ಫಸಲ್ ಬೀಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸಿ: ನಲಿನ್ ಅತುಲ್

KannadaprabhaNewsNetwork | Published : Oct 24, 2024 12:40 AM

ಸಾರಾಂಶ

ಬೆಳೆ ಕಟಾವಿನ ನಂತರದಲ್ಲಿ ಸಂಭವಿಸುವ ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ, ಜಿಲ್ಲಾ ಮಟ್ಟದ ಸಭೆ

ಕನ್ನಡಪ್ರಭ ವಾರ್ತೆ ಕೊಪ್ಪಳ

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕ್ರಮ ವಹಿಸುವಂತೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದ್ದಾರೆ.

2024-25ನೇ ಸಾಲಿನ ಹಿಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರಾಕೃತಿಕ ದುರಂತ ಮತ್ತು ಹವಾಮಾನ ವೈಪರೀತ್ಯಗಳಿಂದ ರೈತರು ಬೆಳೆದ ಬೆಳೆಗಳಿಗೆ ಅಪಾಯ ಉಂಟಾದಾಗ ರೈತರನ್ನು ರಕ್ಷಿಸುವ ಮಾಧ್ಯಮವೇ ಬೆಳೆ ವಿಮೆಯಾಗಿದ್ದು, ಈ ಹಿನ್ನೆಲೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಪ್ರಾರಂಭಿಸಲಾದ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲು ಬೀಮಾ ಯೋಜನೆ ಜಾರಿಗೆ ತರಲಾಯಿತು. ಯೋಜನೆಯಡಿ ಮೊಬೈಲ್ ಆಧಾರಿತ ತಂತ್ರಜ್ಞಾನ ಬಳಸಿಕೊಂಡು ಬೆಳೆ ಕಟಾವು ಪ್ರಯೋಗಗಳ ಮೂಲಕ ವಾಸ್ತವಿಕ ಇಳುವರಿಯನ್ನು ಕಂಡು ಹಿಡಿಯಲಾಗುತ್ತಿದ್ದು, ಬೆಳೆ ಕಟಾವಿನ ನಂತರದಲ್ಲಿ ಸಂಭವಿಸುವ ಬೆಳೆ ನಷ್ಟಕ್ಕೆ ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು. ಈ ಯೋಜನೆಯಲ್ಲಿ ಪ್ರತಿಕೂಲ ಹವಾಮಾನ ಪರಿಸ್ಥಿತಿಗಳಿಂದ ಅಧಿಸೂಚಿತ ಘಟಕದಲ್ಲಿ ಶೇ. 75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾ ಮೊತ್ತದ ಗರಿಷ್ಟ ಶೇ. 25 ರಷ್ಟು ಪರಿಹಾರವನ್ನು ವಿಮಾ ಸಂಸ್ಥೆಯು ವಿಮೆ ಮಾಡಿಸಿದ ರೈತರಿಗೆ ಒದಗಿಸಬೇಕು ಎಂದರು.

ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯ ಅನುಷ್ಠಾನದಲ್ಲಿ ವಿವಿಧ ಇಲಾಖೆ ಮತ್ತು ಸಂಸ್ಥೆಗಳ ಪಾತ್ರ ಪ್ರಮುಖವಾಗಿದ್ದು, ಅಧಿಸೂಚಿತ ಬೆಳೆಗಳು ಮತ್ತು ಘಟಕಗಳ ಬಗ್ಗೆ ಬ್ಯಾಂಕುಗಳು, ರೈತ ಸಂಪರ್ಕ ಕೇಂದ್ರಗಳ ಮತ್ತು ಗ್ರಾಮ ಪಂಚಾಯಿತಿ ಕಚೇರಿಗಳ ಸೂಚನಾ ಫಲಕಗಳ ಮೇಲೆ ಪ್ರಕಟಿಸಿ ಯೋಜನೆಯ ಕುರಿತು ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಇದರ ಜೊತೆಗೆ ಪ್ರಚಾರ ಕಾರ್ಯ ಕೈಗೊಂಡು ರೈತರಿಗೆ ತಿಳುವಳಿಕೆ ನೀಡಬೇಕು. ಯೋಜನೆಯ ಬಗ್ಗೆ ಕೃಷಿ ಅಭಿಯಾನ ಕಾರ್ಯಕ್ರಮದಲ್ಲಿ, ಗ್ರಾಮ ಸಭೆಗಳಲ್ಲಿ ಹಾಗೂ ಜನಸ್ಪಂದನ ಸಭೆಗಳಲ್ಲಿಯೂ ಮಾಹಿತಿ ನೀಡಬೇಕು. ಇಲಾಖೆಯ ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮತ್ತು ಜಂಟಿ ಕೃಷಿ ನಿರ್ದೇಶಕರ ಕಚೇರಿಗಳಿಗೆ ಭೇಟಿ ನೀಡುವ ರೈತರಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡುವಂತೆ ಜಲ್ಲಾಧಿಕಾರಿಗಳು ಸೂಚನೆ ನೀಡಿದರು.

ಜಿಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಮಾತನಾಡಿ, ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯಡಿ ಟಾಟಾ ಎಐಜಿ ಜನರಲ್ ಇನ್ಸೂರೆನ್ಸ್ ಕಂಪನಿ ಲಿಮಿಟೆಡ್, ಕೊಪ್ಪಳ ಜಿಲ್ಲೆಗೆ ಆಯ್ಕೆಯಾಗಿದೆ. ಇನ್ಸೂರೆನ್ಸ್ ಕಂಪನಿಯವರು ಕೃಷಿ ಇಲಾಖೆಯಿಂದ ಇಳುವರಿ ಮಾಹಿತಿ ಪಡೆದು ಬೆಳೆವಿಮಾ ನಷ್ಟ ಪರಿಹಾರವನ್ನು ಲೆಕ್ಕ ಹಾಕಬೇಕು. ಜಿಲ್ಲಾ ಮಟ್ಟದಲ್ಲಿ ಹಾಗೂ ತಾಲೂಕು ಮಟ್ಟಗಳಲ್ಲಿ ಯೋಜನೆಯನ್ನು ಉತ್ತಮವಾಗಿ ಅನುಷ್ಠಾನಗೊಳಿಸಲು ಮತ್ತು ರೈತರ ಬೆಳೆ ವಿಮೆ ಸಮಸ್ಯೆಗಳನ್ನು ಬಗೆಹರಿಸಲು ಕೃಷಿ ಪದವೀಧರರನ್ನು ನೇಮಿಸಬೇಕು. ಬೆಳೆ ಕಟಾವು ಪ್ರಯೋಗಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಮಾಹಿತಿ ನೀಡಿದರು.ಪೋಸ್ಟರ್ ಬಿಡುಗಡೆ:

2024-25ನೇ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬೀಮಾ ಯೋಜನೆಯನ್ನು ಹಿಂಗಾರು ಹಂಗಾಮಿನಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಕೊಪ್ಪಳ ಕೃಷಿ ಇಲಾಖೆಯಿಂದ ಮುದ್ರಿಸಿದ ಗ್ರಾಪಂ ಮಟ್ಟದಲ್ಲಿ ಅಧಿಸೂಚಿತ ಬೆಳೆಗಳ ವಿವರ, ರೈತರು ಬೆಳೆ ವಿಮೆ ಮಾಡಿಸಬೇಕಾದ ಕ್ರಮಗಳು ಸೇರಿದಂತೆ ಇತರ ಮಾಹಿತಿಯ ಪೋಸ್ಟರ್‌ನ್ನು ಇದೆ ವೇಳೆ ಜಿಲ್ಲಾಧಿಕಾರಿ ಬಿಡುಗಡೆ ಮಾಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ, ಜಿಪಂ ಯೋಜನಾ ನಿರ್ದೇಶಕ ಪ್ರಕಾಶ ವಡ್ಡರ, ಕೊಪ್ಪಳ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೃಷ್ಣ ಉಕ್ಕುಂದ್, ಪಶು ಇಲಾಖೆ ಉಪನಿರ್ದೇಶಕ ಡಾ. ಪಿ.ಎಂ. ಮಲ್ಲಯ್ಯ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಸುಧಾಕರ ಮಾನೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರು, ಇನ್ಸೂರೆನ್ಸ್ ಕಂಪನಿಯ ಪ್ರತಿನಿಧಿಗಳು, ಕೃಷಿ ಇಲಾಖೆಯ ವಿವಿಧ ತಾಲೂಕುಗಳ ಸಹಾಯಕ ನಿರ್ದೇಶಕರು ಮತ್ತು ಇತರರಿದ್ದರು.

Share this article