ಅನಧಿಕೃತವಾಗಿ ತಂಬಾಕು ಮಾರುವವರ ವಿರುದ್ಧ ಕ್ರಮವಹಿಸಿ

KannadaprabhaNewsNetwork |  
Published : Jun 27, 2025, 12:48 AM IST
26ಕೆಆರ್ ಎಂಎನ್ 1.ಜೆಪಿಜಿರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಚಂದ್ರಯ್ಯರವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ  ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಯಿತು. | Kannada Prabha

ಸಾರಾಂಶ

ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನಗಳನ್ನು ಅಧಿಕೃತವಾಗಿ ಮಾರಾಟ ಮಾಡಲು ಟೊಬ್ಯಾಕೊ ವೆಂಡರ್ ಲೈಸೆನ್ಸ್ ಪಡೆದುಕೊಳ್ಳುವುದು ಕಡ್ಡಾಯ.

ಕನ್ನಡಪ್ರಭ ವಾರ್ತೆ ರಾಮನಗರ

ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಕೋಟ್ಪಾ ಕಾಯ್ದೆಯಡಿ ಕಾರ್ಯಾಚರಣೆ ಕೈಗೊಂಡು ಅನಧಿಕೃತವಾಗಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಆರ್. ಚಂದ್ರಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಡೆದ ತ್ರೈಮಾಸಿಕ ಜಿಲ್ಲಾ ಸಮನ್ವಯ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ತಂಬಾಕು ಉತ್ಪನ್ನಗಳನ್ನು ಅಧಿಕೃತವಾಗಿ ಮಾರಾಟ ಮಾಡಲು ಟೊಬ್ಯಾಕೊ ವೆಂಡರ್ ಲೈಸೆನ್ಸ್ ಪಡೆದುಕೊಳ್ಳುವುದು ಕಡ್ಡಾಯ. ಈ ಕುರಿತಂತೆ ನಗರ ಹಾಗೂ ಗ್ರಾಮೀಣ ಭಾಗದ ಸಂಬಂಧಿಸಿದ ಅಧಿಕಾರಿ, ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ದಂಡ ಸಂಗ್ರಹ ಪುಸ್ತಕವನ್ನು ನೀಡಲಾಗಿದೆ. ಅದರಂತೆ ಕೋಟ್ಪಾ ಕಾರ್ಯಾಚರಣೆ ಕೈಗೊಂಡು ಟೊಬ್ಯಾಕೊ ವೆಂಡರ್ ಲೈಸೆನ್ಸ್ ಪಡೆಯದೆ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ಅಂಗಡಿ-ಮಳಿಗೆಗಳ ಮೇಲೆ ದಾಳಿ ಮಾಡಿ ದಂಡ ಹಾಕಬಹುದಾಗಿದೆ ಹಾಗೂ ಸಂಬಂಧಿಸಿದ ಮಳಿಗೆಯ ವ್ಯಾಪಾರ ಪರವಾನಗಿಯನ್ನೇ ರದ್ದು ಮಾಡಬಹುದಾಗಿದೆ ಎಂದು ಹೇಳಿದರು.

ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಾದ ರಾಮನಗರ, ಚನ್ನಪಟ್ಟಣ, ಕನಕಪುರ ನಗರಸಭೆ, ಮಾಗಡಿ, ಬಿಡದಿ ಪುರಸಭೆ ಹಾಗೂ ಹಾರೋಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ತಂಬಾಕು ಪದಾರ್ಥಗಳನ್ನು ಮಾರಾಟ ಮಾಡುವ ಅನಧೀಕೃತ ಅಂಗಡಿ-ಮಳಿಗೆಗಳನ್ನು ಪರಿಶೀಲಿಸಿ ದಂಡ ವಿಧಿಸುವ ಕಾರ್ಯ ಆಗುತ್ತಿದೆ. ಆದರೆ ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಈ ಕಾರ್ಯ ಚುರುಕಾಗಬೇಕು, ಅದಕ್ಕಾಗಿ ಪಿಡಿಒಗಳು ಸಿದ್ಧರಾಗುವಂತೆ ಸೂಚನೆ ನೀಡಿದರು.ದಂಡದ ಮೊತ್ತಕ್ಕಿಂತಲೂ ಜನರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಜನರಲ್ಲಿ ತಂಬಾಕು ಬಳಕೆಯ ಪ್ರಮಾಣವನ್ನು ಕಡಿಮೆ ಮಾಡಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್‌ನಂತಹ ಮಾರಣಾಂತಿಕ ಕಾಯಿಲೆಗಳು ಹೆಚ್ಚಾಗುತ್ತಿವೆ, ಈ ಬಗ್ಗೆ ಜನಜಾಗೃತಿ ಅಗತ್ಯವಾಗಿದೆ. ಆ ಕಾರಣಗಳಿಂದಾಗಿ ಹೆಚ್ಚಾಗಿ ದಾಳಿಗಳನ್ನು ನಡೆಸಬೇಕು ಎಂದು ಹೇಳಿದರು.

