ನಿರುದ್ಯೋಗ, ಭ್ರಷ್ಟಾಚಾರದ ವಿರುದ್ಧ ಹೋರಾಡಲು ಬೆಂಬಲಿಸಿ-ಕಾಂತಕುಮಾರ ಆರ್‌.

KannadaprabhaNewsNetwork |  
Published : Oct 17, 2026, 02:00 AM IST
ಕಾಂತಕುಮಾರ ಆರ್. | Kannada Prabha

ಸಾರಾಂಶ

ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪದವೀಧರರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಪಕ್ಷೇತರ ಅಭ್ಯರ್ಥಿ ಕಾಂತಕುಮಾರ ಆರ್. ಮನವಿ ಮಾಡಿದರು.

ಹಾವೇರಿ: ರಾಜ್ಯದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಮತ್ತು ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿ, ಅರ್ಹ ಪದವೀಧರರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಹೋರಾಟ ನಡೆಸಲಾಗುತ್ತಿದೆ. ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಪದವೀಧರರು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಅಭ್ಯರ್ಥಿಗಳನ್ನು ಬೆಂಬಲಿಸಬೇಕು ಎಂದು ಪಕ್ಷೇತರ ಅಭ್ಯರ್ಥಿ ಕಾಂತಕುಮಾರ ಆರ್. ಮನವಿ ಮಾಡಿದರು.

ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉದ್ಯೋಗಾಕಾಂಕ್ಷಿಗಳ ಸಮಸ್ಯೆಗಳ ಕುರಿತು ಹೋರಾಟ ನಡೆಸಲಾಗಿದೆ. ಹಾವೇರಿ, ಗದಗ, ಧಾರವಾಡ, ಕಲಬುರಗಿ ಸೇರಿದಂತೆ ಅನೇಕ ಕಡೆ ನಡೆಸಿದ ಹೋರಾಟದ ಫಲವಾಗಿ ಕಳೆದ ಆರೇಳು ವರ್ಷಗಳಿಂದ ನೇಮಕಾತಿಯಾಗದೆ ಉಳಿದಿದ್ದ 70 ಸಾವಿರ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಕೆಪಿಎಸ್‌ಸಿ ಅಕ್ರಮದ ಹೋರಾಟ: ಕೆಪಿಎಸ್‌ಸಿ ನೇಮಕಾತಿ ಪ್ರಕ್ರಿಯೆಯಲ್ಲಿನ ಅಕ್ರಮಗಳ ಕುರಿತು ಸ್ಟಿಂಗ್ ಆಪರೇಷನ್ ನಡೆಸಿ, ತನಿಖೆಗೆ ಒತ್ತಾಯಿಸಲಾಗಿದೆ. ಪರೀಕ್ಷೆಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಹೋರಾಟ ನಡೆಸಿದ್ದು, ಸಿವಿಲ್ ನ್ಯಾಯಾಧೀಶರ ನೇಮಕಾತಿಯಲ್ಲಿಯೂ ವಿವಿಧ ಹಂತಗಳಲ್ಲಿ ಅಕ್ರಮಗಳು ನಡೆದಿರುವ ಆರೋಪಗಳ ಕುರಿತು ಧ್ವನಿ ಎತ್ತಿದ್ದೇನೆ. ಅಧಿಸೂಚನೆ ಹೊರಬರುವುದಕ್ಕೂ ಮುನ್ನವೇ ಅಕ್ರಮಗಳು ನಡೆಯುತ್ತಿದ್ದವು ಎಂಬ ಆರೋಪಗಳ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವವರೆಗೆ ಹೋರಾಟ ಮುಂದುವರಿಯಲಿದೆ ಎಂದರು.

ರಾಜ್ಯದ ವಿವಿಧ ಇಲಾಖೆಗಳು ಹಾಗೂ ನಿಗಮ-ಮಂಡಳಿಗಳಲ್ಲಿ ಸುಮಾರು 3.84 ಲಕ್ಷ ಹುದ್ದೆಗಳು ಖಾಲಿ ಇವೆ. ಪ್ರಸ್ತುತ 75 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮುಂದಿನ ಎರಡು ವರ್ಷಗಳಲ್ಲಿ ಪ್ರತಿ ವರ್ಷ ಒಂದು ಲಕ್ಷ ಹುದ್ದೆಗಳನ್ನು ಭರ್ತಿ ಮಾಡಬೇಕು. ನಿರುದ್ಯೋಗ ಸಮಸ್ಯೆ ನಿವಾರಣೆಗೆ ಸರಕಾರ ಆದ್ಯತೆ ನೀಡಬೇಕು. ಉತ್ತರ ಕರ್ನಾಟಕ ಭಾಗದಲ್ಲಿ ಐಟಿ-ಬಿಟಿ ಕಂಪನಿಗಳು ಹಾಗೂ ಕೈಗಾರಿಕೆಗಳನ್ನು ಸ್ಥಾಪಿಸುವ ಅಗತ್ಯವಿದೆ. ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳಲ್ಲಿ ಶೇ.80ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡುವ ವ್ಯವಸ್ಥೆಯಾಗಬೇಕೆಂದು ತಿಳಿಸಿದರು.

