರ ಆದಾಯ ದುಪ್ಪಟ್ಟುಗೊಳಿಸಲಿಲ್ಲ. ಉತ್ತರ ಭಾರತದಲ್ಲಿ ಹೋರಾಟಕ್ಕಿಳಿದ ರೈತರ ಮೇಲೆ ಗೋಲಿಬಾರ್ ಮಾಡಿಸಿದರು. ಈ ಹಿನ್ನೆಲೆಯಲ್ಲಿ ಬಿಜೆಪಿಯನ್ನು ಧಿಕ್ಕರಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಲೋಕಸಭಾ ಚುನಾವಣೆಯಲ್ಲಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಎಂ. ಹಿರೇಮಠ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಹಾವೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜಿಗೌಡ್ರ ಮಾತನಾಡಿದರು.

ಯಲಗಚ್ಚ, ಹೊಸರಿತ್ತಿ, ನೆಗಳೂರು, ಬೆಳವಗಿ ಗ್ರಾಮಗಳಲ್ಲಿ ಚುನಾವಣಾ ಮತ ಪ್ರಚಾರ ಜರುಗಿತು.

ಪಕ್ಷದ ಜಿಲ್ಲಾಧ್ಯಕ್ಷ ಸಂಜೀವಕುಮಾರ ನೀರಲಗಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಂ.ಎಂ. ಮೈದೂರ ಹಾಗೂ ಪ್ರಭುಗೌಡ ಬಿಷ್ಟನಗೌಡ್ರ, ಮುಖಂಡರಾದ ಮಾದೇಗೌಡ ಗಾಜಿಗೌಡ್ರ, ಸಿ.ಬಿ. ಕುರವತ್ತಿಗೌಡ್ರ, ಈರಪ್ಪ ಲಮಾಣಿ, ಬಸಣ್ಣ ಕಂಬಳಿ, ಶ್ರೀಧರ ದೊಡ್ಡಮನಿ, ಪ್ರಸನ್ನ ಹಿರೇಮಠ, ಈರಣ್ಣ ಕುಲಕರ್ಣಿ, ಸಂಜಯಗಾಂಧಿ ಸಂಜೀವಣ್ಣನವರ, ಲತಾ ಕಳ್ಳಿಹಾಳ, ನಗೀನಾ‌ ಸವಣೂರ, ಹಸೀನಾ ನದಾಫ್ ಉಪಸ್ಥಿತರಿದ್ದರು.

Share this article