5,8,9ನೇ ಕ್ಲಾಸ್‌ ಬೋರ್ಡ್ ಪರೀಕ್ಷೆಗೆ ಸುಪ್ರೀಂ ತಡೆ

KannadaprabhaNewsNetwork |  
Published : Mar 13, 2024, 02:01 AM IST
ಸುಪ್ರೀಂಕೋರ್ಟ್ | Kannada Prabha

ಸಾರಾಂಶ

ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.

ಕನ್ನಡಪ್ರಭ ವಾರ್ತೆ ನವದೆಹಲಿ

ರಾಜ್ಯ ಪಠ್ಯಕ್ರಮ ಇರುವ ಶಾಲೆಗಳ 5, 8 ಮತ್ತು 9ನೇ ತರಗತಿಗಳ ಬೋರ್ಡ್ ಪರೀಕ್ಷೆಗೆ ಅನುಮತಿ ನೀಡಿದ್ದ ಕರ್ನಾಟಕ ಹೈಕೋರ್ಟ್ ನ ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ.

ಹೈಕೋರ್ಟ್​ನ ವಿಭಾಗೀಯ ಪೀಠದ ಆದೇಶ ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಸಂಘ (ರುಪ್ಸಾ) ಹಾಗೂ ಅವರ್ ಸ್ಕೂಲ್ಸ್‌ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದವು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬೇಲಾ ಎಂ. ತ್ರಿವೇದಿ ಹಾಗೂ ನ್ಯಾ.ಪಂಕಜ್ ಮಿತ್ತಲ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿದೆ. ವಿಭಾಗೀಯ ಪೀಠ ಅರ್ಜಿಯ ವಿಚಾರಣೆ ನಡೆಸಿ, ತೀರ್ಪು ನೀಡುವವರೆಗೂ ಬೋರ್ಡ್ ಪರೀಕ್ಷೆ ನಡೆಸಬಾರದು ಎಂದು ಸ್ಪಷ್ಟಪಡಿಸಿದೆ.

ಇದಕ್ಕೂ ಮೊದಲು, ಅರ್ಜಿದಾರರ ಪರ ಹಿರಿಯ ವಕೀಲ ಕೆ.ವಿ.ಧನಂಜಯ್ ವಾದ ಮಂಡಿಸಿ, ಬೋರ್ಡ್ ಪರೀಕ್ಷೆಗಳು ತಮ್ಮದೇ ಆದ ಭಯವನ್ನು ಹೊಂದಿವೆ. ಹೀಗಾಗಿ ಸಾರ್ವಜನಿಕರು ಸಹ ಆತಂಕದಲ್ಲಿದ್ದಾರೆ ಎಂದರು. ಕರ್ನಾಟಕ ಸರ್ಕಾರದ ಪರ ವಾದ ಮಂಡಿಸಿದ ಹಿರಿಯ ವಕೀಲ ದೇವದತ್ ಕಾಮತ್, ವಿದ್ಯಾರ್ಥಿಗಳಿಗೆ ಉತ್ತಮ ಭವಿಷ್ಯವನ್ನು ರೂಪಿಸುವುದು ರಾಜ್ಯದ ನೀತಿಯಾಗಿದೆ. ತರಗತಿಯಲ್ಲಿ ನೀಡಲಾಗುತ್ತಿರುವ ವಿಷಯವು ಗುಣಮಟ್ಟಕ್ಕೆ ಅನುಗುಣವಾಗಿಲ್ಲ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಹೀಗಾಗಿ ನಮ್ಮ ವ್ಯಾಪ್ತಿಯಲ್ಲಿ ಬರುವ ಶಾಲೆಗಳು ತಮ್ಮ ಕೆಲಸವನ್ನು ಸರಿಯಾಗಿ ಮಾಡುತ್ತಿವೆಯೇ, ಇಲ್ಲವೇ ಎಂಬುದನ್ನು ತಿಳಿದುಕೊಳ್ಳಬೇಕಾಗುತ್ತದೆ. ಈ ಬಗ್ಗೆ ನಿರ್ಣಯಿಸಲು ಉತ್ತಮ ಮಾರ್ಗವೆಂದರೆ ಏಕರೂಪದ ಮೌಲ್ಯಮಾಪನ ಎಂದು ಪ್ರತಿಪಾದಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಹೈಕೋರ್ಟ್ ಆದೇಶಕ್ಕೆ ತಡೆ ನೀಡಿತು.ಪ್ರಕರಣವೇನು?;

