ಹಳಿಯಾಳ: ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ಕಳೆದ ಒಂದು ವಾರದಿಂದ ಆಶಾ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ಬುಧವಾರ ಪಟ್ಟಣದಲ್ಲಿ ರಾಜ್ಯ ಅಸಂಘಟಿತ ಕಾರ್ಮಿಕ ಸಂಘದವರು ಕೆಲಕಾಲ ಆಡಳಿತ ಸೌಧದ ಆವರಣದಲ್ಲಿ ಪ್ರತಿಭಟನೆ ನಡೆಸಿ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದರು.
ಆಶಾ ಕಾರ್ಯಕರ್ತೆಯರಿಗೆ ಸರ್ಕಾರವು ನೀಡಬೇಕಾದ ಗೌರವಧನ ಮತ್ತು ಪ್ರೋತ್ಸಾಹಧನವನ್ನು ಹೆಚ್ಚಿಸಲು ಅಹೋರಾತ್ರಿ ಧರಣಿ ನಡೆಸಲಾಗುತ್ತಿದೆ. ಇವರು ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಕನಿಷ್ಠ ಗೌರವಧನದಲ್ಲಿ ಸೇವೆ ಸಲ್ಲಿಸುತ್ತಿದ್ದು, ಇವರಿಗೆ ತಕ್ಷಣವೇ ಹೆಚ್ಚಿನ ಗೌರವಧನ ನೀಡುವಂತೆ ಆಗ್ರಹಿಸಿದರು.
ರಾಜ್ಯದಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಜಂಟಿಯಾಗಿ ನೀಡುತ್ತಿರುವ ಗೌರವಧನ ಮತ್ತು ಪ್ರೋತ್ಸಾಹಧನವು ಸರಿಯಾದ ಸಮಯಕ್ಕೆ ನೀಡದೇ ಸತಾಯಿಸಲಾಗುತ್ತಿದೆ. ಇದರಿಂದ ಇವರ ಜೀವನ ನಿರ್ವಹಣೆಯು ಕಠಿಣವಾಗಿದ್ದು, ರಾಜ್ಯ ಸರ್ಕಾರವು ವಿಳಂಬ ಧೋರಣೆಯನ್ನು ಅನುಸರಿಸುವುದನ್ನು ಕೈಬಿಟ್ಟು ಅವರಿಗೆ ನ್ಯಾಯ ಒದಗಿಸಲು ಒತ್ತಾಯಿಸಿದರು.ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ 4 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತೆಯರು ಚಿಕ್ಕ ಮಕ್ಕಳ ಆರೋಗ್ಯ, ಬಾಣಂತಿಯರ ಸುರಕ್ಷತೆ, ಪಲ್ಸ್ ಪೋಲಿಯೋದಂತಹ ರಾಷ್ಟ್ರೀಯ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ದುಡಿಯುತ್ತಿದ್ದಾರೆ. ಇವರಿಗೆ ಆದಷ್ಟು ಬೇಗನೆ ₹15 ಸಾವಿರ ಗೌರವಧನ ಮತ್ತು ಪ್ರೋತ್ಸಾಹಧನವನ್ನು ನೀಡಬೇಕು. ಇವರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಹಿಂದೇಟು ಹಾಕಿದರೆ ಸಂಘವು ಬೀದಿಗಿಳಿದು ಹೋರಾಟ ಮಾಡಲಿದೆ ಎಂಬ ಎಚ್ಚರಿಕೆಯನ್ನು ನೀಡಿದರು.