ಬೆಂಗಳೂರು ದಕ್ಷಿಣ ಜಿಲ್ಲೆಯ ಸುಗ್ಗನಹಳ್ಳಿ ಗ್ರಾಮ ಪಂಚಾಯಿತಿ ಈಗಾಗಲೇ ತಂಬಾಕು ಮುಕ್ತ ಗ್ರಾಮ ಎಂದು ಘೋಷಣೆಯಾಗಿದೆ, ಅದೇ ರೀತಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕನಿಷ್ಠ ಒಂದೊಂದು ಗ್ರಾಮವಾದರೂ ತಂಬಾಕು ಮುಕ್ತವಾಗಬೇಕು, ಈ ದಿಸೆಯಲ್ಲಿ ಪಿಡಿಒಗಳು ಶ್ರಮಿಸಬೇಕು ಎಂದು ತಾಕೀತು ಮಾಡಿದರು.

ಶಾಲಾ-ಕಾಲೇಜಿನ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಪದಾರ್ಥ ಮಾರುವುದು ಕಂಡು ಬಂದರೆ ಕಾನೂನು ರೀತಿಯ ಕಠಿಣ ಕ್ರಮ ವಹಿಸಲಾಗುವುದು, ಅದೇ ರೀತಿ ಜಿಲ್ಲೆಯ ರೆಸಾರ್ಟ್ ಹಾಗೂ ಹೋಂಸ್ಟೇಗಳಲ್ಲಿಯೂ ತಂಬಾಕು ಉತ್ಪನ್ನ ಮಾರಾಟವಾಗುವ ಬಗ್ಗೆ ಎಚ್ಚರ ವಹಿಸಬೇಕು ಹಾಗೂ ಅಲ್ಲಿಯೂ ದಾಳಿಯಂತಹ ಕಾರ್ಯಾಚರಣೆಗಳನ್ನು ಹಮ್ಮಿಕೊಳ್ಳಬೇಕು ಎಂದು ಚಂದ್ರಯ್ಯ ಸೂಚನೆ ನೀಡಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಶೇಖರ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕಿರಣ್ ಶಂಕರ್, ಪಿಎಸ್‌ಐ ಕೃಷ್ಣ, ಜಿಲ್ಲಾ ಅಂಕಿತ ಅಧಿಕಾರಿ ರೋಚನ, ಆರೋಗ್ಯ ಇಲಾಖೆಯ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಮತ್ತಿತರು ಉಪಸ್ಥಿತರಿದ್ದರು.

------

26ಕೆಆರ್ ಎಂಎನ್ 1.ಜೆಪಿಜಿ

ರಾಮನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಚಂದ್ರಯ್ಯರವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಜಿಲ್ಲಾ ಸಮನ್ವಯ ಸಮಿತಿ ಸಭೆ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕ್ಷೇತ್ರದ ಕೆಲಸವನ್ನು ತಲೆಮೇಲೆ ಹೊತ್ತು ಮಾಡುವೆ
ಜಾತಿ ವೈಷಮ್ಯಕ್ಕೆ ಅವಕಾಶವಿಲ್ಲ:ಡಾ. ತೌಫೀಕ್‌ ಪಾರ್ಥನಳ್ಳಿ