ಜಿಲ್ಲಾ ಕ್ರೀಡಾಂಗಣಕ್ಕೆ ಸಿಂಥಟಿಕ್ ಟ್ಯ್ರಾಕ್ ಮಂಜೂರು: ಡಾ. ಮಂತರ್‌ ಗೌಡ

KannadaprabhaNewsNetwork |  
Published : Jan 10, 2026, 02:45 AM IST
ಚಿತ್ರ :  9ಎಂಡಿಕೆ1 : ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿದರು.  | Kannada Prabha

ಸಾರಾಂಶ

ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 9 ಕೋಟಿ ರು. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ಯ್ರಾಕ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 9 ಕೋಟಿ ರು. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ಯ್ರಾಕ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕ ಡಾ. ಮಂತರ್ ಗೌಡ ಹೇಳಿದರು.

ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆಯ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದರು. ಹಾಗೆಯೇ ಜಿಲ್ಲಾ ಕ್ರೀಡಾಂಗಣದಲ್ಲಿ ಮಿನಿ ಒಳಾಂಗಣ ಸೆಮಿ ಇಂಡೋರ್ ಸಿಂಥಟಿಕ್ ಬಾಸ್ಕೆಟ್ ಬಾಲ್ ಅಂಕಣ ನಿರ್ಮಾಣಕ್ಕೆ ಸರ್ಕಾರದಿಂದ 150 ಲಕ್ಷ ರು. ವೆಚ್ಚಕ್ಕೆ ಅನುಮೋದನೆ ದೊರೆತಿದ್ದು, ಈಗಾಗಲೇ 20 ಲಕ್ಷ ರು. ಬಿಡುಗಡೆಯಾಗಿದೆ ಎಂದು ಶಾಸಕರು ವಿವರಿಸಿದರು. ಸರ್ಕಾರ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಿದ್ದು, ಕ್ರೀಡಾ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ಕೊಡಗು ಜಿಲ್ಲೆ, ಕ್ರೀಡೆಯಲ್ಲಿ ಮತ್ತಷ್ಟು ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಎಂದು ಸಲಹೆ ಮಾಡಿದರು.

ರಾಜ್ಯ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಈಗಾಗಲೇ ಜಾಗ ಗುರುತಿಸಲಾಗಿದ್ದು, ಮುಖ್ಯಮಂತ್ರಿ ಅವರ ವಿಶೇಷ ಅನುದಾನ ಅಥವಾ ಶಾಸಕರ ನಿಧಿಯಿಂದ ಅನುದಾನ ಬಿಡುಗಡೆ ಮಾಡಿಸಿ, ಪ್ರಸಕ್ತ ವರ್ಷವೇ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಶಾಸಕರು ಹೇಳಿದರು.

ಸರ್ಕಾರಿ ನೌಕರರ ಭವನ ನಿರ್ಮಾಣ ಸಂಬಂಧ ನೀಲ ನಕಾಶೆ ಸಿದ್ಧಪಡಿಸಿ ಅಂದಾಜು ಪಟ್ಟಿ ಸಲ್ಲಿಸುವಂತೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕಕ್ಕೆ ಸಲಹೆ ಮಾಡಿದರು.

ಸರ್ಕಾರಿ ನೌಕರರು ಪ್ರತಿ ನಿತ್ಯ ಒಂದಲ್ಲ ಒಂದು ರೀತಿ ಒತ್ತಡದಲ್ಲಿ ಕೆಲಸ ನಿರ್ವಹಿಸುತ್ತಾರೆ. ಒತ್ತಡದ ನಡುವೆ ಆರೋಗ್ಯಕ್ಕೆ ಸಮಯ ನೀಡಿದರೆ ಉತ್ತಮವಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗಲಿದೆ ಎಂದು ಶಾಸಕರು ಅಭಿಪ್ರಾಯಪಟ್ಟರು.

