ಕಬ್ಬು ದರಕ್ಕಾಗಿ ತಹಸೀಲ್ದಾರ್‌ ಕಚೇರಿಗೆ ಬೀಗ

KannadaprabhaNewsNetwork |  
Published : Nov 11, 2025, 02:00 AM IST

ಸಾರಾಂಶ

ಟನ್‌ ಕಬ್ಬಿಗೆ ₹3,500 ದರ ನಿಗದಿಗೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಕನ್ನಡಪ್ರಭ ವಾರ್ತೆ ಮುಧೋಳ

ಟನ್‌ ಕಬ್ಬಿಗೆ ₹3,500 ದರ ನಿಗದಿಗೆ ಆಗ್ರಹಿಸಿ ಬಾಗಲಕೋಟೆ ಜಿಲ್ಲೆ ಮುಧೋಳದಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಉಗ್ರ ಸ್ವರೂಪ ಪಡೆದುಕೊಳ್ಳುತ್ತಿದೆ.

ಮುಧೋಳದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ರೈತರು, ಬಳಿಕ, ತಹಸೀಲ್ದಾರ್‌ ಕಚೇರಿವರೆಗೆ ಪಾದಯಾತ್ರೆ ನಡೆಸಿದರು. ಈ ವೇಳೆ, ತಹಸೀಲ್ದಾರ್‌ ಕಚೇರಿಗೆ ಮುತ್ತಿಗೆ ಹಾಕಿ, ಕಚೇರಿಯಲ್ಲಿನ ಎಲ್ಲ ಸಿಬ್ಬಂದಿಯನ್ನು ಹೊರ ಹಾಕಿ, ಬೀಗ ಜಡಿದು, ಕೆಲ ಗಂಟೆಗಳವರೆಗೆ ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಬಳಿಕ, ಮತ್ತೆ ಸಂಗೊಳ್ಳಿ ರಾಯಣ್ಣ ಸರ್ಕಲ್‌ಗೆ ಆಗಮಿಸಿ, ಯಥಾಸ್ಥಿತಿ ಧರಣಿ ಸತ್ಯಾಗ್ರಹ ಆರಂಭಿಸಿದರು. ಅಷ್ಟರಲ್ಲೇ ಕುಂದರಗಿ ಹತ್ತಿರದ ಜೆಮ್ ಶುಗರ್ಸ್ ಕಂಪನಿ, ಕಬ್ಬು ನುರಿಸುವ ಕಾರ್ಯಾರಂಭ ಮಾಡಿರುವ ಸುದ್ದಿ ತಿಳಿಯಿತು. ಇದರಿಂದ ಆಕ್ರೋಶಗೊಂಡ ಹೋರಾಟಗಾರರು, ಜೆಮ್ ಶುಗರ್ಸ್‌ ಕಾರ್ಖಾನೆಗೆ ಮುತ್ತಿಗೆ ಹಾಕಲು ಮುಂದಾದರು. ರೈತರ ಪ್ರತಿಭಟನೆಗೆ ಮಣಿದ ಕಾರ್ಖಾನೆಯ ಸಿಬ್ಬಂದಿ ಕಾರ್ಖಾನೆಯನ್ನು ಬಂದ್‌ ಮಾಡಿದರು. ಹೋರಾಟಕ್ಕೆ ಮಹಿಳೆಯರು ಕೂಡ ಸಾಥ್ ಕೊಡುತ್ತಿದ್ದಾರೆ. ----ಹಾವೇರಿಯಲ್ಲೂ ಧರಣಿ ಆರಂಭ:

ಈ ಮಧ್ಯೆ, ಈಗಾಗಲೇ ಸರ್ಕಾರ ಘೋಷಣೆ ಮಾಡಿದಂತೆ ಟನ್ ಕಬ್ಬಿಗೆ ₹3,300 ದರವನ್ನು ಹಾವೇರಿ ಜಿಲ್ಲೆಯ ಕಬ್ಬು ಬೆಳೆಗಾರರಿಗೂ ನೀಡುವಂತೆ ಆಗ್ರಹಿಸಿ ಹಾವೇರಿ ಜಿಲ್ಲಾ ಕಬ್ಬು ಬೆಳೆಗಾರರ ಸಂಘದ ರೈತ ಮುಖಂಡರು ಸೋಮವಾರದಿಂದ ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಅಹೋರಾತ್ರಿ ಧರಣಿ ಆರಂಭಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಕಬ್ಬು ಬೆಳೆಗಾರರು, ಬೆಳಗಾವಿ, ಬಾಗಲಕೋಟೆ ರೈತರಿಗೆ 11.25 ಇಳುವರಿ ಆಧಾರದ ಮೇಲೆ 3,300 ರು.ಕೊಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಹಾವೇರಿ ಜಿಲ್ಲೆಯಲ್ಲೂ ಸರಾಸರಿ ಅಷ್ಟೇ ರಿಕವರಿ ಬರುತ್ತದೆ. ಆದರೆ, ಕಾರ್ಖಾನೆಯವರು ಇಳುವರಿ ಕಡಿಮೆ ತೋರಿಸಿ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

PREV

Recommended Stories

ಬಣ್ಣಾರಿ ಸಕ್ಕರೆ ಕಾರ್ಖಾನೆಯಿಂದ ರೈತರಿಗೆ ಮೋಸ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಎಸ್ಪಿ ಕಾರ್ಯಕರ್ತರಿಂದ ಪ್ರತಿಭಟನೆ