ಗದಗ: ಜಿಲ್ಲೆಯಲ್ಲಿ ನ. 1ರಂದು ಕನ್ನಡ ರಾಜ್ಯೋತ್ಸವವನ್ನು ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವ ಆಚರಣೆಯ ಕುರಿತು ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ, ಯಾವುದೇ ಲೋಪಗಳಿಲ್ಲದಂತೆ ಆಚರಿಸಲು ವಿವಿಧ ಸಮಿತಿಗಳನ್ನು ರಚಿಸಲಾಗಿದ್ದು, ಸಮಿತಿಯವರು ವಿಶೇಷ ಆಸಕ್ತಿಯಿಂದ ಕೆಲಸ ನಿರ್ವಹಿಸಬೇಕು ಎಂದು ಸೂಚಿಸಿದರು.ಈ ವರ್ಷವೂ ಕನ್ನಡ ರಾಜ್ಯೋತ್ಸವದ ದಿನದ ಹಿಂದಿನ ದಿನ ಹಾಗೂ ಕನ್ನಡ ರಾಜ್ಯೋತ್ಸವದ ದಿನದ ಎರಡು ದಿನ ಸರ್ಕಾರಿ ಕಚೇರಿ ಹಾಗೂ ನಗರದ ವಿವಿಧ ವೃತ್ತಗಳಲ್ಲಿ ಸ್ವಚ್ಛತೆಯೊಂದಿಗೆ ವಿದ್ಯುತ್ ದೀಪಾಲಂಕಾರಕ್ಕೆ ಕ್ರಮ ಕೈಗೊಳ್ಳಬೇಕು.
ಅಂದು ಬೆಳಗ್ಗೆ 7.30ಕ್ಕೆ ಗದಗ-ಬೆಟಗೇರಿ ನಗರಸಭೆ ಪಪೂ ಕಾಲೇಜು ಆವರಣದಿಂದ ತಾಯಿ ಭುವನೇಶ್ವರಿಯ ಮೆರವಣಿಗೆಯು ವಿವಿಧ ವೃತ್ತಗಳಲ್ಲಿ ಸಂಚರಿಸಿ ನಂತರ ಜಿಲ್ಲಾ ಕ್ರೀಡಾಂಗಣಕ್ಕೆ ಬಂದು ತಲುಪಲಿದೆ. ಬೆಳಗ್ಗೆ 9ಕ್ಕೆ ನಗರದ ಕೆ.ಎಚ್. ಪಾಟೀಲ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್.ಕೆ. ಪಾಟೀಲ ಅವರು ಸಾರ್ವಜನಿಕ ಧ್ವಜಾರೋಹಣ ನೆರವೇರಿಸುವರು.ಕಾರ್ಯಕ್ರಮದಲ್ಲಿ ಎಲ್ಲ ಅಧಿಕಾರಿ ಹಾಗೂ ಸಿಬ್ಬಂದಿ ಕಡ್ಡಾಯವಾಗಿ ಹಾಜರಿರಬೇಕು. ಎಲ್ಲ ಶಾಲಾ-ಕಾಲೇಜು ಮಕ್ಕಳು ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳುವಂತೆ ಕ್ರಮ ವಹಿಸಬೇಕು ಎಂದರು.
ಪೊಲೀಸ್ ಪಡೆ, ಹೋಂಗಾರ್ಡ್, ಭಾರತ ಸೇವಾ ದಳಗಳಿಂದ ಪರೇಡ್, ಪಥ ಸಂಚಲನ ಜರುಗಲಿದೆ. ಕಾರ್ಯಕ್ರಮದ ಸ್ಥಳದ ಸ್ವಚ್ಛತೆ ಹಾಗೂ ಅತಿಥಿಗಳಿಗೆ ಆಸನದ ವ್ಯವಸ್ಥೆ, ಅಲ್ಪೋಪಹಾರದ ವ್ಯವಸ್ಥೆ ಕುರಿತು ಕ್ರಮ ಕೈಗೊಳ್ಳಬೇಕು. ಶಿಷ್ಟಾಚಾರದನ್ವಯ ಅತಿಥಿ, ಗಣ್ಯರ ಆಹ್ವಾನ ಹಾಗೂ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು.ವಿವಿಧ ರಂಗಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಪರಿಣಿತರನ್ನು ಇದೇ ಸಂದರ್ಭದಲ್ಲಿ ಸನ್ಮಾನಿಸುವ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ., ಜಿಪಂ ಯೋಜನಾಧಿಕಾರಿ ನಿರ್ಮಲಾ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರು, ಯುವಜನ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ.ಬಿ., ವಾರ್ತಾಧಿಕಾರಿ ವಸಂತ ಮಡ್ಲೂರ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.