ರೋಣ: ಅಸಂಖ್ಯಾತ ಭಕ್ತ ಸಮೂಹ ಹೊಂದಿರುವ ಹಿಂದುಗಳ ಧಾರ್ಮಿಕ ಕ್ಷೇತ್ರ ಧರ್ಮಸ್ಥಳದ ಹೆಸರು ಹಾಗೂ ಪಾವಿತ್ರ್ಯಕ್ಕೆ ಧಕ್ಕೆ ಉಂಟು ಮಾಡುತ್ತಿರುವ ದುಷ್ಟಶಕ್ತಿಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮಾಜಿ ಸಚಿವ ಕಳಕಪ್ಪ ಬಂಡಿ ಆಗ್ರಹಿಸಿದರು.
ಹಿಂದುಗಳ ಪವಿತ್ರ ಧಾರ್ಮಿಕ ಕ್ಷೇತ್ರವಾಗಿರುವ ಧರ್ಮಸ್ಥಳಕ್ಕೆ ಅಪಾರ ಭಕ್ತರಿಗೆ ಅಲ್ಲಿಯ ಪಾವಿತ್ರ್ಯಕ್ಕೆ ಧಕ್ಕೆ ತರುವ ನಿಟ್ಟಿನಲ್ಲಿ ಕೆಲವು ಕಿಡಿಗೇಡಿಗಳು ವಿದೇಶಗಳಿಂದ ಬರುವ ಹಣದ ಆಸೆಗಾಗಿ ಈ ಕೃತ್ಯ ಮಾಡುತ್ತಿದ್ದಾರೆ. ತಮ್ಮ ಆಶಯದಂತೆ ಎಲ್ಲೆಂದರಲ್ಲಿ ಗುಂಡಿ ತೋಡಿ ಶವ ಹೂತಿರುವ ಬಗ್ಗೆ ಮಾಡಿರುವ ಎಲ್ಲ ಆರೋಪಗಳು ಸುಳ್ಳು ಎಂಬುದು ಸ್ಪಷ್ಟವಾಗಿದೆ. ಕೇವಲ ಹಣದ ಆಸೆಗಾಗಿ ಇವರುಗಳು ಕ್ಷೇತ್ರದ ಹೆಸರು ಕೆಡಿಸುವ ನಿಟ್ಟಿನಲ್ಲಿ ಹುನ್ನಾರ ನಡೆಸಿದ್ದು ಅಂತಹ ದುಷ್ಟ ಶಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ಮುಂದಾಗಬೇಕು ಎಂದರು.
ಬಿಜೆಪಿ ಹಿರಿಯ ಮುಖಂಡ ಅಶೋಕ ನವಲಗುಂದ ಮಾತನಾಡಿ, ಕಳೆದ ಕೆಲವು ದಿನಗಳಿಂದ ಧರ್ಮಸ್ಥಳ ಕ್ಷೇತ್ರದ ಹೆಸರಿಗೆ ಧಕ್ಕೆ ಬರುವ ರೀತಿಯಲ್ಲಿ ಕೆಲವು ಕುತಂತ್ರವನ್ನು ನಡೆಸಿದ್ದು, ಅವರು ನಡೆಸಿರುವ ನಾಟಕಗಳು ಒಂದೊಂದಾಗಿ ಹೊರಬರುತ್ತಿದ್ದು, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ತರುತ್ತಿರುವ ಇಂತಹ ವ್ಯಕ್ತಿಗಳಿಗೆ ಸೂಕ್ತ ಕಾನೂನು ಕ್ರಮ ಕೈಗೊಂಡು ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು. ತಹಸೀಲ್ದಾರ್ ನಾಗರಾಜ ಕೆ. ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.