ಕನ್ನಡಪ್ರಭ ವಾರ್ತೆ ಮಣಿಪಾಲಜಿಲ್ಲೆಯಲ್ಲಿ ಮುಂಬರುವ ಬೇಸಿಗೆ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗುವ ಗ್ರಾಮಗಳನ್ನು ಗುರುತಿಸಿ, ನೀರಿನ ಸಮಸ್ಯೆ ಉಂಟಾದಲ್ಲಿ ಸ್ಥಳೀಯ ನೀರಿನ ಮೂಲಗಳಿಂದ ಕುಡಿಯುವ ನೀರು ಒದಗಿಸಲು ಯೋಜನೆಗಳನ್ನು ಈಗಲೇ ರೂಪಿಸಿಕೊಂಡು ಯಾವುದೇ ನೀರಿನ ತೊಂದರೆಯಾಗದಂತೆ ಕ್ರಮವಹಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಎಂ.ಟಿ. ರೇಜು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.ಅವರು ಮಂಗಳವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಜಲಜೀವನ್ ಮಿಷನ್ ಯೋಜನೆಯಡಿ ಉಳಿದ ಕಾಮಗಾರಿಗಳನ್ನು ಆದ್ಯತೆಯ ಮೇಲೆ ಶೀಘ್ರ ಪೂರ್ಣಗೊಳಿಸಬೇಕು. ಉಡುಪಿ ನಗರಕ್ಕೆ ವರಾಹಿ ನದಿಯ ಕುಡಿಯುವ ನೀರಿನ ಕಾಮಗಾರಿಯನ್ನು ಅರಣ್ಯ ಇಲಾಖೆಯ ಅನುಮತಿ ಪಡೆದು ಪೂರ್ಣಗೊಳಿಸಬೇಕು ಎಂದರು.ಜಿಲ್ಲೆಯಲ್ಲಿ ಮುಂದಿನ 19 ವಾರಗಳಿಗಾಗುವಷ್ಟು ಜಾನುವಾರುಗಳ ಮೇವು ಲಭ್ಯವಿದೆ. ರೈತರಿಗೆ ಮೇವಿನ ಕಿಟ್‌ಗಳನ್ನು ವಿತರಿಸುವುದರೊಂದಿಗೆ ಮೇವು ಬೆಳೆಯಲು ಪ್ರೋತ್ಸಾಹಿಸಬೇಕು ಎಂದ ಅವರು, ಸಾಧ್ಯವಾದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿಯೂ ಮೇವು ಬೆಳೆಯಲು ಮುಂದಾಗಬೇಕು ಎಂದರು.ಫುಡ್ ಪ್ರೊಸೆಸ್ಸಿಂಗ್ ಯೂನಿಟ್‌ಗಳನ್ನು ತೆರೆಯಲು ಹಾಗೂ ಮಹಿಳಾ ಸ್ವಯಂ ಸಂಘಗಳ ಮೂಲಕ ಸಿದ್ಧ ಆಹಾರ ಪದಾರ್ಥಗಳ ಉತ್ಪಾದನೆಗೆ ತೊಡಗಿಸಿಕೊಳ್ಳಲು ಉತ್ತೇಜಿಸಬೇಕು ಎಂದರು.ಈ ಬಾರಿಯ ಎಸ್.ಎಸ್.ಎಲ್.ಸಿ. ಫಲಿತಾಂಶದಲ್ಲಿ ಜಿಲ್ಲೆಯು ಪ್ರಥಮ ಸ್ಥಾನ ಪಡೆಯುವಂತೆ ಕ್ರಮಕೈಗೊಳ್ಳಬೇಕು ಎಂದವರು ಸೂಚಿಸಿದರು.ಹೈಟೆಕ್ ಜಿಲ್ಲಾ ಆಸ್ಪತ್ರೆಯ ಕಾಮಗಾರಿಯ ಬಗ್ಗೆ ಮಾಹಿತಿ ಪಡೆದು ಮಾತನಾಡಿ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಪ್ರಸ್ತುತ ನಿರ್ವಹಣೆ, ಸಿಬ್ಬಂದಿಗಳ ವೇತನ ನೀಡುವ ಕುರಿತು ಹಾಗೂ ಮುಂದಿನ ದಿನಗಳಲ್ಲಿ ಅದನ್ನು ಖಾಸಗಿ ಸಹಭಾಗಿತ್ವದಲ್ಲಿ ನಡೆಸಲು ಚರ್ಚಿಸಿದರು.ಗ್ಯಾರಂಟಿ ಯೋಜನೆಯ ಸರ್ವೇ ಕಾರ್ಯವನ್ನು ಜಿಲ್ಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತೆಯರು ಕೈಗೊಳ್ಳುತ್ತಿದ್ದು, ಸರ್ವೇಕಾರ್ಯದಲ್ಲಿ ಯಾವುದೇ ರೀತಿಯ ಲೋಪದೋಷಗಳು ಆಗದಂತೆ ಹಾಗೂ ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಮಟ್ಟದ ಅನುಷ್ಠಾನಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.