
ಕಾರವಾರ: ಜಿಲ್ಲೆಯಲ್ಲಿ ಅಬಕಾರಿ ಇಲಾಖೆಗೆ ಸಂಬಂಧಿಸಿದಂತೆ ನಡೆಯುತ್ತಿರುವ ಅಕ್ರಮಗಳನ್ನು ತಡೆಯುವಲ್ಲಿ ಅಬಕಾರಿ ಅಧಿಕಾರಿಗಳು ವಿಫಲವಾಗಿದ್ದು, ಈ ಅಕ್ರಮಗಳನ್ನು ಸಂಪೂರ್ಣವಾಗಿ ತಡೆಯಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು ಇಲ್ಲವಾದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಹಾಗೂ ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಉತ್ತರ ಕನ್ನಡ ಜಿಲ್ಲೆಯ ಮಾರ್ಗವಾಗಿ ಟ್ಯಾಂಕರ್‌ಗಳ ಮೂಲಕ ಅಕ್ರಮವಾಗಿ ಸ್ಪಿರಿಟ್ ಸಾಗಾಣೆಯ ಗೋವಾ ರಾಜ್ಯಕ್ಕೆ ತೆರಳುತ್ತಿದ್ದು, ಈ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬರುತ್ತಿವೆ, ಜಿಲ್ಲೆಯ ಗಡಿ ಪ್ರದೇಶಗಳಲ್ಲಿ ಅಬಕಾರಿ ಇಲಾಖೆಯ ಚೆಕ್ ಪೋಸ್ಟ್‌ಗಳು ಇದ್ದರೂ ಕೂಡಾ ಈ ಅಕ್ರಮ ಸಾಗಾಣಿಕೆ ನಡೆಯಿತ್ತಿರುವುದು ಅಬಕಾರಿ ಇಲಾಖೆ ಅಧಿಕಾರಿಗಳ ಕಾರ್ಯ ವೈಫಲ್ಯ ತೋರಿಸುತ್ತದೆ. ಈ ಅಕ್ರಮ ಸಾಗಾಟದಿಂದ ರಾಜ್ಯದ ಬೊಕ್ಕಸಕ್ಕೆ ಕೋಟ್ಯಾಂತರ ರೂಪಾಯಿಗಳ ನಷ್ಟವಾಗುತ್ತಿದೆ ಎಂದ ಸಚಿವರು, ಇದನ್ನು ತಡೆಯಲು ಅಬಕಾರಿ ಇಲಾಖೆಯಿಂದ ಅತ್ಯಂತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕು. ಈ ಘಟನೆಯು ಅಬಕಾರಿ ಅಕ್ರಮ ತಡೆಗೆ ಇರುವ ಇಲಾಖೆಯೇ ಬೇಲಿ ಇದ್ದು ಹೊಲ ಮೇಯ್ದಂತೆ ಆಗಿದೆ. ಇಂತಹ ಘಟನೆಗಳು ಮರುಕಳಿಸಿದ್ದಲ್ಲಿ ಸಂಬಂಧಪಟ್ಟ ಅಧಿಕಾರಿಗಳನ್ನು ಮನೆಗೆ ಕಳಿಸಲಾಗುವುದು ಎಂದು ಎಚ್ಚರಿಸಿದ ಸಚಿವರು, ಈ ಬಗ್ಗೆ ಪೊಲೀಸ್ ಇಲಾಖೆಯ ಮೂಲಕವೂ ಪರಿಶೀಲನೆ ಕಾರ್ಯ ನಡೆಸುವಂತೆ ತಿಳಿಸಿದರು.