ಪದವೀಧರರ ಸಮಸ್ಯೆಗಳಿಗೆ ಆದ್ಯತೆ: ರಾಜ್ಯದ ಗ್ರಂಥಾಲಯಗಳಲ್ಲಿ ಅಗತ್ಯ ಸೌಲಭ್ಯಗಳ ಕೊರತೆಯಿದೆ. ಗ್ರಂಥಾಲಯ, ಸಭಾಂಗಣ, ಶೌಚಾಲಯ, ಡಿಜಿಟಲ್ ಬೋರ್ಡ್, ಡಿಜಿಟಲ್ ಗ್ರಂಥಾಲಯ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು. ಗ್ರಂಥಾಲಯಗಳು ದಿನದ 24 ಗಂಟೆಯೂ, ವರ್ಷದ 365 ದಿನವೂ ಕಾರ್ಯನಿರ್ವಹಿಸುವ ವ್ಯವಸ್ಥೆ ರೂಪಿಸಬೇಕಾಗಿದೆ. ಹಳೆಯ ಪಿಂಚಣಿ ಯೋಜನೆಯನ್ನು ಮರುಜಾರಿಗೊಳಿಸಬೇಕು. ಪಪೂ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಕನಿಷ್ಠ 50 ಸಾವಿರ ರು.ವೇತನ ನೀಡಬೇಕು. ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಕನಿಷ್ಠ 1 ಲಕ್ಷ ರು. ವೇತನ ನಿಗದಿಪಡಿಸಬೇಕು. ಯುಜಿಸಿ ಅರ್ಹತೆ ಹೊಂದಿರದವರಿಗೆ ಸೂಕ್ತ ನಿಯಮಗಳಡಿ ಕೋ-ಆರ್ಡಿನೇಟರ್ ಹುದ್ದೆ ನೀಡುವ ಕುರಿತು ಸರಕಾರ ಗಮನಹರಿಸಬೇಕು ಎಂದು ಹೇಳಿದರು.

ಪದವೀಧರರು ಹಾಗೂ ಶಿಕ್ಷಕರ ಸಮಸ್ಯೆಗಳಿಗೆ ವಿಧಾನ ಪರಿಷತ್ತಿನಲ್ಲಿ ಧ್ವನಿ ಎತ್ತುವುದು ತಮ್ಮ ಉದ್ದೇಶವಾಗಿದೆ. ಪ್ರಜ್ಞಾವಂತ ಮತದಾರರು ಚುನಾವಣೆಯಲ್ಲಿ ಭಾಗವಹಿಸಿ ತಮ್ಮ ಮತವನ್ನು ವ್ಯರ್ಥ ಮಾಡದೆ, ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಉದ್ಯೋಗಾಕಾಂಕ್ಷಿಗಳು ಹಾಗೂ ಪದವೀಧರರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಹಕರಿಸಬೇಕು ಎಂದು ಮನವಿ ಮಾಡಿದರು.

ಸಿದ್ದು ಕೇರಿ, ಧರಿಯಪ್ಪ ಬಾಗೇನವರ, ವಿಜಯಕುಮಾರ ಇಟಗಿ, ಶ್ರೀಶೈಲ ತೇಲಿ, ಅಶೋಕ್ ಬಿರಾದರ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮೃತ ಸಿಐಎಸ್‌ಎಫ್ ಸಿಬ್ಬಂದಿ ಕುಟುಂಬಕ್ಕೆ ₹1 ಕೋಟಿ ವಿಮೆ
ಆತ್ಮನಿರ್ಭರ ಭಾರತದ ನೌಕಾ ಶಕ್ತಿಗೆ ಐಎನ್‌ಎಸ್ ಸಮರ್ಥಕ್ ಬಲ