ಬೆಳೆ ನಷ್ಟ ಸಮೀಕ್ಷೆ ಮಾಡಿ ರೈತರಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ವಹಿಸಿ

KannadaprabhaNewsNetwork | Published : Jul 30, 2024 12:32 AM

ಸಾರಾಂಶ

ನಿರಂತರ ಮಳೆಯಿಂದಾಗಿ ನದಿಗಳಲ್ಲಿ ಪ್ರವಾಹ ಸ್ಥಿತಿ ಎದುರಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಬೆಳೆ ನಷ್ಟ ಸಮೀಕ್ಷೆ ಮಾಡಿ ರೈತರಿಗೆ ಸೂಕ್ತ ಬೆಳೆ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಶಾಸಕ, ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಸೂಚನೆ ನೀಡಿದರು.

ಹಾವೇರಿ: ನಿರಂತರ ಮಳೆಯಿಂದಾಗಿ ನದಿಗಳಲ್ಲಿ ಪ್ರವಾಹ ಸ್ಥಿತಿ ಎದುರಾಗಿ ಸಾಕಷ್ಟು ಪ್ರಮಾಣದಲ್ಲಿ ಬೆಳೆ ಹಾನಿ ಸಂಭವಿಸಿದ್ದು, ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಬೆಳೆ ನಷ್ಟ ಸಮೀಕ್ಷೆ ಮಾಡಿ ರೈತರಿಗೆ ಸೂಕ್ತ ಬೆಳೆ ಪರಿಹಾರ ಒದಗಿಸಲು ಕ್ರಮ ವಹಿಸಬೇಕು ಎಂದು ಶಾಸಕ, ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಮಾನಪ್ಪ ಲಮಾಣಿ ಸೂಚನೆ ನೀಡಿದರು. ನಗರದ ತಹಸೀಲ್ದಾರ್‌ ಕಚೇರಿಯಲ್ಲಿ ಸೋಮವಾರ ಬೆಳೆಹಾನಿ, ಮನೆ, ಜಾನುವಾರುಗಳ ಹಾನಿ ಕುರಿತು ಏರ್ಪಡಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ತಾಲೂಕಿನದ್ಯಾಂತ ಮಳೆಯಿಂದಾಗಿ ನೆರೆ ಸಂಭವಿಸಿ ಸುಮಾರು ೧೩೯೬ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿಯಾಗಿದ್ದು, ಹಾಗೆಯೇ ತೋಟಗಾರಿಕೆ ಬೆಳೆಗಳಲ್ಲಿ ಪ್ರತಿಶತ ಶೇ. ೯೦ರಷ್ಟು ಬೆಳೆ ಹಾನಿಯಾಗಿದೆ. ಸಂಬಂಧಪಟ್ಟ ಅಧಿಕಾರಗಳು ತಕ್ಷಣವೇ ಬೆಳೆ ಹಾನಿ ಪರಿಶೀಲನೆ ಮಾಡಿ ಬೆಳೆ ಹಾನಿಗೆ ಒಳಗಾದವರಿಗೆ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿ ಆರ್‌ಎಫ್ ಮಾರ್ಗಸೂಚಿಯ ಪ್ರಕಾರ ಪರಿಹಾರ ವಿತರಿಸಬೇಕು. ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪದೋಷ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ತಹಸೀಲ್ದಾರ್ ಕಾರ್ಯಾಲಯದಲ್ಲಿ ಸಿಬ್ಬಂದಿಗಳು ಸರಿಯಾಗಿ ಕೆಲಸ ನಿರ್ವಹಿಸುತ್ತಿಲ್ಲ ಅದರಲ್ಲೂ ಮಹಿಳಾ ಸಿಬ್ಬಂದಿಗಳು ಸರಿಯಾಗಿ ಕಾರ್ಯನಿರ್ವಹಿಸದಿರುವ ಬಗ್ಗೆ ದೂರುಗಳು ಸಾರ್ವಜನಿಕರಿಂದ ವ್ಯಕ್ತವಾಗಿವೆ. ಇದನ್ನು ಗಂಭೀರವಾಗಿ ತೆಗೆದುಕೊಳ್ಳಲಾಗಿದೆ. ಸಾರ್ವಜನಿಕರಿಂದ ಸಲ್ಲಿಕೆಯಾಗಿರುವ ಅರ್ಜಿಗಳನ್ನು ತುರ್ತು ವಿಲೇವಾರಿಗೆ ಕ್ರಮ ವಹಿಸಬೇಕು. ಅಧಿಕಾರಿಗಳು, ಸಿಬ್ಬಂದಿಗಳು ಬೇಜವಾಬ್ದಾರಿಯಿಂದ ನಡೆದುಕೊಂಡರೆ ಸಹಿಸೋದಿಲ್ಲ. ಆಗಿನ ರುದ್ರಪ್ಪ ಈಗಿಲ್ಲ, ಎಚ್ಚೆತ್ತುಕೊಂಡು ಕೆಲಸ ಮಾಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ, ಕಚೇರಿಯಲ್ಲಿ ನೀವು ಇದ್ದು ಏನು ಪ್ರಯೋಜನ. ಇದು ನಿಮಗೆ ಕೊನೆಯ ಎಚ್ಚರಿಕೆ. ಕಚೇರಿಗೆ ಬರುವ ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ, ತಡ ಮಾಡದೇ ಕೆಲಸ ಮಾಡಿಕೊಡಬೇಕು. ಅದನ್ನು ಬಿಟ್ಟು ತಿಂಗಳುಗಟ್ಟಲೇ ಫೈಲ್‌ನ್ನು ತಮ್ಮಲ್ಲಿಯೇ ಇಟ್ಟುಕೊಂಡು ಬೇಜವಾಬ್ದಾರಿ ತೋರಿದರೆ ಮಾನವೀಯತೆ ಮರೆತು ಬೇರೆಡೆಗೆ ವರ್ಗಾವಣೆ ಮಾಡಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ತಹಸೀಲ್ದಾರ ಜಿ.ಎಸ್. ಶಂಕರ್ ಮಾತನಾಡಿ, ತಾಲೂಕಿನಲ್ಲಿ ಈವರೆಗೂ ೧೬೭ ಮನೆಗಳು ಮಳೆಯಿಂದ ಹಾನಿಯಾಗಿವೆ. ಅದರಲ್ಲಿ ೪ ಮನೆಗಳನ್ನು ರದ್ದು ಪಡಿಸಿ ಉಳಿದ ಮನೆಗಳು ಪರಿಶೀಲನಾ ಹಂತದಲ್ಲಿವೆ. ನೆರೆ ಪ್ರಮಾಣ ಕಡಿಮೆ ಆದನಂತರ ಅವುಗಳನ್ನು ಸಮೀಕ್ಷೆ ಮಾಡಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ಮಾರ್ಗಸೂಚಿ ಅನ್ವಯ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಭೆಗೆ ಮಾಹಿತಿ ನೀಡಿದರು. ಕಚೇರಿ ಚಾವಣಿ ಪರಿಶೀಲನೆ: ನಿರಂತರ ಮಳೆಯಿಂದಾಗಿ ತಹಸೀಲ್ದಾಕ್ ಕಚೇರಿ ಚಾವಣಿ ಸೋರುತ್ತಿರುವ ಹಿನ್ನೆಲೆಯಲ್ಲಿ ಸಭೆಗೂ ಮುನ್ನ ತಹಸೀಲ್ದಾರ್‌ ಕಚೇರಿ ಚಾವಣಿಯನ್ನು ಶಾಸಕ ರುದ್ರಪ್ಪ ಲಮಾಣಿ ಪರಿಶೀಲಿಸಿದರು. ತಕ್ಷಣವೇ ಚಾವಣಿಗೆ ಸೀಟ್ ಅಳವಡಿಸಲು ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿ, ತಹಸೀಲ್ದಾರ್‌ ಕಚೇರಿಯನ್ನು ಹಳೆಯ ಎಸ್‌ಪಿ ಕಚೇರಿಗೆ ಸ್ಥಳಾಂತರಿಸುವ ಕುರಿತು ಪರಿಶೀಲಿಸಲಾಗುವುದು ಎಂದರು. ಸಭೆಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಸ್‌ಎಫ್‌ಎನ್ ಗಾಜೀಗೌಡರ, ಕೆಸಿಸಿ ಬ್ಯಾಂಕ್ ನಿರ್ದೇಶಕ ಕೊಟ್ರೇಶಪ್ಪ ಬಸೇಗಣ್ಣಿ, ಸವಣೂರ ಉಪವಿಭಾಗಾಧಿಕಾರಿ ಮಹ್ಮದ್ ಖಿಜರ್, ಉಪತಹಸೀಲ್ದಾರ ಅಮೃತಗೌಡ ಪಾಟೀಲ, ಎಂ.ಎಂ. ಮೈದೂರ ಇದ್ದರು.

Share this article