ಕನ್ನಡಪ್ರಭ ವಾರ್ತೆ ನವದೆಹಲಿ
ಈ ಹಿಂದೆ ಪ್ರಕರಣದ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಶ್ರೀಗಳಿಗೆ ಜಾಮೀನು ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಡಿ. ರಾಜಪ್ಪ ಎಂಬುವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾ.ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ, ಶ್ರೀಗಳ ಜಾಮೀನನ್ನು 4 ತಿಂಗಳ ಮಟ್ಟಿಗೆ ರದ್ದುಗೊಳಿಸಿದೆ. ಒಂದು ವಾರದೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗಲು ಶರಣರಿಗೆ ಸೂಚಿಸಿದೆ. ಜೊತೆಗೆ, 4 ತಿಂಗಳ ಒಳಗಾಗಿ ಸಾಕ್ಷಿಗಳ ಹೇಳಿಕೆಯನ್ನು ದಾಖಲಿಸಿ, ಪ್ರಕರಣದ ವಿಚಾರಣೆ ಮುಗಿಸುವಂತೆ ಚಿತ್ರದುರ್ಗ ನ್ಯಾಯಾಲಯಕ್ಕೆ ಸೂಚಿಸಿದೆ.
ಪ್ರಕರಣದ ಸಾಕ್ಷಿಗಳ ವಿಚಾರಣೆ ಮುಗಿಯುವವರೆಗೂ ಶರಣರು ನ್ಯಾಯಾಂಗ ಬಂಧನದಲ್ಲಿ ಇರಬೇಕು. ವಿಚಾರಣೆಗೆ ಸಹಕರಿಸಬೇಕು. ವಿಚಾರಣೆಗೆ ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಿದ್ದಲ್ಲಿ ಅದನ್ನು ಸುಪ್ರೀಂಕೋರ್ಟ್ ಗಮನಕ್ಕೆ ತರಬೇಕು ಎಂದು ಆದೇಶಿಸಿದೆ.