ಕನ್ನಡಪ್ರಭ ವಾರ್ತೆ ಹಾಸನ
ಬೆಂಗಳೂರಿನ ನಾಗಸಂದ್ರ ನಿವಾಸಿ ವರ್ಷ (23) ಮೃತಪಟ್ಟ ಯುವತಿ. ಸೆಪ್ಟಂಬರ್ 11ರಂದು ರಘು ಹಾಗೂ ದರ್ಶನ್ ಎಂಬುವರೊಂದಿಗೆ ಸಕಲೇಶಪುರಕ್ಕೆ ಪ್ರವಾಸಕ್ಕಾಗಿ ಹೋಗುತ್ತಿರುವುದಾಗಿ ಮನೆಯವರಿಗೆ ಹೇಳಿ ಬಂದಿದ್ದ ವರ್ಷಾ, ಯುವಕರೊಂದಿಗೆ ಬೆಟ್ಟದ ಭೈರವೇಶ್ವರ, ಮಜಗಹಳ್ಳಿ ಫಾಲ್ಸ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದ್ದರು. ಬಳಿಕ ವಳಲಹಳ್ಳಿ ಕೂಡಿಗೆಯಲ್ಲಿರುವ ಶ್ರೀದೇವಿ ಲಾಡ್ಜ್‌ನ ಕೊಠಡಿಯಲ್ಲಿ ಮೂವರು ತಂಗಿದ್ದರು. ಸೆ.15ರಂದು ಸಂಜೆ ಲಾಡ್ಜ್‌ನ ಕೊಠಡಿಯಲ್ಲಿ ಸ್ನಾನಕ್ಕೆ ತೆರಳಿದ್ದ ವೇಳೆ ವರ್ಷಾ ಅವರು ಅಸ್ವಸ್ಥಗೊಂಡಿದ್ದಾರೆ. ತಕ್ಷಣ ರಘು ಮತ್ತು ದರ್ಶನ್ ಆಕೆಯನ್ನು ಹೆತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಸಕಲೇಶಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ವೈದ್ಯರು ವರ್ಷಾ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಈ ಕುರಿತು ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವತಿಯ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದ್ದು, ಸಾವಿನ ಕುರಿತು ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಎಸ್ಪಿ ಶುಭನ್ವಿತಾ ಸುದ್ದಿಗಾರರೊಂದಿಗೆ ಮಾತನಾಡಿ, ವರ್ಷಾ ಅವರ ತಂದೆ ಜಿ. ಎಸ್. ಅರುಣ್ (೫೦) ನೀಡಿದ ದೂರಿನ ಆಧಾರದ ಮೇಲೆ ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತದೇಹವನ್ನು ಹಾಸನದ ಹಿಮ್ಸ್ ಆಸ್ಪತ್ರೆಗೆ ಸ್ಥಳಾಂತರಿಸಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಮರಣೋತ್ತರ ಪರೀಕ್ಷೆ ಪೂರ್ಣಗೊಂಡಿದ್ದು, ವಿಧಿವಿಜ್ಞಾನ ವೈದ್ಯರ ವರದಿಗಾಗಿ ಪೊಲೀಸರು ಕಾಯುತ್ತಿದ್ದಾರೆ. ವರದಿ ಬಂದ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದ್ದು, ಅದರ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಳೊಂದಿಗೆ ಲಾಡ್ಜಿನಲ್ಲಿದ್ದ ರಘು ಹಾಗೂ ದರ್ಶನ್ ಸೇರಿದಂತೆ ಇದರ ಹಿಂದೆ ಇನ್ನೂ ಬೇರೆಯವರು ಇರಬಹುದಾ ಎನ್ನುವ ಅನುಮಾನದ ಮೇಲೆ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದರು.