ಕುಸುಬೆ ಖರೀದಿಗೆ ಬೆಂಬಲ ಬೆಲೆ ನಿಗದಿ-ಜಿಲ್ಲಾಧಿಕಾರಿ

KannadaprabhaNewsNetwork | Published : Mar 19, 2025 12:36 AM

ಸಾರಾಂಶ

2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.

ಗದಗ: 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನವನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ತಿಳಿಸಿದರು.ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ 2024-25ನೇ ಸಾಲಿನ ಹಿಂಗಾರು ಹಂಗಾಮಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕುಸುಬೆ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು ಎಂದರು.

ಖರೀದಿ ಏಜೆನ್ಸಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಪ್ರತಿ ಖರೀದಿ ಕೇಂದ್ರಕ್ಕೆ ಗ್ರೇಡರ್‌ಗಳನ್ನು ನೇಮಿಸಬೇಕು. ಜಿಲ್ಲೆಯ ಪ್ರತಿ ರೈತರಿಂದ ಎಕರೆಗೆ 5 ಕ್ವಿಂಟಲ್‌ನಂತೆ ಗರಿಷ್ಠ 20 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಖರೀದಿಸಲು ಹಾಗೂ ಕುಸುಬೆ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಕುಸುಬೆ ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರು ಮಾತನಾಡಿ, ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಹುಟ್ಟುವಳಿಗೆ ಪ್ರತಿ ಕ್ವಿಂಟಾಲ್‌ಗೆ 5940 ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಆದೇಶ 11-3-2024 ರನುಸಾರ ನ್ಯಾಪೆಡ್ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಮತ್ತು ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ (ಕೆಓಎಫ್ ) ಬೆಂಗಳೂರು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯಾಗಿ ನೇಮಿಸಿದ್ದು ರೈತರು ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಜರುಗಿಸಲಾಗುವುದು. ಜಿಲ್ಲೆಯ 9 ಕಡೆ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು.ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರಿ ಸಂಘಗಳ ಇಲಾಖೆಯ ಅಧಿಕಾರಿಗಳು, ಕೆ.ಓ.ಎಫ್. ವ್ಯವಸ್ಥಾಪಕರು ಹಾಜರಿದ್ದರು.

ಕುಸುಬೆ ಖರೀದಿ ಕೇಂದ್ರಗಳು: ಗದಗ ತಾಲೂಕು- ಬಳಗಾನೂರ, ಹೊಂಬಳ, ಮುಳಗುಂದ; ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕು- ರಣತೂರ, ಶಿಗ್ಲಿ, ರೋಣ ಮತ್ತು ಗಜೇಂದ್ರಗಡ ತಾಲೂಕು- ಅಬ್ಬಿಗೇರಿ, ನರೇಗಲ್, ನಿಡಗುಂದಿ, ಮುಂಡರಗಿ- ಬರದೂರ.

Share this article