ಗ್ರಾಪಂ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ: ಶಾಸಕ ಬಿ.ಕೆ ಸಂಗಮೇಶ್ವರ್ ಅಧಿಕಾರಿಗಳಿಗೆ ಸೂಚನೆ

KannadaprabhaNewsNetwork |  
Published : Jul 06, 2024, 12:48 AM IST
ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು. | Kannada Prabha

ಸಾರಾಂಶ

ಭದ್ರಾವತಿ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಶಾಸಕ ಬಿ.ಕೆ ಸಂಗಮೇಶ್ವರ್ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ನಡೆಯಿತು.

ಕನ್ನಡಪ್ರಭ ವಾರ್ತೆ ಭದ್ರಾವತಿ

ಡೆಂಘೀ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಇದರ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಕರ್ನಾಟಕ ಗ್ರಾಮೀಣ ಮೂಲಸೌರ್ಕಯ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರಾದ ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.

ಅವರು ಶುಕ್ರವಾರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಜರುಗಿದ ಕೆಡಿಪಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ಆರೋಗ್ಯಾಧಿಕಾರಿಗಳಿಗೆ ಹಾಗೂ ತಾಲೂಕು ಆಡಳಿತಕ್ಕೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಡೆಂಘೀ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿ ಪಿಡಿಓಗಳು ಆದ್ಯತೆ ಮೇರೆಗೆ ಸೂಕ್ತ ಗಮನ ಹರಿಸಬೇಕು. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಯಾವುದೇ ಪ್ರಾಣಹಾನಿಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.

ಅಭಿವೃದ್ಧಿ ಕೆಲಸಗಳಿಗೆ ತಾತ್ಕಾಲಿಕ ವಿರಾಮ ನೀಡಿದರೂ ಚಿಂತೆಯಿಲ್ಲ. ಮೊದಲು ಜನರ ಪ್ರಾಣ ಉಳಿಸುವ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ಮುಂದಾಗಬೇಕು. ನಗರಸಭೆ ಸಹಕಾರಪಡೆದು ನಗರದಲ್ಲಿ ಸೊಳ್ಳೆಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದರು.

ಗ್ರಾಮೀಣ ಭಾಗದಲ್ಲಿ ಡೆಂಘೀ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕು. ಮನೆಗಳಲ್ಲಿ ನೀರನ್ನು ಶೇಖರಿಸಿಡುವ ತೊಟ್ಟಿ ಪಾತ್ರೆಗಳನ್ನು ಮುಚ್ಚಬೇಕು. ರಾತ್ರಿ ಮಲಗುವಾಗ ಸೊಳ್ಳೆ ಪರದೆ ಬಳಸಬೇಕು. ವಾಸ ಸ್ಥಳಗಳ ಸುತ್ತಮುತ್ತ ನೀರು ನಿಲ್ಲದಂತೆ ಎಚ್ಚರವಹಿಸಬೇಕು. ಅಲ್ಲದೆ ಸ್ವಚ್ಛತೆಗೆ ಹೆಚ್ಚಿನ ಗಮನ ಹರಿಸಬೇಕು. ಸೊಳ್ಳೆನಾಶಕಗಳನ್ನು ಬಳಸಿ ಸೊಳ್ಳೆಗಳ ನಿಯಂತ್ರಣಕ್ಕೆ ಮುಂದಾಗುವಂತೆ ಜಾಗೃತಿವಹಿಸಬೇಕೆಂದು ಅರಿವು ಮೂಡಿಸಬೇಕೆಂದರು.

ತಾಲೂಕು ಆರೋಗ್ಯಾಧಿಕಾರಿಗಳು ಮಾತನಾಡಿ, ಡೆಂಗ್ಯೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಾಗೃತಿ ಮೂಡಿಸುವ ಕಾರ್ಯ ತಾಲೂಕಿನಾದ್ಯಂತ ನಿರಂತರವಾಗಿ ನಡೆಯುತ್ತಿದೆ. ಡೆಂಗ್ಯೂ ಹರಡದಂತೆ ಹೆಚ್ಚಿನ ಕ್ರಮಗಳನ್ನು ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ತಹಸೀಲ್ದಾರ್ ಕೆ.ಆರ್ ನಾಗರಾಜು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಂ. ಗಂಗಣ್ಣ ಮತ್ತು ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಉಪಸ್ಥಿತರಿದ್ದರು.

ತಾಲೂಕಿನ ಎಲ್ಲಾ ೨೨ ಗ್ರಾಮ ಪಂಚಾಯಿತಿ ಪಿಡಿಒಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಪಾಲ್ಗೊಂಡು ಸಭೆಯಲ್ಲಿ ತಮ್ಮ ಪಂಚಾಯಿತಿಗೆ ಸಂಬಂಧಿಸಿದ ಅಭಿವೃದ್ಧಿ ಕಾರ್ಯಗಳ ಮಾಹಿತಿ ನೀಡಿದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