ಪ್ರತಿನಿತ್ಯದ ಕೆಲಸದ ನಡುವೆ ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಓಟ, ನಡಿಗೆ, ಹೀಗೆ ವಿವಿಧ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳುವಂತಾಗಬೇಕು. ಇದರಿಂದ ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಿರಲು ಸಾಧ್ಯವಾಗಲಿದೆ ಎಂದು ಡಾ. ಮಂತರ್ ಗೌಡ ವಿವರಿಸಿದರು. ಮಾನಸಿಕ ಮತ್ತು ದೈಹಿಕವಾಗಿ ಪರಿಪೂರ್ಣರಾಗಿದ್ದರೆ ಎಷ್ಟೇ ಒತ್ತಡವಿದ್ದರೂ ಕೆಲಸ ನಿಭಾಯಿಸಬಹುದು. ಆ ನಿಟ್ಟಿನಲ್ಲಿ ಆರೋಗ್ಯವೇ ಭಾಗ್ಯ ಎನ್ನುವಂತೆ ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕು. ಕ್ರೀಡಾ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವಂತಾಗಬೇಕು ಎಂದು ಶಾಸಕರು ನುಡಿದರು. ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಸಂಘದ ಅಧ್ಯಕ್ಷ ಎಂ.ಸಿ. ಅರುಣ್ ಕುಮಾರ್ ಮಾತನಾಡಿ, ಪ್ರತಿ ವರ್ಷದಂತೆ ಈ ವರ್ಷವೂ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಯನ್ನು ಏರ್ಪಡಿಸಲಾಗಿದೆ ಎಂದು ಹೇಳಿದರು.

ರಾಜ್ಯ ಸರ್ಕಾರಿ ನೌಕರರಿಗೆ ಜಿಲ್ಲಾ ಮಟ್ಟದಲ್ಲಿ ಸರ್ವೋತ್ತಮ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಇದನ್ನು ಮುಂದುವರಿಸುವಂತಾಗಬೇಕು ಎಂದು ಕೋರಿದರು.

ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಜಾಗವಿದ್ದು, ಹೆಚ್ಚಿನ ಅನುದಾನ ಒದಗಿಸುವಂತಾಗಬೇಕು ಎಂದು ಇದೇ ಸಂದರ್ಭ ಶಾಸಕರಲ್ಲಿ ಮನವಿ ಮಾಡಿದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ವಿ.ಟಿ. ವಿಸ್ಮಯಿ, ಸಂಘದ ನಿರ್ದೇಶಕ ಎಸ್. ಹೊನ್ನೇ ಗೌಡ, ಜಿಲ್ಲಾ ಕಾರ್ಯದರ್ಶಿ ಬಿ.ಜಿ. ಸಂದೀಪ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದ ಅಧ್ಯಕ್ಷ ಜಿಲ್ಲಾ ಖಜಾಂಜಿ ಪಿ.ಡಿ. ರಾಜೇಶ್, ರಾಜ್ಯ ಪರಿಷತ್‌ ಸದಸ್ಯರಾದ ಪಿ.ಎಂ. ಬಾಬು, ರಾಜ್ಯ ಸರ್ಕಾರಿ ನೌಕರರ ತಾಲೂಕು ಘಟಕದ ಅಧ್ಯಕ್ಷ ಪ್ರದೀಪ್, ಕೆ.ಎಂ. ತಿಮ್ಮಯ್ಯ, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯಾಧ್ಯಕ್ಷ ಮೋಹನ್ ಪೆರಾಜೆ, ಗೌರವಾಧ್ಯಕ್ಷ ಶಮ್ಮಿ ಎಸ್.ಟಿ, ಇತರರು ಇದ್ದರು.

ಹಾಕಿ ಸೇರಿದಂತೆ ವಿವಿಧ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಸನ್ಮಾನಿಸಲಾಯಿತು.

ಲಹರಿ ತಂಡದವರು ನಾಡಗೀತೆ, ರೈತಗೀತೆ ಹಾಡಿದರು. ಪಿ.ಟಿ. ಪೂರ್ಣೇಶ್ ಅವರು ಕ್ರೀಡಾ ಜ್ಯೋತಿ ತಂದರು. ಅನಿತಾ ನಿರೂಪಿಸಿದರು. ಶ್ರೀಕಾಂತ್ ಸ್ವಾಗತಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಯಣ್ಣನ ವೀರಭೂಮಿ ಶೀಘ್ರ ಲೋಕಾರ್ಪಣೆ
ಅಕ್ರಮ ಬಾಂಗ್ಲಾ ವಲಸಿಗರನ್ನು ಹೊರಗಟ್ಟಿ