ಕ್ಷೇತ್ರದ ಜನತೆ ಹಾಗೂ ರೈತರು ಸಚಿವರ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಜನಪರ ಆಡಳಿತಕ್ಕೆ ಆದ್ಯತೆ ನೀಡಿ, ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ವಿಶೇಷವಾಗಿ ಕೃಷಿ ಪ್ರಧಾನವಾಗಿರುವ ಕ್ಷೇತ್ರದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನೀರಾವರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ತಿಳಿಸಿದರು. ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಗೆ ವೇಗ ನೀಡುವುದರ ಜೊತೆಗೆ, ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ನೆರವು ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಸ್ವಾಮೀಜಿ ಸಚಿವರಿಗೆ ಸಲಹೆ ನೀಡಿದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ನೂತನ ಸಚಿವರಾಗಿ ದೊರೆತಿರುವ ಅವಕಾಶವನ್ನು ಕೇವಲ ರಾಜಕೀಯ ಅಧಿಕಾರಕ್ಕೆ ಸೀಮಿತಗೊಳಿಸದೆ, ಕ್ಷೇತ್ರದ ಜನತೆ ಹಾಗೂ ರೈತರ ಕಲ್ಯಾಣಕ್ಕೆ ಸಮರ್ಪಿಸಿಕೊಂಡು ಕಾರ್ಯನಿರ್ವಹಿಸುವ ಮೂಲಕ ಮತ್ತಷ್ಟು ಜನರ ವಿಶ್ವಾಸ ಗಳಿಸಬೇಕು ಎಂದು ನಿರಂಜನ ಪೀಠದ ರುದ್ರಮುನಿ ಸ್ವಾಮೀಜಿ ಅವರು ಸಚಿವ ಕೆ. ಎಂ. ಶಿವಲಿಂಗೇಗೌಡ ಅವರಿಗೆ ಆಶೀರ್ವಾದಪೂರ್ವಕವಾಗಿ ಸಲಹೆ ನೀಡಿದರು.ತಾಲೂಕಿನ ಕಣಕಟ್ಟೆ ಹೋಬಳಿಯಲ್ಲಿ ಬರ ಪರಿಸ್ಥಿತಿಯ ಪರಿಶೀಲನೆಗೆ ತೆರಳುತ್ತಿದ್ದ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಮಾರ್ಗಮಧ್ಯೆ ಮಾಡಾಳು ಗ್ರಾಮದ ನಿರಂಜನ ಪೀಠಕ್ಕೆ ಭೇಟಿ ನೀಡಿ, ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ರುದ್ರಮುನಿ ಸ್ವಾಮೀಜಿಯವರ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಸಚಿವರನ್ನು ಹಾಗೂ ನೆರೆದಿದ್ದ ರೈತರು ಮತ್ತು ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಸ್ವಾಮೀಜಿ, ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿ ತಲೆದೋರಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಅದರಲ್ಲೂ ಶಿಕ್ಷಣ ಕ್ಷೇತ್ರದಲ್ಲಿ ಲಂಚ ನೀಡದೆ ಹಲವು ಕೆಲಸಗಳು ನಡೆಯುವುದಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಭ್ರಷ್ಟಾಚಾರ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳುವತ್ತ ಸಚಿವರು ಗಮನಹರಿಸಬೇಕು ಎಂದು ಕಿವಿಮಾತು ಹೇಳಿದರು.