ಕನ್ನಡಪ್ರಭ ವಾರ್ತೆ ರಾಯಚೂರು
ಜಿಲ್ಲೆಯ ಮಾನ್ವಿ ಪಟ್ಣಣದ ಭಾಷುಮಿಯ ಸಾಹುಕಾರ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ರಾಯಚೂರು ಇವರ ವತಿಯಿಂದ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ -2026ರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶನಿವಾರ ಮಾತನಾಡಿದರು.ಆಡಳಿತ ವ್ಯವಸ್ಥೆಯು ಜನಸಾಮಾನ್ಯರ ಬಾಗಿಲಿಗೆ ತೆರಳಿ ಅವರ ಕಷ್ಟ-ಸುಖಗಳಲ್ಲಿ ಭಾಗಿದಾರರಾಗಬೇಕು ಮತ್ತು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂಬುದು ಸರ್ಕಾರದ ಮುಖ್ಯ ಗುರಿಯಾಗಿದೆ. ಕಲ್ಯಾಣ ಕರ್ನಾಟಕ ಭಾಗ ಹಿಂದುಳಿದಿರುವಿಕೆಯ ಹಣೆಪಟ್ಟಿಯನ್ನು ಕಳಚಲು ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳನ್ನು ಮಹತ್ವಾಕಾಂಕ್ಷೆಯ ಜಿಲ್ಲೆಗಳನ್ನಾಗಿ ಘೋಷಿಸಲಾಗಿದ್ದು, ಈ ನಿಟ್ಟಿನಲ್ಲಿ ಮಾನವಿ ತಾಲೂಕಿನಿಂದ ಈ ಅಭಿಯಾನವನ್ನು ಆರಂಭಿಸಲಾಗಿದೆ ಎಂದರು.
ಈ ಪ್ರಜಾಸೇವಾ ಕಾರ್ಯಕ್ರಮವು ಕೇವಲ ಒಂದು ದಿನಕ್ಕೆ ಸೀಮಿತವಾಗಿಲ್ಲದೆ, ಪ್ರತಿ ಶನಿವಾರವೂ ನಿರಂತರವಾಗಿ ಜರುಗಲಿದೆ. ಜಿಲ್ಲಾಧಿಕಾರಿಗಳು, ತಾಲೂಕು ಮಟ್ಟದ ಶಾಸಕರು ಮತ್ತು ಸಂಬಂಧಿತ ಅಧಿಕಾರಿಗಳು ಇದರಲ್ಲಿ ಸಕ್ರಿಯವಾಗಿ ಭಾಗವಹಿಸಲಿದ್ದಾರೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವನಾಗಿ ನಾನು ಪ್ರತಿ ತಿಂಗಳ ಮೊದಲನೇ ಮತ್ತು ಮೂರನೇ ವಾರದ ಶನಿವಾರಗಳಂದು ನಿರ್ದಿಷ್ಟ ತಾಲೂಕುಗಳಲ್ಲಿ ಖುದ್ದಾಗಿ ಉಪಸ್ಥಿತರಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಲಿದ್ದೇನೆ. ಉಳಿದ ಶನಿವಾರಗಳಲ್ಲಿ ಸ್ಥಳೀಯ ಶಾಸಕರು ಹಾಗೂ ತಾಲೂಕು ಮಟ್ಟದ ಆಡಳಿತಾಧಿಕಾರಿಗಳು ಈ ಕಾರ್ಯಕ್ರಮ ಮುನ್ನಡೆಸಲಿದ್ದಾರೆ. ಕೇವಲ ಮಾನ್ವಿ ಅಷ್ಟೇ ಅಲ್ಲದೆ, ಒಟ್ಟಾರೆ ಕರ್ನಾಟಕ ರಾಜ್ಯದ ಎಲ್ಲಾ 224 ಕ್ಷೇತ್ರಗಳಲ್ಲೂ ಈ ಜನಪರ ಆಡಳಿತ ಕಾರ್ಯಕ್ರಮವು ಅತ್ಯಂತ ವ್ಯವಸ್ಥಿತವಾಗಿ ಜಾರಿಯಲ್ಲಿದೆ ಎಂದರು.
ಜಿಲ್ಲೆ ಅಭಿವೃದ್ಧಿಗೆ ಒತ್ತು: ರಾಜ್ಯದಲ್ಲಿ ಭೀಕರ ಬರಗಾಲವಿದ್ದ ಸಂದರ್ಭದಲ್ಲಿಯೂ ಸರ್ಕಾರವು ರೈತರ ಸಂಕಷ್ಟಕ್ಕೆ ಸ್ಪಂದಿಸಿದೆ. ರಾಯಚೂರು ಜಿಲ್ಲೆಯ ಐದು ತಾಲೂಕುಗಳು ಬರಪೀಡಿತ ಎಂದು ಈಗಾಗಲೇ ಘೋಷಣೆಯಾಗಿದ್ದು, ಉಳಿದ 3 ತಾಲೂಕುಗಳನ್ನೂ ಸಹ ಬರಪೀಡಿತವೆಂದು ಘೋಷಿಸುವಂತೆ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
ಈ ಸಂದರ್ಭದಲ್ಲಿ ಮಾನ್ವಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಗಪೂರ್ಸಾಬ್, ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಪಿ.ಕೆ.ಅಮರೇಶ, ಮುಖ್ಯಮಂತ್ರಿಗಳ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಎಸ್.ನಕುಲ್, ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಈಶ್ವರ್ ಕಾಂದೂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿವಿಧ ಗ್ರಾಮಗಳಿಂದ ಆಗಮಿಸಿದ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವತಿಯಿಂದ ಹಲವು ಕೆಲಸ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಕಳೆದ ಮೂರು ವರ್ಷಗಳಲ್ಲಿ ಒಟ್ಟು 18,000 ಕೋಟಿ ರು. ಅನುದಾನವನ್ನು ನಮ್ಮ ಭಾಗಕ್ಕೆ ಹಂಚಿಕೆ ಮಾಡಲಾಗಿದ್ದು, 2023-24ರಲ್ಲಿ 3 ಕೋಟಿ, 2024-25ರಲ್ಲಿ 5 ಕೋಟಿ, 2025-26ರಲ್ಲಿ 5 ಕೋಟಿ ಹಾಗೂ ಪ್ರಸ್ತುತ ಸಾಲಿನಲ್ಲಿ 5 ಕೋಟಿ ರು.ಗಳನ್ನು ನೀಡುವ ಮೂಲಕ ನುಡಿದಂತೆ ನಡೆಯುವ ಸರ್ಕಾರದ ಬದ್ಧತೆಯನ್ನು ಇದು ತೋರಿಸುತ್ತದೆ ಎಂದು ಸಚಿವರು ತಿಳಿಸಿದರು.