ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯ, ಸಂಸದೀಯ ಕಾರ್ಯವಿಧಾನ ಹಾಗೂ ಜನಪ್ರತಿನಿಧಿಗಳ ಜವಾಬ್ದಾರಿಯನ್ನು ಯುವಜನರು ಅರಿತುಕೊಳ್ಳಲು ಯುವಸಂಸತ್ತು ಕಾರ್ಯಕ್ರಮಗಳು ಸಹಕಾರಿ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು.
ಕುಶಾಲನಗರ: ಪ್ರಜಾಪ್ರಭುತ್ವ ವ್ಯವಸ್ಥೆಯ ಆಶಯ, ಸಂಸದೀಯ ಕಾರ್ಯವಿಧಾನ ಹಾಗೂ ಜನಪ್ರತಿನಿಧಿಗಳ ಜವಾಬ್ದಾರಿಯನ್ನು ಯುವಜನರು ಅರಿತುಕೊಳ್ಳಲು ಯುವಸಂಸತ್ತು ಕಾರ್ಯಕ್ರಮಗಳು ಸಹಕಾರಿ ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಅಶೋಕ ಸಂಗಪ್ಪ ಆಲೂರ ಅಭಿಪ್ರಾಯಪಟ್ಟರು.ಕೊಡಗು ವಿಶ್ವವಿದ್ಯಾಲಯದ ಜ್ಞಾನ ಕಾವೇರಿ ಆವರಣದಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆ, ಸೋಮವಾರಪೇಟೆ ಮತ್ತು ಕುಶಾಲನಗರ ತಾಲೂಕುಗಳ ಸಂಯುಕ್ತ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ 2026ನೇ ಸಾಲಿನ ಯುವಸಂಸತ್ತು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಯುವಸಂಸತ್ತಿನಲ್ಲಿ ವಿದ್ಯಾರ್ಥಿಗಳು ಸಂಸದೀಯ ಕಲಾಪದ ಮಾದರಿಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ಪ್ರಶ್ನೋತ್ತರ, ಚರ್ಚೆ, ವಿಚಾರ ಮಂಡನೆ ಹಾಗೂ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಗಳ ಮೂಲಕ ಸಂಸದೀಯ ಪ್ರಜಾಪ್ರಭುತ್ವದ ಕಾರ್ಯವೈಖರಿಯನ್ನು ವಿದ್ಯಾರ್ಥಿಗಳು ಅರಿತುಕೊಂಡರು.
ಯುವಜನರಲ್ಲಿ ನಾಯಕತ್ವ ಗುಣ, ಸಂವಹನ ಕೌಶಲ, ಆತ್ಮವಿಶ್ವಾಸ ಹಾಗೂ ಸಾಮಾಜಿಕ ಮತ್ತು ರಾಜಕೀಯ ಜವಾಬ್ದಾರಿಯನ್ನು ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಮಹತ್ವದ ಪಾತ್ರ ವಹಿಸುತ್ತವೆ. ಸಂವಿಧಾನದ ಆಶಯಗಳು, ಪ್ರಜಾಪ್ರಭುತ್ವದ ಮೌಲ್ಯಗಳು, ಹಕ್ಕುಗಳು ಮತ್ತು ಕರ್ತವ್ಯಗಳ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.ಕೊಡಗು ವಿಶ್ವವಿದ್ಯಾಲಯದ ಕುಲಸಚಿವರು (ಮೌಲ್ಯಮಾಪನ) ಡಾ. ಸುರೇಶ್ ಎಂ., ತಾಲೂಕು ಮಟ್ಟದ ಯುವಸಂಸತ್ತು ಸಮಿತಿ, ಸೋಮವಾರಪೇಟೆಯ ಸಂಚಾಲಕ ಹಾಗೂ ತಹಸೀಲ್ದಾರ್ ಕೆ.ಕೆ. ಕೃಷ್ಣಮೂರ್ತಿ, ಸಮಿತಿಯ ಕಾರ್ಯದರ್ಶಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ ಎಂ., ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹಾಗೂ ಸಮಿತಿ ಸದಸ್ಯ ಸಿದ್ದೇಗೌಡ, ತಾಲೂಕು ವಕೀಲರ ಸಂಘದ ಅಧ್ಯಕ್ಷರು ಹಾಗೂ ಸಮಿತಿ ಸದಸ್ಯರು ಸೇರಿದಂತೆ ಸಮಿತಿಯ ಸದಸ್ಯರು ಇದ್ದರು. ಪತ್ರಕರ್ತ ಚಂದ್ರಮೋಹನ್, ಪ್ರಾಧ್ಯಾಪಕಿ ಡಾ. ನಿರ್ಮಲ ಹಾಗೂ ವಕೀಲ ಯತೀಶ್ ಅವರು ತೀರ್ಪುಗಾರರಾಗಿ ಕಾರ್ಯನಿರ್ವಹಿಸಿದರು. ವಿದ್ಯಾರ್ಥಿಗಳ ವಿಷಯ ಮಂಡನೆ, ಸಂಸದೀಯ ನಡವಳಿಕೆ, ವಿಷಯದ ಅರಿವು, ಭಾಷಾ ಬಳಕೆ, ಸಮಯಪಾಲನೆ ಹಾಗೂ ಚರ್ಚೆಯಲ್ಲಿ ಪಾಲ್ಗೊಂಡ ರೀತಿಯನ್ನು ಆಧರಿಸಿ ಮೌಲ್ಯಮಾಪನ ಮಾಡಲಾಯಿತು.ಯುವ ಸಂಸತ್ತಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಲ್ಲಿ ಕುಶಾಲನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಲೋಹಿತ್ ಪ್ರಥಮ ಸ್ಥಾನ, ಕೊಡಗು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮೋಹನ್ ಹೆಚ್.ಎಂ. ದ್ವಿತೀಯ ಸ್ಥಾನ ಮತ್ತು ಸೋಮವಾರಪೇಟೆಯಲ್ಲಿನ ಸೆಂಟ್ ಜೋಸೆಫ್ ಪ್ರಥಮ ದರ್ಜೆ ಕಾಲೇಜಿನ ಮೋಹನ್ ಮತ್ತು ಜ್ಞಾನ ಕಾವೇರಿ ಆವರಣದ ಕನ್ನಡ ವಿಭಾಗ ಪ್ರೀತ ಸಿ., ಅವರು ಜಂಟಿಯಾಗಿ ತೃತೀಯ ಸ್ಥಾನ ಪಡೆದುಕೊಂಡರು. ಜಿಲ್ಲಾಮಟ್ಟಕ್ಕೂ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಯಿತು
ಬಿಆರ್‌ಸಿ ಮಂಜೇಶ್ ನಿರೂಪಿಸಿದರು, ಕೊಡಗು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಉಪನ್ಯಾಸಕ ಡಾ. ಜಮೀರ್ ಅಹ್ಮದ್ ಸ್ವಾಗತಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.