ಕ್ಷೇತ್ರದ ಜನತೆ ಹಾಗೂ ರೈತರು ಸಚಿವರ ಮೇಲೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಅವರ ವಿಶ್ವಾಸಕ್ಕೆ ಧಕ್ಕೆ ಬಾರದಂತೆ ಜನಪರ ಆಡಳಿತಕ್ಕೆ ಆದ್ಯತೆ ನೀಡಿ, ಕ್ಷೇತ್ರವನ್ನು ಸಮಗ್ರ ಅಭಿವೃದ್ಧಿಯತ್ತ ಕೊಂಡೊಯ್ಯಬೇಕು. ವಿಶೇಷವಾಗಿ ಕೃಷಿ ಪ್ರಧಾನವಾಗಿರುವ ಕ್ಷೇತ್ರದಲ್ಲಿ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ನೀರಾವರಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಅಗತ್ಯವಿದೆ ಎಂದು ತಿಳಿಸಿದರು. ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಗೆ ವೇಗ ನೀಡುವುದರ ಜೊತೆಗೆ, ಬರ ಪರಿಸ್ಥಿತಿಯಿಂದ ಸಂಕಷ್ಟದಲ್ಲಿರುವ ರೈತರಿಗೆ ಅಗತ್ಯ ನೆರವು ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಸ್ವಾಮೀಜಿ ಸಚಿವರಿಗೆ ಸಲಹೆ ನೀಡಿದರು.ಸ್ವಾಮೀಜಿಯವರ ಸಲಹೆಗೆ ಪ್ರತಿಕ್ರಿಯಿಸಿದ ಸಚಿವ ಕೆ.ಎಂ. ಶಿವಲಿಂಗೇಗೌಡ, ಕ್ಷೇತ್ರದ ವಿವಿಧ ಭಾಗಗಳ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಲಾಗುವುದು ಎಂದು ಹೇಳಿದರು. ಕಣಕಟ್ಟೆ ಹೋಬಳಿಯ ಕೆರೆಗಳಿಗೆ ಹೇಮಾವತಿ ನದಿ ಮೂಲದಿಂದ ನೀರು ಹರಿಸುವ ಯೋಜನೆ, ಕಸಬಾ ಹೋಬಳಿಯ ಕೆರೆಗಳಿಗೆ ಎತ್ತಿನಹೊಳೆ ಯೋಜನೆಯ ಮೂಲಕ ನೀರು ಒದಗಿಸುವುದು ಹಾಗೂ ಬಾಣಾವರ ಹೋಬಳಿಯ ಕೆರೆಗಳಿಗೆ ಭದ್ರಾ ಮೇಲ್ದಂಡೆ ಯೋಜನೆಯಿಂದ ನೀರು ಹರಿಸುವ ಉದ್ದೇಶವಿದೆ. ಈ ಯೋಜನೆಗಳ ಅನುಷ್ಠಾನಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡು ಕ್ಷೇತ್ರದ ನೀರಾವರಿ ಸಮಸ್ಯೆಗೆ ಪರಿಹಾರ ಕಲ್ಪಿಸಲು ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.ಸರ್ಕಾರದ ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕಾದ ಅಭಿವೃದ್ಧಿ ಕಾರ್ಯಗಳಲ್ಲಿ ಯಾವುದೇ ರೀತಿಯ ತಾರತಮ್ಯಕ್ಕೆ ಅವಕಾಶ ನೀಡದೆ, ನಿಷ್ಪಕ್ಷಪಾತ ಹಾಗೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುವುದಾಗಿ ಸಚಿವರು ಭರವಸೆ ನೀಡಿದರು. ಕ್ಷೇತ್ರದ ಜನತೆ ತಮ್ಮ ಮೇಲೆ ಇಟ್ಟಿರುವ ವಿಶ್ವಾಸ ಮತ್ತು ಅಭಿಮಾನಕ್ಕೆ ತಾವು ಚಿರಋಣಿಯಾಗಿದ್ದು, ಜನರ ನಿರೀಕ್ಷೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ತಿಳಿಸಿದರು.ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಸದಸ್ಯ ಎಂ.ಎಸ್.ವಿ. ಸ್ವಾಮಿ, ಗ್ರಾ.ಪಂ ಮಾಜಿ ಅಧ್ಯಕ್ಷ ಯೋಗೇಶ್, ಕೃಷಿ ಉತ್ಪನ್ನ ಸಹಕಾರ ಸಂಘದ ಅಧ್ಯಕ್ಷ ಎಸ್.ಎಂ. ಓಂಕಾರ್ ಮೂರ್ತಿ, ಉಪಾಧ್ಯಕ್ಷ ರಂಗನಾಥ್, ಮುಖಂಡರಾದ ಶಿವದೇವ್, ಮಾಡಾಳು ಶಿವಲಿಂಗಪ್ಪ, ಎಂ.ಡಿ. ಸೋಮಶೇಖರ್, ಕಾಂಗ್ರೆಸ್ ಮುಖಂಡರಾದ ಎಂ.ಜಿ. ಜಯಪ್ಪ, ಚಂದ್ರಪ್ಪ, ವಿಜಯ್ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.