ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ಸಲ್ಲಿಕೆಗೂ ಮುನ್ನ ನಗರದಲ್ಲಿ ನಡೆದ ಅದ್ಧೂರಿ ಮೆರವಣಿಗೆಯು ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಯಿತು.
ಬೆಳಿಗ್ಗೆ 11.45ರ ಸುಮಾರಿಗೆ ಜೂನಿಯರ್ ಕಾಲೇಜು ಮೈದಾನದ ಬಳಿಯ ಪಿಡಬ್ಲ್ಯೂ ವೃತ್ತದಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಜಾನಪದ ಕಲಾ ತಂಡಗಳು ತನ್ನ ಕಲೆ ಪ್ರದರ್ಶಿಸುತ್ತಾ ಸಾಗಿದವು. ಅವುಗಳ ಹಿಂದೆ ಸುಮಾರು 20ರಿಂದ 25 ಸಾವಿರ ಕಾರ್ಯಕರ್ತರು ಕಾಂಗ್ರೆಸ್ ಬಾವುಟಗಳನ್ನುಹಿಡಿದು ಹೆಜ್ಜೆ ಹಾಕುತ್ತಾ ಸಾಗಿದರು. ಈ ಮೂಲಕ ಕಾಂಗ್ರೆಸ್ ಪಕ್ಷ ಹೋರಾಟಕ್ಕೆ ಪಂಥಾಹ್ವಾನ ನೀಡುವ ಸ್ಪಷ್ಟ ಸಂದೇಶವನ್ನು ಬಿಜೆಪಿ - ಜೆಡಿಎಸ್ ಮೈತ್ರಿಕೂಟಕ್ಕೆ ರವಾನಿಸಿತು.
ಅಭ್ಯರ್ಥಿ ಸುರೇಶ್ ಅವರಿಗೆ ಕಾರ್ಯಕರ್ತರು ಮಾರ್ಗಮಧ್ಯೆ ಅಲ್ಲಲ್ಲಿ ಪುಷ್ಪಾರ್ಚನೆಯ ಮೂಲಕ ಸ್ವಾಗತ ಮಾಡಿದರು. ತೆರೆದ ವಾಹನದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೆರವಣಿಗೆಯು ಸಾಗಿತು. ವಿನಾಯಕ ನಗರ ಬಡಾವಣೆಯ ಅಭಯ ಆಂಜನೇಯ ದೇಗುಲದ ಬಳಿ ಮೆರವಣಿಗೆ ಆಗಮಿಸುತ್ತಿದ್ದಂತೆ ಕ್ರೇನ್ ಬಳಸಿ ಬೃಹದಾಕಾರದ ಹಾರವನ್ನು ಹಾಕಿದರು.ರಸ್ತೆಯ ಎರಡೂ ಕಡೆಗಳಲ್ಲಿ ಸಾವಿರಾರು ಕಾರ್ಯಕರ್ತರು ಧ್ವಜಗಳನ್ನು ಬೀಸುತ್ತಾ ಬಿರು ಬಿಸಿಲನ್ನೂ ಲೆಕ್ಕಿಸದೇ ನಡೆದರು. ಜಿಲ್ಲಾ ಸಂಕೀರ್ಣದ ಭವನದ ಮುಂಭಾಗದಲ್ಲಿ ಮೆರವಣಿಗೆ ಮುಕ್ತಾಯಗೊಂಡಿತು.
ಬೆಂಗಳೂರು-ಮೈಸೂರು ಹೆದ್ದಾರಿ ಉದ್ದಕ್ಕೂ ಕಾರ್ಯಕರ್ತರು ಜಮಾಯಿಸಿದ್ದರಿಂದ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2.30 ಗಂಟೆಯವರೆಗೂ ವಾಹನಗಳ ಸಂಚಾರಕ್ಕೆ ಅಡಚಣೆ ಆಗಿತ್ತು. ಪೊಲೀಸರು ವಾಹನ ಸಂಚಾರ ಸುಗಮಗೊಳಿಸಲು ಹರಸಾಹಸ ಪಡುತ್ತಿದ್ದ ದೃಶ್ಯ ಕಂಡು ಬಂದಿತು.
ಬಾಕ್ಸ್.........
ನಾಮಪತ್ರ ಸಲ್ಲಿಕೆಗು ಮುನ್ನ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ಬೆಂಗಳೂರಿನ ಸದಾಶಿವನಗರದಲ್ಲಿ ಸಹೋದರ ಡಿ.ಕೆ.ಶಿವಕುಮಾರ್ ಹಾಗೂ ಅತ್ತಿಗೆ ಉಷಾ ಅವರ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದರು.
ಅಲ್ಲಿಂದ ರಾಮನಗರಕ್ಕೆ ಆಗಮಿಸಿದ ಡಿ.ಕೆ.ಸುರೇಶ್ ಅವರು ಅರ್ಕಾವತಿ ನದಿ ದಂಡೆಯಲ್ಲಿರುವ ಪೀರನ್ ಷಾ ವಲಿ ದರ್ಗಾ ಮತ್ತು ನಗರದ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದರು.ಬಾಕ್ಸ್.........
ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್ ಅವರ ಮೆರವಣಿಗೆ ಹಾಗೂ ನಾಮಪತ್ರ ಸಲ್ಲಿಸುವ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಗೈರಾಗಿದ್ದರು.
28ಕೆಆರ್ ಎಂಎನ್ 1,2,3.ಜೆಪಿಜಿ
1,2.ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗೂ ಮುನ್ನ ನಡೆದ ಮೆರವಣಿಗೆಯಲ್ಲಿ ಸಹಸ್ರಾರು ಜನರು ಪಾಲ್ಗೊಂಡಿರುವುದು.3.ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ನಾಮಪತ್ರ ಸಲ್ಲಿಕೆಗು ಮುನ್ನ ತಾಯಿ ಗೌರಮ್ಮ ಅವರಿಂದ ಆಶೀರ್ವಾದ ಪಡೆಯುತ್ತಿರುವುದು.