ಕುಡಿಯುವ ನೀರು ಕೊರತೆ ಆಗದಂತೆ ಕ್ರಮ ವಹಿಸಿ

KannadaprabhaNewsNetwork | Published : May 3, 2024 1:00 AM

ಸಾರಾಂಶ

ಜಿಲ್ಲೆಯ ಯಾವುದೇ ಭಾಗದಲ್ಲಿ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಜವಾಬ್ದಾರಿ ಅರಿತು ಕ್ರಮ ವಹಿಸಲು ಮುಂದಾಗುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಜಿಲ್ಲೆಯ ಯಾವುದೇ ಭಾಗದಲ್ಲಿ ಜನರಿಗೆ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಕೊರತೆಯಾಗದಂತೆ ಜವಾಬ್ದಾರಿ ಅರಿತು ಕ್ರಮ ವಹಿಸಲು ಮುಂದಾಗುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ಜಿಲ್ಲೆಯಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ನಗರದಲ್ಲಿ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ನಡೆದ ಗೂಗಲ್ ಮೀಟ್ ಸಭೆಯಲ್ಲಿ ಅವರು ಮಾತನಾಡಿದರು. ಜನ-ಜಾನುವಾರುಗಳಿಗೆ ಕುಡಿಯುವ ನೀರಿಗೆ ತೊಂದರೆಯಾಗಬಾರದು. ನೀರಿನ ಸಮಸ್ಯೆ ಬಗ್ಗೆ ದೂರುಗಳು ಕಂಡುಬಂದ ಸಂದರ್ಭದಲ್ಲಿ ಆದ್ಯತೆ ಮೇರೆಗೆ ಪರಿಹರಿಸಬೇಕು. ಪೈಪ್‌ಲೈನ್‌ನಿಂದ ನೀರು ಅನಾವಶ್ಯಕವಾಗಿ ಪೋಲಾಗದಂತೆ ನೀರನ್ನು ಸಂರಕ್ಷಿಸಲು ಎಚ್ಚರ ವಹಿಸಬೇಕು. ಎಲ್ಲಾ ಅಧಿಕಾರಿಗಳು ಕೇಂದ್ರಸ್ಥಾನದಲ್ಲಿದ್ದು, ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಲು ಮುಂದಾಗಬೇಕು. ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ವಿಳಂಬ ಧೋರಣೆ ಸಲ್ಲದು. ಇದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದರು.

ಜಾನುವಾರುಗಳಿಗೆ ನಿಯಮಾನುಸಾರ ಮೇವು ಸಮರ್ಪಕವಾಗಿ ಲಭ್ಯವಾಗಬೇಕು. ಸಮಸ್ಯೆ ಎದುರಾಗುವ ಮೊದಲೇ ಮೇವು ದಾಸ್ತಾನು ಇರುವ ಬಗ್ಗೆ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ರೈತರಿಂದ ಈ ಬಗ್ಗೆ ಯಾವುದೇ ದೂರುಗಳು ಬರದಂತೆ ನಿಗಾ ವಹಿಸಬೇಕು. ಜನ-ಜಾನುವಾರುಗಳಿಗೆ ಕುಡಿಯುವ ನೀರು ಹಾಗೂ ಮೇವು ಒದಗಿಸಲು ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಪೂರ್ವಸಿದ್ದತಾ ಕ್ರಮಗಳನ್ನು ಅನುಸರಿಸಬೇಕು. ಈ ಕುರಿತು ಆಯಾ ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಕಂದಾಯ ನಿರೀಕ್ಷಕರು ಮಾಹಿತಿ ಕಲೆಹಾಕಬೇಕು ಎಂದು ತಿಳಿಸಿದರು.

ಪ್ರಸ್ತುತ ಬರ ಪರಿಸ್ಥಿತಿಯಲ್ಲದೆ, ಬಿಸಿಲಿನ ತಾಪ ಹೆಚ್ಚಾಗಿ ಉಷ್ಣಗಾಳಿ ಅಧಿಕವಾಗಿರುವುದರಿಂದ ಜನರು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಪಾಲಿಸಬೇಕು. ಮಧ್ಯಾಹ್ನದ ವೇಳೆ ಬಿಸಿಲು ಹೆಚ್ಚಾಗಿದ್ದು, ಬಿಸಲಾಘಾತ (ಸನ್ ಸ್ಟೋಕ್) ಸಂಭವಿಸುವ ಸಾಧ್ಯತೆ ಇರುವುದರಿಂದ ಆದಷ್ಟೂ ನೆರಳಿನ ವ್ಯವಸ್ಥೆಯಲ್ಲಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಜನರು ಮಧ್ಯಾಹ್ನದ ಸಮಯದಲ್ಲಿ ಹೊರ ಹೋಗುವುದನ್ನು ಆದಷ್ಟು ಕಡಿಮೆ ಮಾಡಿಕೊಳ್ಳಬೇಕು. ಬಿಸಿಲಾಘಾತ ತಡೆಯಲು ಮುಂಜಾಗ್ರತೆಯಾಗಿ ಜನಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಅರಿವು ಮೂಡಿಸಬೇಕು ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರು ಸೇರಿದಂತೆ ಜಾನುವಾರುಗಳಿಗೆ ಮೇವು ಸಮಸ್ಯೆಯಾಗದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಈಗಾಗಲೇ ಸೂಕ್ತ ನಿರ್ದೇಶನ ನೀಡಲಾಗಿದೆ. ಕುಡಿಯುವ ನೀರಿನ ಸಮಸ್ಯೆ ಹಾಗೂ ಮೇವು ಅಲಭ್ಯತೆ ಕುರಿತು ಅಧಿಕಾರಿಗಳು ಯಾವುದೇ ಸಬೂಬು ಹೇಳುವಂತಿಲ್ಲ. ಅನುದಾನದ ಅವಶ್ಯವಿದ್ದರೆ ತಕ್ಷಣವೇ ಅಗತ್ಯ ಪ್ರಸ್ತಾವನೆ ಸಲ್ಲಿಸಬೇಕು. ಈ ಸಂಬಂಧ ಆಯಾ ತಾಲೂಕು ತಹಸೀಲ್ದಾರರು ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ಸಮನ್ವಯ ಸಾಧಿಸಬೇಕು ಎಂದು ತಿಳಿಸಿದರು.

Share this article