ಕನ್ನಡಪ್ರಭ ವಾರ್ತೆ ಸಕಲೇಶಪುರ
ಪಟ್ಟಣದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶಾಸಕ ಸಿಮೆಂಟ್ ಮಂಜು ಅವರ ನೇತೃತ್ವದಲ್ಲಿ ನಡೆದ ತಾಲೂಕು ಟಾಸ್ಕ್ ಫೋರ್ಸ್ ಸಭೆಯಲ್ಲಿ ಅವರು ಮಾತನಾಡಿ, ತಾಲೂಕು ಬರಪೀಡಿತ ಪಟ್ಟಿಗೆ ಸೇರ್ಪಡೆಯಾಗಿದ್ದು, ಈಗಾಗಲೇ ಕೆಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ. ಈ ಕುರಿತು ಸಾರ್ವಜನಿಕರಿಂದ ದೂರವಾಣಿ ಕರೆಗಳು ಬಂದಿದ್ದು, ತಾಲೂಕು ಪಂಚಾಯಿತಿ ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳ ಗಮನಕ್ಕೂ ಸಮಸ್ಯೆಗಳು ಬಂದಿವೆ ಎಂದು ತಿಳಿಸಿದರು. ಕುಡಿಯುವ ನೀರಿನ ಸಮಸ್ಯೆ ಎದುರಾಗಿರುವ ಗ್ರಾಮಗಳ ನೈಜ ಪರಿಸ್ಥಿತಿಯನ್ನು ಪರಿಶೀಲಿಸಿ, ಅಗತ್ಯ ಪರಿಹಾರ ಕ್ರಮಗಳನ್ನು ಕೈಗೊಳ್ಳುವ ಉದ್ದೇಶದಿಂದ ತಹಸೀಲ್ದಾರ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕೆಇಬಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದೆ ಎಂದರು.
ಕೆಲವು ಗ್ರಾಮಗಳಲ್ಲಿ ಬೋರ್‌ವೆಲ್‌ಗಳು ಹಾಗೂ ಬಾವಿಗಳಲ್ಲಿ ನೀರಿನ ಮಟ್ಟ ಕುಸಿದಿದ್ದು, ನೀರು ಬತ್ತಿಹೋಗಿದೆ. ಇಂತಹ ಕಡೆ ಪರ್ಯಾಯ ನೀರಿನ ವ್ಯವಸ್ಥೆ ಕಲ್ಪಿಸುವುದು, ಪೈಪ್‌ಲೈನ್ ಮತ್ತು ಮೋಟಾರ್ ದುರಸ್ತಿ, ಬೋರ್‌ವೆಲ್ ಹಾಗೂ ಬಾವಿಗಳ ಆಳ ಹೆಚ್ಚಿಸುವುದು ಸೇರಿದಂತೆ ಯಾವೆಲ್ಲ ಕ್ರಮಗಳ ಅಗತ್ಯವಿದೆ ಎಂಬುದರ ಕುರಿತು ಅಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಹೇಳಿದರು. ವಿದ್ಯುತ್ ಸಂಪರ್ಕಕ್ಕೆ ಸಂಬಂಧಿಸಿದ ಬಾಕಿ ಕಾಮಗಾರಿಗಳನ್ನು ಕೆಇಬಿ ಅಧಿಕಾರಿಗಳು ತ್ವರಿತವಾಗಿ ಪೂರ್ಣಗೊಳಿಸಬೇಕು. ಅರಣ್ಯ ಇಲಾಖೆಯಿಂದ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ಬಾಕಿ ಇರುವ ಕಡೆ ಅವುಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಬೇಕು. ಕುಡಿಯುವ ನೀರಿನ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಇಲಾಖೆಗಳ ನಡುವೆ ಸಮನ್ವಯ ಇರಬೇಕು ಎಂದು ಸೂಚಿಸಿದರು. ಎನ್‌ಡಿಆರ್‌ಎಫ್ ಅಡಿಯಲ್ಲಿ ಟಾಸ್ಕ್‌ಫೋರ್ಸ್ ಮೂಲಕ ಅನುದಾನ ಒದಗಿಸುವುದಾಗಿ ಸಚಿವರು ತಿಳಿಸಿರುವ ಹಿನ್ನೆಲೆಯಲ್ಲಿ, ತಾಲೂಕಿನಲ್ಲಿ ಅಗತ್ಯವಿರುವ ಕಾಮಗಾರಿಗಳ ಕುರಿತು ಸಭೆಯಲ್ಲಿ ಚರ್ಚಿಸಲಾಗಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಮಸ್ಯೆಗಳ ನಿಖರ ಮಾಹಿತಿ ಪಡೆದು, ಅವುಗಳ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಕ್ರಿಯಾ ಯೋಜನೆ ರೂಪಿಸಿ ಜಿಲ್ಲಾಧಿಕಾರಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಸ್ಥಳೀಯ ಅಧಿಕಾರಿಗಳಿಗೆ ಗ್ರಾಮಗಳ ಸಮಸ್ಯೆಗಳ ಬಗ್ಗೆ ಹೆಚ್ಚಿನ ಅರಿವಿರುವುದರಿಂದ ಅವರ ಸಲಹೆಗಳನ್ನು ಪಡೆದು ಕಾಲಮಿತಿಯೊಳಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.ಸಭೆಯಲ್ಲಿ ತಾಲೂಕು ಕಾರ್ಯನಿರ್ವಹಣಾಧಿಕಾರಿ ಗಂಗಾಧರ್, ತಹಸೀಲ್ದಾರ್ ಸುಪ್ರೀತಾ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಹರೀಶ್, ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಆದಿತ್ಯ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.