ನಕಲಿ ದಾಖಲೆ ಸೃಷ್ಟಿಸುವವರ ವಿರುದ್ಧ ಕ್ರಮವಹಿಸಿ: ಟಿ.ಬಿ. ಜಯಚಂದ್ರ

KannadaprabhaNewsNetwork |  
Published : Jul 02, 2025, 11:52 PM ISTUpdated : Jul 03, 2025, 01:19 PM IST
ಲ್ಯಾಪ್ ಟ್ಯಾಪ್ ವಿತರಣೆ | Kannada Prabha

ಸಾರಾಂಶ

ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾಲಿ ಇರುವ ಸರ್ಕಾರಿ ಜಾಗವನ್ನು ಲೂಟಿ ಮಾಡುತ್ತಿರುವವರನ್ನು ಮಟ್ಟ ಹಾಕಬೇಕು.

 ತುಮಕೂರು :  ಸರ್ಕಾರಿ ಜಮೀನಿಗೆ ಸಂಬಂಧಿಸಿದಂತೆ ನಕಲಿ ದಾಖಲೆಗಳನ್ನು ಸೃಷ್ಟಿಸುವ ಅಧಿಕಾರಿ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶಿರಾ ಶಾಸಕ ಟಿ.ಬಿ. ಜಯಚಂದ್ರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರಿಗೆ ಸೂಚಿಸಿದರು. 

ಶಿರಾ ತಾಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಕಂದಾಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಖಾಲಿ ಇರುವ ಸರ್ಕಾರಿ ಜಾಗವನ್ನು ಲೂಟಿ ಮಾಡುತ್ತಿರುವವರನ್ನು ಮಟ್ಟ ಹಾಕಬೇಕು. ಮಧುಗಿರಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕೆಲವು ಅಧಿಕಾರಿ/ಸಿಬ್ಬಂದಿ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿರುವ ಬಗ್ಗೆ ನನಗೆ ಮಾಹಿತಿಯಿದ್ದು, ಅಂತಹವರನ್ನು ಪತ್ತೆ ಹಚ್ಚಿ ನೇರವಾಗಿ ಜೈಲಿಗೆ ಕಳುಹಿಸಲು ಕ್ರಮ ವಹಿಸಬೇಕು.

 ಕರ್ತವ್ಯಲೋಪ ಎಸಗುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ ಅವರಿಗೆ ಸೂಚಿಸಿದರು. ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮಾತನಾಡಿ, ಸರ್ಕಾರಿ ಜಮೀನು ದುರಸ್ತಿ ಮಾಡಲು ನಮೂನೆ 1-5ರಲ್ಲಿ ಸಲ್ಲಿಸಿರುವ ಅರ್ಜಿಗಳು 1 ವರ್ಷದಿಂದ ವಿಲೇವಾರಿಯಾಗದೆ ಬಾಕಿ ಉಳಿದಿವೆ. ಅರ್ಜಿಗಳನ್ನು ವಿಲೇವಾರಿ ಮಾಡದೆ ಬಾಕಿ ಉಳಿಸಿಕೊಂಡ ಕಂದಾಯ ನಿರೀಕ್ಷಕರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಬೇಕೆಂದು ತಹಶೀಲ್ದಾರ್ ಸಚ್ಚಿದಾನಂದ ಕುಚನೂರು ಅವರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಶಿರಾ ತಾಲೂಕಿನ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸಾಂಕೇತಿಕವಾಗಿ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಯಿತು. ಕೇಕ್ ಕತ್ತರಿಸುವ ಮೂಲಕ ಕಂದಾಯ ದಿನವನ್ನು ಆಚರಿಸಲಾಯಿತು. ಇದಕ್ಕೂ ಮುನ್ನ ಫ.ಗು.ಹಳಕಟ್ಟಿ ಜಯಂತಿ ಅಂಗವಾಗಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು.

ಸಭೆಯಲ್ಲಿ ಭೂ ದಾಖಲೆಗಳ ಇಲಾಖೆಯ ಉಪನಿರ್ದೇಶಕ ನಿರಂಜನ್, ಶಿರಸ್ತೇದಾರ್ ಎನ್.ಆರ್. ಮೋಹನ್ ಮೂರ್ತಿ, ಚುನಾವಣಾ ಶಿರಸ್ತೇದಾರ್ ನಾಗರಾಜ್, ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಸೇರಿದಂತೆ ಮತ್ತಿತರ ಅಧಿಕಾರಿಗಳು ಭಾಗವಹಿಸಿದ್ದರು.

PREV
Read more Articles on

Recommended Stories

ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಎಮ್ಮೆ ಕೊಡಿಸುವುದಾಗಿ ಪ್ರೇಮ್‌ಗೆ ವಂಚನೆ : ₹4.75 ಲಕ್ಷ ಮೋಸ