ಈ ಅಬಕಾರಿ ಅಕ್ರಮದ ಕುರಿತು ಚರ್ಚಿಸಲು ಕೆ.ಡಿ.ಪಿ. ಸಭೆಗೆ ಗೈರು ಹಾಜರಾದ ಸಂಬಂಧಪಟ್ಟ ಅಬಕಾರಿ ಅಧಿಕಾರಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವರು ತಿಳಿಸಿದರು.ಜಿಲ್ಲೆಯಲ್ಲಿ ಬರ ಘೋಷಣೆಯಾಗಿರುವ ಈ ಸಂದರ್ಭದಲ್ಲಿ ಕುಡಿಯುವ ನೀರಿನ ಮತ್ತು ಮೇವಿನ ಕೊರತೆಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ ಸಚಿವರು ಈಗಾಗಲೇ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ಬಿಡುಗಡೆಯಾಗಿರುವ 1 ಕೋಟಿ ರೂಗಳಿಗೆ ಶಾಸಕರ ಅನುಮೋದನೆಯೊಂದಿಗೆ ಟಾಸ್ಕ್ ಪೋರ್ಸ್ ಮೂಲಕ ತುರ್ತು ಕಾಮಗಾರಿಗಳನ್ನು ಕೈಗೊಳ್ಳುವಂತೆ ಸೂಚಿಸಿ, ಹೆಚ್ಚಿನ ಅನುದಾನದ ಅಗತ್ಯವಿದ್ದಲ್ಲಿ ಸರ್ಕಾರದಿಂದ ಬಿಡುಗಡೆಗೆ ಕ್ರಮ ವಹಿಸಲಾಗುವುದು ಎಂದರು.
ಹಳೆಯ ಸ್ಕ್ರ್ಯಾಫ್ ಮಾಡಿದ ಬಸ್‌ಗಳಿಗೆ ಅನುಗುಣವಾಗಿ ಹೊಸ ಬಸ್ ಗಳನ್ನು ಒದಗಿಸುವಂತೆ ಕೆ.ಎಸ್.ಆರ್.ಟಿ.ಸಿ ಅಧಿಕಾರಿಗಳಿಗೆ ಸೂಚಿಸಿದ ಸಚಿವರು, ಸಿದ್ದಾಪುರದಲ್ಲಿ ಬಸ್ ಡಿಪೋ ಆರಂಭಿಸುವ ಕುರಿತಂತೆ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಸಾರಿಗೆ ಸಚಿವರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು.
ಶಿರಸಿಯ ಸರ್ಕಾರಿ ಆಸ್ಪತ್ರೆಗೆ ಅಗತ್ಯವಿರುವ ಹೊಸ ಯಂತ್ರೋಪಕರಣಗಳನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು, ಆರೋಗ್ಯ ಕೇಂದ್ರಗಳಲ್ಲಿ ಔಷಧಗಳ ಕೊರತೆಯಾಗಬಾರದು, ತಜ್ಞ ವೈದ್ಯರ ಕೊರತೆ ಇರುವ ಕಡೆಗಳಲ್ಲಿ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ಪರ್ಯಾಯ ಕ್ರಮಗಳನ್ನು ಕೈಗೊಳ್ಳಬೆಕು ಎಂದು ನಿರ್ದೇಶನ ನೀಡಿದರು.
ರಾಜ್ಯ ಸರ್ಕಾರದಿಂದ ರೈತರಿಗೆ ನೀಡುವ ರು.2500 ಗಳ ಬರ ಪರಿಹಾರ ಯೋಜನೆಯಡಿ ಜಿಲ್ಲೆಯಲ್ಲಿ ರು.2.51 ಕೋಟಿ ಮೊತ್ತ ಪಾವತಿಸಲು ಅನುಮೋದನೆಗೆ ಸಲ್ಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.
ಮುಂದಿನ ಕ್ಯಾಬಿನೆಟ್ ಸಭೆಯನ್ನು ಜಿಲ್ಲೆಯಲ್ಲಿ ಆಯೋಜನೆ ಮಾಡುವಂತೆ ಸಾಶಕ ಭೀಮಣ್ಣ ನಾಯ್ಕ ಕೋರಿದರು.