ರಾಜ್ಯ ಪಠ್ಯಕ್ರಮದ ಶಾಲೆಗಳ 5, 8, 9 ಮತ್ತು 11ನೇ ತರಗತಿಗಳ ವಿದ್ಯಾರ್ಥಿಗಳಿಗೆ ಶಾಲಾ ಮಟ್ಟದ ಮೌಲ್ಯಮಾಪನದ ಬದಲಾಗಿ ರಾಜ್ಯ ಮಟ್ಟದ ಮಂಡಳಿ (ಬೋರ್ಡ್) ಪರೀಕ್ಷೆ ನಡೆಸಲು ತೀರ್ಮಾನಿಸಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತ್ತು.

ಇದನ್ನು ಪ್ರಶ್ನಿಸಿ ಕರ್ನಾಟಕ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಒಕ್ಕೂಟ, ಅನುದಾನರಹಿತ ಮಾನ್ಯತೆ ಪಡೆದ ಶಾಲೆಗಳು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದವು. ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ರವಿ ಹೊಸಮನಿ ಅವರಿದ್ದ ಏಕಸದಸ್ಯ ಪೀಠ ಕಳೆದ ಬುಧವಾರ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆ ರದ್ದುಪಡಿಸಿ ಆದೇಶಿಸಿತ್ತು. ಏಕ ಸದಸ್ಯ ನ್ಯಾಯಪೀಠದ ತೀರ್ಪು ಪ್ರಶ್ನಿಸಿ ರಾಜ್ಯ ಸರ್ಕಾರವು ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು. ಕಳೆದ ಗುರುವಾರ ಮೇಲ್ಮನವಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ರಾಜೇಶ್​ ರೈ ಅವರಿದ್ದ ವಿಭಾಗೀಯ ಪೀಠ, ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿ ಬೋರ್ಡ್ ಮಟ್ಟದ ಪರೀಕ್ಷೆಗಳಿಗೆ ಅನುಮತಿ ನೀಡಿತ್ತು. ಇದನ್ನು ಪ್ರಶ್ನಿಸಿ ಖಾಸಗಿ ಅನುದಾನ ರಹಿತ ಶಾಲೆಗಳು ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿದ್ದವು.

ರಾಜ್ಯದಲ್ಲಿ‌ ಮಾರ್ಚ್‌ 11ರಿಂದ 5,8 ಮತ್ತು 9ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ಆರಂಭವಾಗಿದ್ದು, ಈಗಾಗಲೇ ಶಿಕ್ಷಣ ಇಲಾಖೆ, ಸೋಮವಾರ ಹಾಗೂ ಮಂಗಳವಾರ ಎರಡು ವಿಷಯಗಳ ಪರೀಕ್ಷೆಗಳನ್ನು ನಡೆಸಿತ್ತು. ಇದೀಗ ಇನ್ನುಳಿದ ವಿಷಯಗಳಿಗೆ ಸುಪ್ರೀಂ ತಡೆಯಾಜ್ಞೆ ವಿಧಿಸಿದೆ.

PREV

Recommended Stories

ವಿಶ್ವದಲ್ಲೇ ಮೊದಲ ಬಾರಿ ಬನ್ನೇರುಘಟ್ಟದಲ್ಲಿ ಕರಡಿಗೆ ಕೃತಕ ಕಾಲು ಜೋಡಣೆ
ರಾಜ್ಯದ ಸಿರಿಧಾನ್ಯ ಬೆಳೆಗಾರರಿಗೆ ರಾಜ್ಯ ಸರ್ಕಾರದ ಸಿಹಿ ಸುದ್ದಿ